ನ್ಯೂಸ್ ರೌಂಡಪ್: ಈ ದಿನದ 5 ಪ್ರಮುಖ ಸುದ್ದಿಗಳು

Published : Oct 13, 2025, 07:22 AM IST
todays news roundup 13 October 2025

ಸಾರಾಂಶ

Top News Today 13 October 2025: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಊಹಾಪೋಹಗಳ ನಡುವೆ ಸಿದ್ದರಾಮಯ್ಯ ಸಚಿವರಿಗೆ ಔತಣಕೂಟ ಏರ್ಪಡಿಸಿದ್ದಾರೆ.  ಈ ದಿನದ 5 ಪ್ರಮುಖ ಸುದ್ದಿಗಳು ಇಲ್ಲಿವೆ.

1.5 ವರ್ಷ ಸಿದ್ದುವೇ ಸಿಎಂ, ಡಿಸೆಂಬರ್‌ಗೆ ಸಚಿವ ಸಂಪುಟ ವಿಸ್ತರಣೆ : ಯತೀಂದ್ರ

ರಾಜ್ಯ ಸರ್ಕಾರದಲ್ಲಿ ನವೆಂಬರ್‌ನಲ್ಲಿ ಕ್ರಾಂತಿಯಾಗಲಿದೆ, ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆಗುತ್ತಾರೆ ಎನ್ನುವ ಕುರಿತಂತೆ ಕೇಳಿ ಬರುತ್ತಿರುವ ಮಾತುಗಳು ಕೇವಲ ಉಹಾಪೋಹ. ಈ ಬಗ್ಗೆ ಹೈಕಮಾಂಡ್‌ ಮಟ್ಟದಲ್ಲಿ ಏನು ಮಾತುಕತೆ ನಡೆದಿದೆ ಎನ್ನುವುದರ ಕುರಿತು ಯಾರಿಗೂ ಗೊತ್ತಿಲ್ಲ. ಊಹಾಪೋಹದ ಆಧಾರದ ಮೇಲೆಯೇ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ನನಗೆ ತಿಳಿದಿರುವ ಹಾಗೆ ಅಧಿಕಾರ ಹಂಚಿಕೆಯ ಚರ್ಚೆಯೇ ಆಗಿಲ್ಲ. ನಮ್ಮ ಪಕ್ಷದಲ್ಲಿ ಸಾಕಷ್ಟು ಹಿರಿಯರು ಸಿಎಂ ಪದವಿಗೆ ಅರ್ಹರಾಗಿದ್ದಾರೆ. ಅದಕ್ಕಾಗಿ ಅವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು.

2.ಸಚಿವರಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಔತಣಕೂಟ

ಬೆಂಗಳೂರು : ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ನವೆಂಬರ್ ಕ್ರಾಂತಿಯ ಸದ್ದು ಕೇಳಿಬರುತ್ತಿರುವ ಮಧ್ಯೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಸೋಮವಾರ ಔತಣಕೂಟ ಆಯೋಜಿಸಿದ್ದು, ತೀವ್ರ ಕುತೂಹಲ ಮೂಡಿಸಿದೆ. ಔತಣಕೂಟದಲ್ಲಿ ರುಚಿಕರ ಊಟ ಮಾತ್ರವಲ್ಲ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆಯಾಗುವ ಸಾಧ್ಯತೆಯಿದೆ. ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯಾಗುತ್ತಿರುವ ನವೆಂಬರ್‌ ಕ್ರಾಂತಿ, ಸಂಪುಟ ಪುನರ್‌ ರಚನೆ ವಿಚಾರದ ಸತ್ಯಾಸತ್ಯತೆ ಎಷ್ಟು ಎಂಬ ಮಾಹಿತಿ ಸಚಿವರಿಗೆ ದೊರೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

3. ದೇಶದಲ್ಲಿ 1 ಲಕ್ಷ ಏಕ ಶಿಕ್ಷಕ ಶಾಲೆ : ಕರ್ನಾಟಕ ನಂ.5

ನವದೆಹಲಿ: ದೇಶದ 1 ಲಕ್ಷಕ್ಕೂ ಅಧಿಕ ಏಕೋಪಾಧ್ಯಾಯ ಶಾಲೆಗಳಲ್ಲಿ 33 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಅತಿ ಹೆಚ್ಚು ಏಕೋಪಾಧ್ಯಾಯ ಶಾಲೆಗಳನ್ನು ಹೊಂದಿರುವ ರಾಜ್ಯಗಳ ಪೈಕಿ ಕರ್ನಾಟಕ 5ನೇ ಸ್ಥಾನದಲ್ಲಿದೆ ಎಂದು ಶಿಕ್ಷಣ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ. 2024-25ನೇ ಶೈಕ್ಷಣಿಕ ವರ್ಷದಲ್ಲಿ, ಭಾರತದಲ್ಲಿ 1,04,125 ಶಾಲೆಗಳು ಒಬ್ಬರೇ ಶಿಕ್ಷಕರಿಂದ ಕಾರ್ಯನಿರ್ವಹಿಸುತ್ತಿವೆ. ಇಂಥ ಶಾಲೆಗಳಲ್ಲಿ, ಪ್ರತಿ ಶಾಲೆಗೆ ಸರಾಸರಿ 34 ವಿದ್ಯಾರ್ಥಿಗಳಂತೆ ಒಟ್ಟು 33,76,769 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ದೇಶದಲ್ಲಿ ಅತಿ ಹೆಚ್ಚು ಏಕ-ಶಿಕ್ಷಕ ಶಾಲೆಗಳು ಆಂಧ್ರಪ್ರದೇಶದಲ್ಲಿವೆ (12,912). ಉತ್ತರ ಪ್ರದೇಶ (9,508), ಜಾರ್ಖಂಡ್ (9,1720), ಮಹಾರಾಷ್ಟ್ರ (8,152), ಕರ್ನಾಟಕ (7,349) ಮತ್ತು ಲಕ್ಷದ್ವೀಪ (7,217) ನಂತರದ ಸ್ಥಾನದಲ್ಲಿವೆ. ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು (6,24,327) ಏಕ-ಶಿಕ್ಷಕ ಶಾಲೆಗಳಲ್ಲಿ ಪ್ರವೇಶ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ.

4.ಕಾಂಗ್ರೆಸ್‌ ನಿಷೇಧ ಆಗಬೇಕು: ರಾಜ್ಯ ಸರ್ಕಾರದ ವಿರುದ್ಧ ಆರ್‌.ಅಶೋಕ್‌ ಆಕ್ರೋಶ

ಭಯೋತ್ಪಾದಕರಿಗೆ ಕುಮ್ಮಕ್ಕು ನೀಡುವ ಕಾಂಗ್ರೆಸ್‌ ಪಕ್ಷವನ್ನು ಮೊದಲು ನಿಷೇಧ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಆರ್‌ಎಸ್‌ಎಸ್‌ ನಿಷೇಧ ಮಾಡುವ ಅಧಿಕಾರವೇ ಇಲ್ಲ. ಕಾಂಗ್ರೆಸ್‌ ನಾಯಕರು ಬುದ್ಧಿ ಭ್ರಮಣೆಯಾದಂತೆ ಸುಮ್ಮನೆ ಮಾತನಾಡುವ ಚಟ ತೋರಿಸುತ್ತಿದ್ದಾರೆ. ದೇಶದ ಪ್ರಧಾನಿ, ರಾಷ್ಟ್ರಪತಿ, ಉಪರಾಷ್ಟ್ರಪತಿ, ರಾಜ್ಯದ ರಾಜ್ಯಪಾಲರು, ಕೇಂದ್ರ ಗೃಹ ಸಚಿವರು ಹೀಗೆ ಎಲ್ಲರೂ ರಾಷ್ಟ್ರೀಯ ಸ್ವಯಂಸೇವಕ ಸಂಘದವರೇ ಆಗಿದ್ದಾರೆ. ಆರ್‌ಎಸ್‌ಎಸ್‌ ಮುಟ್ಟಲು ಯಾರಿಗೂ ಸಾಧ್ಯವಿಲ್ಲ ಎಂದು ಹೇಳಿದರು.

5.ಭಾರತದ ಶಿಕ್ಷಣ ವ್ಯವಸ್ಥೆಯಲ್ಲಿ ಬರೀ ಮೇಲ್ಜಾತಿಯವರಿಗೆ ಆದ್ಯತೆ: ರಾಹುಲ್‌ ಗಾಂಧಿ

ನವದೆಹಲಿ: ಭಾರತದ ಶಿಕ್ಷಣ ವ್ಯವಸ್ಥೆಯಲ್ಲಿ ಮೇಲ್ವರ್ಗದವರದ್ದೇ ಪ್ರಾಬಲ್ಯವಿದ್ದು, ಮಧ್ಯಮ ಮತ್ತು ಕೆಳವರ್ಗದವರಿಗೆ ಪ್ರಾತಿನಿಧ್ಯವೇ ಇಲ್ಲ. ಮುಕ್ತ ಹಾಗೂ ವೈಜ್ಞಾನಿಕ ಆಲೋಚನೆಗೆ ಅವಕಾಶವೇ ಇಲ್ಲ’ ಎಂದು ಚಿಲಿ ಪ್ರವಾಸದಲ್ಲಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ‘ಭಾರತದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿಯಾಗುತ್ತಿದೆ’ ಎಂಬ ಹೇಳಿಕೆಯ ಬೆನ್ನಲ್ಲೇ ಬಂದ ಈ ಉಕ್ತಿಗೆ ಬಿಜೆಪಿ ಪ್ರತಿಕ್ರಿಯಿಸಿ, ವಿದೇಶದಲ್ಲಿ ನಿಂತು ಭಾರತದ ವಿರುದ್ಧ ಅವರು ನೀಡಿದ ಹೇಳಿಕೆಯನ್ನು ಖಂಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪರಪ್ಪನ ಅಗ್ರಹಾರ ಜೈಲಿನ ಅಕ್ರಮ ವಿಡಿಯೋ ವೈರಲ್: ರೇಪಿಸ್ಟ್ ಉಮೇಶ್ ರೆಡ್ಡಿ ಬಳ್ಳಾರಿಗೆ ಶಿಫ್ಟ್ ರಿಕ್ವೆಸ್ಟ್!
ಹಾವೇರಿ: ಮತ್ತೆ ಮುನ್ನಲೆಗೆ ಬಂದ ಹಿಜಾಬ್ VS ಕೇಸರಿ ವಿವಾದ: ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪರಸ್ಪರ ಸವಾಲು!