
ಬೆಂಗಳೂರು (ಏ.9): ಮಾಜಿ ಸಚಿವ ಹಾಗೂ ಶಾಸಕ ವಿನಯ್ ಕುಲಕರ್ಣಿ ಅವರೂ ಆರೋಪಿಯಾಗಿರುವ ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ ಅಂತಿಮ ತೀರ್ಪು ಪ್ರಕಟಿಸಲಿದೆ.
ವಿನಯ್ ಕುಲಕರ್ಣಿ ಸೇರಿ ಒಟ್ಟು 21 ಮಂದಿ ಆರೋಪಿಗಳ ಭವಿಷ್ಯ ನಿರ್ಧಾರವಾಗಲಿದೆ. ಸುಮಾರು 8 ವರ್ಷಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಅಂತಿಮ ಆದೇಶ ನೀಡಲಿದೆ.
ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೇಶ್ ಗೌಡ ಅವರನ್ನು 2016ರ ಜೂ.15ರಂದು ಭೀಕರವಾಗಿ ಕೊಚ್ಚಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಧಾರವಾಡದ ಉಪನಗರ ಪೊಲೀಸರು ತನಿಖೆ ನಡೆಸಿ, ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಆರು ಮಂದಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ನಡುವೆ, ಕೊಲೆಯಾದ ಯೋಗೇಶ್ ಗೌಡ ಕುಟುಂಬದ ಸದಸ್ಯರ ಒತ್ತಾಯ ಮೇರೆಗೆ 2019ರ ಸೆಪ್ಟೆಂಬರ್‌ನಲ್ಲಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಬಳಿಕ ಸಿಬಿಐ ತನಿಖೆಯಲ್ಲಿ ಇದು ರಾಜಕೀಯ ಪ್ರೇರಿತ ಕೊಲೆ ಎಂಬುದು ತಿಳಿದು ಬಂದಿತ್ತು.
ಈ ಸಂಬಂಧ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು 2020ರ ನ.5ರಂದು ಸಿಬಿಐ ಬಂಧಿಸಿತ್ತು. ಬಳಿಕ ವಿಚಾರಣೆ ನಡೆಸಿ ಈ ಪ್ರಕರಣ ಸಂಬಂಧ ಒಟ್ಟು 21 ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿತ್ತು. ಪ್ರಸ್ತುತ ಪ್ರಮುಖ ಆರೋಪಿ ವಿನಯ್ ಕುಲಕರ್ಣಿ ಜಾಮೀನಿನ ಮೇಲೆ ಹೊರಗಿದ್ದಾರೆ. ಇಂದಿನ ನ್ಯಾಯಾಲಯದ ತೀರ್ಪಿನ ಮೇಲೆ ಈ 21 ಆರೋಪಿಗಳ ಮುಂದಿನ ಭವಿಷ್ಯ ನಿರ್ಧಾರವಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ