ವಿಶ್ವವಿಖ್ಯಾತ ಮೈಸೂರು ದಸರಾ ಅಂಗವಾಗಿ ಸೋಮವಾರ ಅರಮನೆಯಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಆಯುಧಪೂಜೆ ನೆರವೇರಿಸಲಿದ್ದಾರೆ. ಯದುವೀರ ಅವರು ಶುಭ್ರವಸ್ತ್ರಧಾರಿಯಾಗಿ ಅರಮನೆಯಲ್ಲಿನ ಆಯುಧಗಳಿಗೆ ಪೂಜೆ ನೆರವೇರಿಸಿ, ಖಾಸಗಿ ದರ್ಬಾರ್ ನಡೆಸಲಿದ್ದಾರೆ.
ಮೈಸೂರು (ಅ.23) : ವಿಶ್ವವಿಖ್ಯಾತ ಮೈಸೂರು ದಸರಾ ಅಂಗವಾಗಿ ಸೋಮವಾರ ಅರಮನೆಯಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಆಯುಧಪೂಜೆ ನೆರವೇರಿಸಲಿದ್ದಾರೆ. ಯದುವೀರ ಅವರು ಶುಭ್ರವಸ್ತ್ರಧಾರಿಯಾಗಿ ಅರಮನೆಯಲ್ಲಿನ ಆಯುಧಗಳಿಗೆ ಪೂಜೆ ನೆರವೇರಿಸಿ, ಖಾಸಗಿ ದರ್ಬಾರ್ ನಡೆಸಲಿದ್ದಾರೆ. ಈ ಮಧ್ಯೆ, ಮಂಗಳವಾರ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ನಡೆಯಲಿದ್ದು, ಇದರೊಂದಿಗೆ ಕಳೆದ ಹತ್ತು ದಿನಗಳಿಂದ ಸಾಂಪ್ರದಾಯಿಕವಾಗಿ ನಡೆಯುತ್ತಿರುವ ನಾಡಹಬ್ಬಕ್ಕೆ ತೆರೆ ಬೀಳಲಿದೆ.
ಜಂಬೂಸವಾರಿಯನ್ನು ಕಣ್ತುಂಬಿಕೊಳ್ಳಲು, ಚಿನ್ನದ ಅಂಬಾರಿಯಲ್ಲಿ ಸಾಗುವ ನಾಡದೇವತೆ ಚಾಮುಂಡೇಶ್ವರಿಗೆ ಭಕ್ತಿಭಾವದಿಂದ ನಮಿಸಲು ದೇಶ-ವಿದೇಶಗಳ ಸಹಸ್ರಾರು ಪ್ರವಾಸಿಗರು ಸಾಂಸ್ಕೃತಿಕ ನಗರಿಯತ್ತ ಧಾವಿಸುತ್ತಿದ್ದು, ಅರಮನೆ ನಗರಿ ರಂಗೇರುತ್ತಿದೆ. ಜಂಬೂಸವಾರಿ ವೀಕ್ಷಣೆಗೆ ಆಗಮಿಸುವ ಅತಿ ಗಣ್ಯರು, ಗಣ್ಯರು, ಆಹ್ವಾನಿತರು, ಗೋಲ್ಡ್ ಕಾರ್ಡ್ ಹಾಗೂ ಟಿಕೆಟ್ ಹೊಂದಿರುವವರಿಗೆ ಅರಮನೆ ಆವರಣದಲ್ಲಿ ಆಸನದ ವ್ಯವಸ್ಥೆ ಮಾಡಲಾಗಿದೆ.
ನಾಡಹಬ್ಬ ದಸರಾ: ಸಂಭ್ರಮದ ಆಯುಧಪೂಜೆಗೆ ನಗರ ಸಜ್ಜು!
ಜಂಬೂಸವಾರಿಗೆ ಸಿಎಂರಿಂದ ಚಾಲನೆ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಮಧ್ಯಾಹ್ನ 1.46 ರಿಂದ 2.08 ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಪೂಜೆ ನೆರವೇರಿಸುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ. ಬಳಿಕ ನಂದಿಧ್ವಜ, ವೀರಗಾಸೆ, ನಾದಸ್ವರ, ನೌಫತ್, ನಿಶಾನೆ ಆನೆಗಳು, ಎನ್‌ಸಿಸಿ, ಸ್ಕೌಟ್ಸ್, ಗೈಡ್ಸ್, ವಿವಿಧ ಪೊಲೀಸ್ ತುಕಡಿಗಳು, ನಾಡಿನ ಕಲೆ, ಸಂಸ್ಕೃತಿ ಬಿಂಬಿಸುವ ಸ್ತಬ್ಧ ಚಿತ್ರಗಳು, ಜಾನಪದ ಕಲಾ ತಂಡಗಳು ಮೆರವಣಿಗೆಯಲ್ಲಿ ಸಾಗಲಿವೆ.
ಸಂಜೆ 4.40 ರಿಂದ 5 ರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಅರಮನೆ ಒಳಾವರಣದ ವಿಶೇಷ ವೇದಿಕೆಯಲ್ಲಿ ನಿಂತು ಗಜರಾಜ ಅಭಿಮನ್ಯು ಹೊರಲಿರುವ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿರುವ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹಾಗೂ ಇತರ ಗಣ್ಯರು ಉಪಸ್ಥಿತರಿರಲಿದ್ದಾರೆ.
ಉಗ್ರರು ನುಸುಳಿರುವ ಬಗ್ಗೆ ಮಾಹಿತಿ, ದಸರಾ ಮೇಲೆಯೂ ಟೆರರಿಸ್ಟ್‌ಗಳ ಕರಿನೆರಳು? ತುರ್ತು ಭದ್ರತೆ ಹೆಚ್ಚಳ
ಬಳಿಕ, ಮೆರವಣಿಗೆ 5 ಕಿ.ಮೀ. ಸಾಗಿ ಬನ್ನಿಮಂಟಪ ತಲುಪಲಿದೆ. ಅಲ್ಲಿ ಸಂಜೆ 7.30ಕ್ಕೆ ಪಂಜಿನ ಕವಾಯತು ನಡೆಯಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಗೌರವ ವಂದನೆ ಸ್ವೀಕರಿಸುವರು. ಸಿಎಂ ಸೇರಿದಂತೆ ಸಂಪುಟದ ಹಲವು ಸದಸ್ಯರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಇದರೊಂದಿಗೆ ಈ ಬಾರಿಯ ನಾಡಹಬ್ಬ ಮೈಸೂರು ದಸರೆಗೆ ತೆರೆ ಬೀಳಲಿದೆ.