
ಬೆಂಗಳೂರು (ಆ.4): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಲು ಮುಂದಾಗಿರುವ ಸಾರಿಗೆ ನೌಕರರ ಮನವೊಲಿಕೆಗೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಆ.5ರಿಂದ ಕರೆ ನೀಡಿರುವ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ಭವಿಷ್ಯ ನಿರ್ಧಾರವಾಗಲಿದೆ.
ವೇತನ ಹೆಚ್ಚಳ ಹಾಗೂ ವೇತನ ಹೆಚ್ಚಳ ಹಿಂಬಾಕಿ ಪಾವತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ.5ರಂದು (ಮಂಗಳವಾರ) ಬೆಳಗ್ಗೆ 6 ಗಂಟೆಯಿಂದ ರಾಜ್ಯದ ಎಲ್ಲಾ ಸಾರಿಗೆ ನಿಗಮಗಳ ನೌಕರರು ಮುಷ್ಕರ ಹೂಡುವುದಾಗಿ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಸಾರಿಗೆ ನೌಕರರ ಮನವೊಲಿಕೆಗೆ ಕಾರ್ಮಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಂಧಾನ ಸಭೆ ವಿಫಲವಾಗಿತ್ತು. ಹೀಗಾಗಿ ಸೋಮವಾರ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮುಷ್ಕರಕ್ಕೆ ಕರೆ ನೀಡಿರುವ ಸಾರಿಗೆ ನೌಕರರ ಸಂಘಟನೆ ಜತೆ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿಗಳು ವೇತನ ಹೆಚ್ಚಳ ಹಾಗೂ ವೇತನ ಹಿಂಬಾಕಿ ಪಾವತಿ ಬೇಡಿಕೆಗೆ ಸ್ಪಂದಿಸುವ ಸಾಧ್ಯತೆ ಕಡಿಮೆ. ಬದಲಿಗೆ ಸಣ್ಣ ಮಟ್ಟದ ಪರಿಹಾರ ನೀಡಬಹುದು ಎಂದು ಹೇಳಲಾಗಿದೆ.
ಒಂದು ವೇಳೆ ಮುಖ್ಯಮಂತ್ರಿಗಳ ಮನವೊಲಿಕೆಗೂ ಒಪ್ಪದೆ ಮುಷ್ಕರ ಹೂಡಿದರೆ ಮುಷ್ಕರದಲ್ಲಿ ಪಾಲ್ಗೊಳ್ಳುವ ನೌಕರರಿಗೆ ವೇತನ ಪಾವತಿಸದಿರಲು ಈಗಾಗಲೇ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮಗಳು ನಿರ್ಧರಿಸಿವೆ. ಇದರ ಜತೆಗೆ ಸಾರಿಗೆ ಸೇವೆ ಸಾರ್ವಜನಿಕ ಉಪಯುಕ್ತ ಸೇವೆಯಡಿ ಬರುವ ಕಾರಣ ಮುಷ್ಕರದಲ್ಲಿ ಪಾಲ್ಗೊಳ್ಳುವ ನೌಕರರ ವಿರುದ್ಧ ಎಸ್ಮಾ ಕಾಯ್ದೆ ಜಾರಿ ಮಾಡಲು ಸೋಮವಾರದ ಸಭೆಯಲ್ಲಿ ನಿರ್ಧಾರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಸಭೆ ವಿಫಲವಾದರೆ ಸಾರಿಗೆ ಸೇವೆ ವ್ಯತ್ಯಯ:
ಸಂಧಾನ ಸಭೆ ವಿಫಲವಾದರೆ ಆ.5 ರಂದು ಬೆಳಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿವರೆಗೆ ಮುಷ್ಕರ ಶುರುವಾಗುವ ಸಾಧ್ಯತೆಯಿದೆ. ಹೀಗಾದರೆ 23,000 ಬಸ್ಸುಗಳ ಸೇವೆ ಅಲಭ್ಯವಾಗಲಿದೆ. ಬಿಎಂಟಿಸಿಯ 7000 ಬಸ್ಸು, 8,000 ಕೆಎಸ್‌ಆರ್‌ಟಿಸಿ ಬಸ್ಸು ಇತರೆ ನಿಗಮಗಳ ಏಳು ಸಾವಿರ ಬಸ್ಸು ಸೇರಿ 23,000 ಬಸ್ಸು ಹಾಗೂ 1.2 ಲಕ್ಷ ಮಂದಿ ಸೇವೆಗೆ ಅಲಭ್ಯರಾಗಲಿದ್ದಾರೆ.
ಈ ಹಿನ್ನೆಲೆಯಲ್ಲಿ ಈಗಾಗಲೇ ಸಾರಿಗೆ ಇಲಾಖೆಯು ಖಾಸಗಿ ಬಸ್ಸುಗಳ ನೆರವು ಪಡೆಯುವ ಬಗ್ಗೆ ಚರ್ಚಿಸಿದ್ದು, ಅವರು ನೆರವಾಗುವ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಸಿಎಂ ಸಭೆ ಬಗ್ಗೆಯೂ ಅಪಸ್ವರ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕರೆಯಲಾಗಿರುವ ಸಭೆ ಬಗ್ಗೆಯೂ ಕೆಎಸ್ಆರ್‌ಟಿಸಿ ನೌಕರರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪ್ರಮುಖರು ಅಪಸ್ವರ ಎತ್ತಿದ್ದಾರೆ. ಸಭೆಗೆ ಕೇವಲ 30 ನಿಮಿಷ ಕಾಲಾವಕಾಶ ನೀಡಿದ್ದು, ಇಷ್ಟು ಸಮಯದಲ್ಲಿ ನೌಕರರ ಸಮಸ್ಯೆ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿದೆಯೇ ಎಂದು ಪ್ರಶ್ನಿಸಿದ್ದಾರೆ. ಮತ್ತೊಂದೆಡೆ ಮುಷ್ಕರಕ್ಕೆ ವಿರೋಧ ವ್ಯಕ್ತಪಡಿಸಿರುವ ಸಂಘಟನೆಯೊಂದಿಗೂ ಸಿದ್ದರಾಮಯ್ಯ ಅವರು ಸಭೆ ನಡೆಸುವ ಬಗ್ಗೆ ಅಪಸ್ವರ ಕೇಳಿ ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ