
ವಿಜಯಪುರ (ಮಾ.12): ಶಿವಶರಣರಾದ ವಚನ ಪಿತಾಮಹ ಬಸವಣ್ಣ, ಅಕ್ಕಮಹಾದೇವಿ ಬಗ್ಗೆ ರಮಾಕಾಂತ ಎಂಬ ವ್ಯಕ್ತಿ ತನ್ನ ಫೇಸ್‌ಬುಕ್ ಖಾತೆಯಲ್ಲಿ ಕೀಳುಮಟ್ಟದ ಪದಬಳಕೆಯೊಂದಿಗ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾನೆ. ಈ ಪೋಸ್ಟ್ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಬಸವಾದಿ ಶರಣರ ಅನುಯಾಯಿಗಳು ಮತ್ತು ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ.
ಜಗತ್ತಿಗೆ ಸಮಾನತೆಯ ಸಂದೇಶ ಸಾರಿದ ವಿಶ್ವಗುರು ಬಸವಣ್ಣ ಹಾಗೂ ಶಿವಶರಣೆ ಅಕ್ಕಮಹಾದೇವಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ಕೆಟ್ಟದಾಗಿ ಮತ್ತು ಅವಮಾನಕಾರಿಯಾಗಿ ಪೋಸ್ಟ್ ಮಾಡಿರುವ ಘಟನೆ ವಿಜಯಪುರದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ನಿಂದನಾತ್ಮಕ ಕೃತ್ಯ ಎಸಗಿದ ರಮಾಕಾಂತ ಎಂಬ ವ್ಯಕ್ತಿಯನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಜಿಲ್ಲೆಯಾದ್ಯಂತ ಬಸವ ಅನುಯಾಯಿಗಳು ಬೀದಿಗಿಳಿದಿದ್ದಾರೆ.
ಘಟನೆಯನ್ನು ಖಂಡಿಸಿ ವಿಜಯಪುರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬಸವಾದಿ ಶರಣರ ಅನುಯಾಯಿಗಳು ಮತ್ತು ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ರಮಾಕಾಂತ ಎಂಬ ವ್ಯಕ್ತಿ ಉದ್ದೇಶಪೂರ್ವಕವಾಗಿ ಸಮಾಜದ ಶಾಂತಿ ಕದಡಲು ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಇಂತಹ ಕೃತ್ಯ ಎಸಗಿದ್ದಾನೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಘೋಷಣೆಗಳನ್ನು ಕೂಗುವ ಮೂಲಕ ಜಿಲ್ಲಾಡಳಿತದ ಗಮನ ಸೆಳೆದರು.
ಪ್ರತಿಭಟನಾಕಾರರು ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. "ಬಸವಣ್ಣನವರು ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ. ಅಂತಹ ಮಹಾನ್ ಚೇತನಕ್ಕೆ ಅವಮಾನ ಮಾಡಿರುವುದು ಇಡೀ ಮಾನವಕುಲಕ್ಕೆ ಮಾಡಿದ ಅವಮಾನ. ಆರೋಪಿ ರಮಾಕಾಂತನನ್ನು ಕೂಡಲೇ ಪತ್ತೆ ಹಚ್ಚಿ ಅರೆಸ್ಟ್ ಮಾಡಬೇಕು. ಸೈಬರ್ ಕ್ರೈಂ ಅಡಿಯಲ್ಲಿ ಆತನ ವಿರುದ್ಧ ಕಠಿಣ ಪ್ರಕರಣ ದಾಖಲಿಸಬೇಕು" ಎಂದು ಒತ್ತಾಯಿಸಿದರು.
ಒಂದು ವೇಳೆ ಪೊಲೀಸರು ಆರೋಪಿಯನ್ನು ಬಂಧಿಸಲು ವಿಳಂಬ ಮಾಡಿದರೆ ಅಥವಾ ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ 'ಉಗ್ರ ಹೋರಾಟ' ಮಾಡಬೇಕಾಗುತ್ತದೆ ಎಂದು ಬಸವ ಅನುಯಾಯಿಗಳು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಸಮಾಜದಲ್ಲಿ ಸೌಹಾರ್ದತೆ ಕೆಡಿಸುವ ಇಂತಹ ವಿಕೃತ ಮನಸ್ಥಿತಿಯ ವ್ಯಕ್ತಿಗಳಿಗೆ ತಕ್ಕ ಶಾಸ್ತಿಯಾಗಬೇಕು ಎಂಬುದು ಜನರ ಆಗ್ರಹವಾಗಿದೆ.
ಸದ್ಯ ವಿಜಯಪುರ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಯ ಪತ್ತೆಗಾಗಿ ಜಾಲ ಬೀಸಿದ್ದಾರೆ. ಈ ಘಟನೆಯಿಂದಾಗಿ ಜಿಲ್ಲೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಶಾಂತಿ ಕಾಪಾಡುವಂತೆ ಮನವಿ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ