
ಹುಬ್ಬಳ್ಳಿ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ "ಹಂದಿ" ಪದ ಬಳಸಿ ಅವಹೇಳನ ಮಾಡಿದ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ವಿರುದ್ಧ ಕೇಡರ್ ಕಂಟ್ರೋಲ್ ಮೂಲಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಎಚ್ಚರಿಸಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಲೋಕಾಯುಕ್ತ ಎಡಿಜಿಪಿಗೆ ಏನಾದರೂ ಸರ್ವೀಸ್ ಕಂಡಕ್ಟ್ ರೂಲ್ ಬಗ್ಗೆ ಜ್ಞಾನವಿದ್ದರೆ ತಕ್ಷಣ ಕ್ಷಮಾಪಣೆ ಕೇಳಲಿ ಎಂದು ಸೂಚಿಸಿದರು.
ಒಬ್ಬ ಜನಪ್ರತಿನಿಧಿ, ಅದರಲ್ಲೂ ಕೇಂದ್ರ ಸಚಿವರ ಬಗ್ಗೆ ಹೀಗೆ ಅಸಭ್ಯ ಭಾಷೆಯಲ್ಲಿ, ಕೆಟ್ಟ ಪದ ಬಳಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಕೇಡರ್ ಕಂಟ್ರೋಲ್ ಇದನ್ನು ಗಂಭೀರವಾಗಿ ಪರಿಗಣಿಸಲಿದೆ ಎಂದು ತಿಳಿಸಿದರು.
ಸ್ನೇಹಮಯಿ ಕೃಷ್ಣ ಯಾರು ಎಂಬುದೇ ನನಗೆ ಗೊತ್ತಿಲ್ಲ: ಸಿಎಂ
ಕುಮಾರಸ್ವಾಮಿ ಅವರು ಯಾವತ್ತೂ ಯಾರ ಬಗ್ಗೆಯೂ ಹೀಗೆ ಅಸಭ್ಯ ಭಾಷೆ ಬಳಸಿದವರಲ್ಲ. ಈ ಅಧಿಕಾರಿ ಬಗ್ಗೆಯೂ ಹಾಗೆಲ್ಲ ಏಕವಚನದಲ್ಲಿ ಮಾತನಾಡಿಲ್ಲ ಎಂದು ಜೋಶಿ ಸ್ಪಷ್ಟಪಡಿಸಿದರು.
ಎಡಿಜಿಪಿ ಇದಕ್ಕೆ ಬೆಲೆ ತೆರಬೇಕಾಗುತ್ತದೆ: ಕುಮಾರಸ್ವಾಮಿ ಅವರ ಬಗ್ಗೆ ಕೆಟ್ಟ ಪದದಲ್ಲಿ ಸಂಬೋಧನೆ ಮಾಡಿರುವುದು ಅಧಿಕಾರಿಯ ಅಹಂಕಾರದ ಪರಮಾವಧಿಯಾಗಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಜೋಶಿ ಎಚ್ಚರಿಸಿದರು.
ಸರ್ಕಾರದ ಆದೇಶವಿದ್ದರೆ ತನಿಖೆ ನಡೆಸಲಿ. ಎಚ್ ಡಿಕೆ ಆರೋಪ ಮಾಡಿದ್ದರೆ ಗೌರವಯುತ ಭಾಷೆಯಲ್ಲಿ, ಸಭ್ಯ ಪದಗಳಲ್ಲಿ ಸ್ಪಷ್ಟನೆ ಕೊಡಲಿ. ಅದು ಬಿಟ್ಟು ಈ ರೀತಿ ಕೆಟ್ಟದಾಗಿ ಸಂಬೋಧಿಸುವುದು ಯಾವುದೇ ಅಧಿಕಾರಿಗಳಿಗೂ ಶೋಭೆ ತರುವುದಿಲ್ಲ ಎಂದು ಸಚಿವ ಜೋಶಿ ಹೇಳಿದರು
ಸರ್ಕಾರದ ಆಡಳಿತಕ್ಕೆ ಹಿಡಿದ ಕೈಗನ್ನಡಿ: ಒಬ್ಬ ಜನಪ್ರತಿನಿಧಿ ಬಗ್ಗೆ ಲೋಕಾಯುಕ್ತ ಎಡಿಜಿಪಿ ಕೆಟ್ಟ ಪದ ಬಳಸಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಹಿಡಿದ ಕೈಗನ್ನಡಿ. ಇದು ಕಾಂಗ್ರೆಸ್ಗೆ ಮುಳುವಾಗಲಿದೆ. ಕಾಂಗ್ರೆಸ್ ಎಂಥೆಂಥ ಅಧಿಕಾರಿಗಳನ್ನು ಬೆಳೆಸುತ್ತಿದೆಯಲ್ಲ! ಎಂದು ಕಿಡಿ ಕಾರಿದರು. ಈ ಸರ್ಕಾರವೇ ಶಾಶ್ವತವಲ್ಲ; ಎಚ್ಚರ: ರಾಜ್ಯದಲ್ಲಿ ಈ ಸರ್ಕಾರವೇ ಶಾಶ್ವತವಾಗಿ ಇರೋದಿಲ್ಲ. ಸ್ವಲ್ಪ ಎಚ್ಚರ ವಹಿಸಿ ಮಾತನಾಡಿ, ಕೆಲಸ ಮಾಡಿ ಎಂದು ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಗೆ ಕೇಂದ್ರ ಸಚಿವ ಜೋಶಿ ಚಾಟಿ ಬೀಸಿದರು.
ಹಂದಿಗಳ ಜೊತೆ ಜಗಳಕ್ಕೆ ಇಳಿಬಾರದು ಎಂದಿದ್ದ ಎಡಿಜಿಪಿ
ಭ್ರಷ್ಟಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಗೆ, 'ಹಂದಿಗಳ ಜೊತೆ ಜಗಳ ಮಾಡಿದರೆ ನಾವು ಕೊಳಕಾಗುತ್ತೇವೆ' ಎಸ್‌ಐಟಿ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ತಿರುಗೇಟು ನೀಡಿದ್ದರು.
ಎಡಿಜಿಪಿ ಚಂದ್ರಶೇಖರ್ ಮಾನ್ಯತಾ ಟೆಕ್ ಪಾರ್ಕ್ ಬಳಿ 38 ಫ್ಲೋರ್ ಮನೆ ಕಟ್ಟುತ್ತಿದ್ದಾರೆ. ಈ ಹಿಂದೆ ಚಂದ್ರಶೇಖರ್ ಮೇಲೆ ಎಫ್‌ಐಆರ್ ಆಗಿದೆ. ತನಿಖೆ ಮಾಡಬೇಕು ಈ ಸಂಬಂಧ ಕೇಂದ್ರದ ಗೃಹ ಕಾರ್ಯದರ್ಶಿಗೂ ದೂರು ನೀಡುವುದಾಗಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದರು.
ಚನ್ನಪಟ್ಟಣ ಮೈತ್ರಿ ಟಿಕೆಟ್ ಕೈ ತಪ್ಪಿದರೆ ಕಾಂಗ್ರೆಸ್ ಸೇರ್ತಾರಾ ಸೈನಿಕ? ಸಿಪಿವೈ ಹೇಳಿದ್ದಿಷ್ಟು!
ಇದಕ್ಕೆ ಪತ್ರದ ಮೂಲಕ ತಮ್ಮ ಸಿಬ್ಬಂದಿಗೆ ಅಭಯ ನೀಡಿರುವ ಚಂದ್ರಶೇಖರ್, ಕುಮಾರಸ್ವಾಮಿ ನನ್ನ ಮೇಲೆ ಸಾಕಷ್ಟ ಆರೋಪಗಳನ್ನು ಮಾಡಿದ್ದಾರೆ. ಆತ ಪ್ರಕರಣವೊಂದರ ಆರೋಪಿ ಅಷ್ಟೆ ಎಂದು ಖಾರವಾಗಿ ಬರೆದಿದ್ದಾರೆ. ಆರೋಪಿ ಹೆಚ್ ಡಿ ಕುಮಾರಸ್ವಾಮಿ ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ತೀವ್ರ ವಾಗ್ದಾಳಿ ನಡೆಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ