
ಬೆಂಗಳೂರು (ಮೇ.13) : ಕಳೆದ ಕೆಲ ದಿನಗಳಿಂದ ನಗರದಲ್ಲಿ ಬಿಡುವಾಗಿದ್ದ ಮಳೆ ಸೋಮವಾರ ಹಲವೆಡೆ ಸಣ್ಣದಾಗಿ ಸುರಿದಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರಿನಲ್ಲಿ ಸೋಮವಾರದಿಂದ ಏಳು ದಿನಗಳವರೆಗೆ ಕೆಲಕಾಲ ಮಳೆ ಸುರಿಯುವ ಸಾಧ್ಯತೆಗಳಿವೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಸೋಮವಾರ ಬೆಳಗ್ಗೆಯಿಂದ ಬಿಸಿಲಿನ ವಾತಾವರಣವಿತ್ತು. ಮಧ್ಯಾಹ್ನದ ವೇಳೆ ಮೋಡ ಕವಿದ ವಾತಾವರಣ ಸೃಷ್ಟಿಯಾಗಿತ್ತಾದರೂ ಮಳೆ ಸುರಿದಿರಲಿಲ್ಲ. ರಾತ್ರಿ 8 ಗಂಟೆ ನಂತರ ನಗರದ ಹಲವೆಡೆ ಸಣ್ಣ ಪ್ರಮಾಣದಲ್ಲಿ ಮಳೆ ಸುರಿದಿದೆ.
ಮುಂದಿನ 7 ದಿನಗಳವರೆಗೆ ಇದೇ ರೀತಿಯ ವಾತಾವರಣ ಇರಲಿದ್ದು, ಎಲ್ಲೆಡೆ ಮೋಡ ಕವಿದ ವಾತಾವರಣ ಇರಲಿದೆ ಹಾಗೂ ಸಂಜೆ ವೇಳೆಗೆ ಸಾಧಾರಣ ಮಳೆಯಾಗಲಿದೆ. ನಗರದ ಕೆಲವೆಡೆ ಗಾಳಿ ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಅದರ ಪರಿಣಾಮ ನಗರದಲ್ಲಿ ಉಷ್ಣಾಂಶ ಗರಿಷ್ಠ 33 ಮತ್ತು ಕನಿಷ್ಠ 22 ಡಿಗ್ರಿ ಸೆಲ್ಷಿಯಸ್ ದಾಖಲಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: ಯೆಲ್ಲೋ ಅಲರ್ಟ್: ಮುಂದಿನ ಐದು ದಿನ ರಾಜ್ಯದ ಈ 14 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ
ಇಂದು ಎಲ್ಲೆಲ್ಲಿ ಮಳೆ?
ಇಂದು ಕರ್ನಾಟಕದಾದ್ಯಂತ ಚದುರಿದಿಂದ ವ್ಯಾಪಕವಾದ ಸಾಧಾರಣ ಮಳೆಯೊಂದಿಗೆ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ 21 ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆಯಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಶೆಟ್ಟಹಳ್ಳಿಯಲ್ಲಿ ಅತ್ಯಧಿಕ 119 ಮಿಮೀ ಮಳೆ ದಾಖಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ