
ಬೆಂಗಳೂರು : ನ್ಯಾಯಾಂಗ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವನ್ನು ಸೂಕ್ತ ರೀತಿಯಲ್ಲಿ, ಪರಿಣಾಕಾರಿಯಾಗಿ ಬಳಕೆ ಮಾಡಿಕೊಳ್ಳುವ ಕುರಿತು ಗಂಭೀರ ಚಿಂತನೆ ನಡೆಸಬೇಕಿದೆ ಎಂದು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹೇಳಿದರು.
ನಗರದಲ್ಲಿ ಗುರುವಾರ ಕರ್ನಾಟಕ ನ್ಯಾಯಾಂಗ ಅಕಾಡೆಮಿಯ ರಜತ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ‘ಚಾಟ್‌ಜಿಪಿಟಿ’ಯನ್ನು ನಾನು ಕೂಡ ಬಳಕೆ ಮಾಡಿ ನೋಡಿದೆ. ಕೆಲವೊಂದು ವಿಚಾರಗಳನ್ನು ಕೇಳಿದಾಗ ನಿಖರವಾದ ಉತ್ತರ ಬಂದಿದೆ. ಕೆಲವೊಂದು ಪ್ರಶ್ನೆಗಳಿಗೆ ಅಪೂರ್ಣವಾದ ಉತ್ತರ ಸಿಕ್ಕಿದೆ. ಎಐನಲ್ಲಿ ದೋಷವಿರುವುದು ನಿಜ. ಆದರೆ, ಅದನ್ನು ನಮ್ಮ ವ್ಯವಸ್ಥೆಗೆ ಅನುಕೂಲವಾಗುವ ರೀತಿಯಲ್ಲಿ ಬಳಕೆ ಮಾಡುವುದರ ಕಡೆ ಗಂಭೀರ ಚಿಂತನೆ ನಡೆಸಬೇಕು. ಈ ನಿಟ್ಟಿನಲ್ಲಿ ರಾಜ್ಯ ನ್ಯಾಯಾಂಗ ಅಕಾಡೆಮಿಯಿಂದ ಕೆಲಸಗಳು ಆಗಬೇಕು ಎಂದರು.
ಕರ್ನಾಟಕ ಹೈಕೋರ್ಟ್‌ನಲ್ಲಿ 3.19 ಲಕ್ಷ ಪ್ರಕರಣಗಳು ಹಾಗೂ ಜಿಲ್ಲಾ ನ್ಯಾಯಾಲಯಗಳಲ್ಲಿ 22.53 ಲಕ್ಷ ಪ್ರಕರಣ ಬಾಕಿ ಇವೆ. ಈಗಿನ ವೇಗದಲ್ಲಿ ವಿಚಾರಣೆ ನಡೆದರೆ ಇಷ್ಟು ಪ್ರಕರಣಗಳ ವಿಲೇವಾರಿ ಪ್ರಕ್ರಿಯೆ ಮುಗಿಯುವುದೇ ಇಲ್ಲ. ಸಮರ್ಥವಾಗಿ ಮತ್ತು ತ್ವರಿತವಾಗಿ ವಿಲೇವಾರಿ ಮಾಡಲು ಪರಿಹಾರೋಪಾಯಗಳನ್ನು ಕಂಡುಕೊಳ್ಳಬೇಕಿದೆ. ನ್ಯಾಯಾಂಗ ಆದೇಶ ಬರೆಯಲು ಸಾಕಷ್ಟು ಸಮಯ ಹಿಡಿಯುತ್ತದೆ. ಇಂತಹ ತಂತ್ರಜ್ಞಾನವನ್ನು ಬಳಸಿಕೊಂಡು ಕೆಲಸ ಸರಳೀಕರಿಸಲು ಯೋಚಿಸಬೇಕು. ಯು.ಕೆ ನಂತಹ ದೇಶಗಳಲ್ಲಿ ನಿರ್ದಿಷ್ಟ ವಿಷಯಗಳಿಗೆ ಸಂಬಂಧಿಸಿದ ನಿರ್ದಿಷ್ಟ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ ಎಂದು ನ್ಯಾ.ವಿಭು ಬಕ್ರು ತಿಳಿಸಿದರು.
ನ್ಯಾಯಮೂರ್ತಿಗಳಾದ ಕೆ.ಎಸ್. ಮುದಗಲ್, ವಿ. ಶ್ರೀಷಾನಂದ ಹಾಗೂ ಕರ್ನಾಟಕ ನ್ಯಾಯಾಂಗ ಅಕಾಡೆಮಿಯ ನಿರ್ದೇಶಕಿ ಎಚ್.ಆರ್. ರಾಧ ಸೇರಿದಂತೆ ಇನ್ನಿತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ