
ಬೆಂಗಳೂರು (ಏ.8): ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಪ್ರಭಾರ ಮುಖ್ಯ ಮಾಹಿತಿ ಆಯುಕ್ತರಾಗಿದ್ದು, ಈಗ ನಿವೃತ್ತಿ ಹೊಂದಿರುವ ಡಾ.ಎಚ್.ಸಿ. ಸತ್ಯನ್ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯವು ನಾಡೋಜ ಪದವಿ ಪ್ರದಾನ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಕುರಿತಂತೆ ಕಮಿಟಿ ಫಾರ್ ಪಬ್ಲಿಕ್ ಅಕೌಂಟಬಿಲಿಟಿ ಸಂಸ್ಥೆಯ ಅಧ್ಯಕ್ಷ ಎಸ್.ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರ ನೇತೃತ್ವದ ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರ ಪೀಠ ಈ ಆದೇಶ ಮಾಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಸತ್ಯನ್ ಅವರ ಮೇಲೆ ಭ್ರಷ್ಟಾಚಾರದ ಆರೋಪ ಇದೆ ಎಂದರು. ಅದಕ್ಕೆ ಪ್ರತಿಕ್ರಿಯಿಸಿದ ಪೀಠ, ಭ್ರಷ್ಟಾಚಾರ ಸಾಬೀತಾಗಿದೆಯೇ? ಇಲ್ಲವೆಂದಾದರೆ ಸುಮ್ಮನೆ ಆರೋಪ ಮಾಡಬೇಡಿ. ಇಲ್ಲದಿದ್ದರೆ ದೊಡ್ಡ ಮೊತ್ತದ ದಂಡ ವಿಧಿಸಬೇಕಾಗುತ್ತದೆ. ಆಗ ನೀವು (ಅರ್ಜಿದಾರ) ಸಂಕಷ್ಟ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿತು.
ಅಲ್ಲದೇ, ಯಾರಿಗೆ ಯಾವ ಪದವಿ ಕೊಡಬೇಕು ಎಂಬ ಬಗ್ಗೆ ನಿರ್ಧರಿಸಲು ವಿಶ್ವವಿದ್ಯಾಲಯ ಸ್ವತಂತ್ರವಾಗಿದೆ. ಇಂತಹ ವಿಷಯದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಲು ಬಯಸುವುದಿಲ್ಲ. ಅಷ್ಟಕ್ಕೂ ಈ ಪ್ರಕರಣದಲ್ಲಿ ಅರ್ಜಿದಾರರ ಮೂಲಭೂತ ಹಕ್ಕುಗಳು, ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆ ಆಗುತ್ತಿಲ್ಲ. ಇಂತಹ ಅರ್ಜಿಗಳ ಸಲ್ಲಿಕೆ ನ್ಯಾಯಾಲಯದ ಅಮೂಲ್ಯ ಸಮಯ ಹಾಳು ಮಾಡುವುದು ಬಿಟ್ಟರೆ ಮತ್ತೇನೂ ಇಲ್ಲ ಎಂದು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿತು.
2026ರ ಫೆ.24ರಂದು ನಡೆದಿದ್ದ ಹಂಪಿ ಕನ್ನಡ ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವದಲ್ಲಿ ರಾಜ್ಯಪಾಲರು ಡಾ.ಎಚ್.ಸಿ.ಸತ್ಯನ್ ಅವರಿಗೆ ನಾಡೋಜ ಪ್ರದಾನ ಮಾಡಿದ್ದರು. ಅದನ್ನು ಅರ್ಜಿದಾರರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ