
ಬೆಂಗಳೂರು (ಜು.21) : ಹಾಲಿನ ದರ ಹೆಚ್ಚಳ, ಹೊರ ರಾಜ್ಯಗಳಲ್ಲಿ ನಂದಿನಿ ಹಾಲಿನ ಬೇಡಿಕೆ ಮತ್ತು ಹಾಲು ಉತ್ಪಾದಕ ರೈತರ ಸಮಸ್ಯೆಗಳೂ ಸೇರಿದಂತೆ ವಿವಿಧ ವಿಚಾರಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಎಂಎಫ್ ಹಾಗೂ ಹಾಲು ಒಕ್ಕೂಟಗಳ ಪದಾಧಿಕಾರಿಗಳೊಂದಿಗೆ ಶುಕ್ರವಾರ ಚರ್ಚಿಸಲಿದ್ದಾರೆ.
ಶುಕ್ರವಾರ ಸಂಜೆ 6ಕ್ಕೆ ಸಮಯ ನಿಗದಿಯಾಗಿದ್ದು, ಗೃಹ ಕಚೇರಿ ಕೃಷ್ಣಾದಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್ ನೇತೃತ್ವದಲ್ಲಿ ಹಾಲು ಒಕ್ಕೂಟಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಸಭೆಯ ನಂತರ ಹಾಲಿನ ದರ ಪ್ರತಿ ಲೀಟರ್‌ಗೆ 5 ರು. ಹೆಚ್ಚಳದ ಬಗ್ಗೆಯೂ ಅಂತಿಮ ನಿರ್ಧಾರ ಹೊರಬೀಳಲಿದೆ ಎಂದು ಕೆಎಂಎಫ್ ಮೂಲಗಳು ಮಾಹಿತಿ ನೀಡಿವೆ.
ಮನೆ ಮಹಾಲಕ್ಷ್ಮಿಗೆ ‘ಗೃಹಲಕ್ಷ್ಮಿ’ಯ ಅನುಗ್ರಹ: ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸಬೇಕಿಲ್ಲ..!
ಈ ಹಿಂದೆ ಜುಲೈ 14ರಂತೆ ಕೆಎಂಎಫ್ ಹಾಗೂ ಹಾಲು ಒಕ್ಕೂಟಗಳ ಪದಾಧಿಕಾರಿಗಳೊಂದಿಗೆ ಸಭೆ ನಿಗದಿಯಾಗಿತ್ತು. ಆದರೆ, ಮುಖ್ಯಮಂತ್ರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಭೆಯನ್ನು ತಾತ್ಕಾಲಿಕವಾಗಿ ಮುಂದೂಡಿದ್ದರು.
ಪಶು ಆಹಾರ, ಮೇವು, ವಿದ್ಯುತ್, ಸಾಗಣಿಕೆ ಸೇರಿದಂತೆ ಅಗತ್ಯ ವಸ್ತುಗಳ ದರ ಏರಿಕೆಯಿಂದ ಹೈನೋದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಖಾಸಗಿ ಸಂಸ್ಥೆಗಳು ರೈತರಿಗೆ ಹೆಚ್ಚಿನ ದರ ಕೊಟ್ಟು ಹಾಲು ಖರೀದಿಸುತ್ತಿವೆ. ಹಾಗಾಗಿ ರೈತರು ಖಾಸಗಿ ಸಂಸ್ಥೆಗಳಿಗೆ ಹಾಲು ಹಾಕುತ್ತಿದ್ದಾರೆ. ಇದರಿಂದ ರಾಜ್ಯದ ಹಾಲು ಒಕ್ಕೂಟಗಳಿಗೆ ಬೇಡಿಕೆಗೆ ತಕ್ಕಂತೆ ಹಾಲು ಸಂಗ್ರಹಣೆ ಆಗುತ್ತಿಲ್ಲ. ಈ ನಡುವೆ ಹೊರ ರಾಜ್ಯಗಳಲ್ಲಿ ನಂದಿನಿ ಹಾಲು ಮತ್ತು ತುಪ್ಪಕ್ಕೆ ಬೇಡಿಕೆಯೂ ಜಾಸ್ತಿಯಾಗಿದೆ. ರಾಜ್ಯ ಸರ್ಕಾರ ರೈತರ ಸಮಸ್ಯೆಗೆ ಸ್ಪಂದಿಸಿ, ಹಾಲಿನ ದರವನ್ನು ಪ್ರತಿ ಲೀಟರ್‌ಗೆ 5 ರು.ಹೆಚ್ಚಿಸಬೇಕು ಎಂಬುದು ಹಾಲು ಒಕ್ಕೂಟಗಳ ಪ್ರಮುಖ ಬೇಡಿಕೆಯಾಗಿದ್ದು, ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಗೃಹಲಕ್ಷ್ಮಿ ಯೋಜನೆ ಅಧಿಕೃತ ಆರಂಭ: ಮೊದಲ ಫಲಾನುಭವಿ ಮಹಿಳೆಯರು ಇವರೇ.. ಸುಮಾ, ಆನಂದಿ, ಸತ್ಯಾ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ