
ಬೆಂಗಳೂರು (ಡಿ.2) : ಮುಂದಿನ ಐದು ವರ್ಷಗಳಲ್ಲಿ ದೇಶ ಮತ್ತು ರಾಜ್ಯವನ್ನು ಏಡ್ಸ್ ಮುಕ್ತಗೊಳಿಸಬೇಕಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಲಾದ ವಿಶ್ವ ಏಡ್ಸ್ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಎಚ್ಐವಿ ಮಾರಕ ಸಾಂಕ್ರಾಮಿಕ ರೋಗವಾಗಿದ್ದು, ಇದನ್ನು ತಡೆಗಟ್ಟುವುದು ಎಲ್ಲರ ಜವಾಬ್ದಾರಿಯಾಗಿದೆ. 1981ರಲ್ಲಿ ಮೊದಲು ಇದು ಕಾಣಿಸಿಕೊಂಡಿತ್ತು. 1986ರಲ್ಲಿ ಭಾರತದಲ್ಲಿ, 1996ರಲ್ಲಿ ರಾಜ್ಯದಲ್ಲಿ ಕಾಣಿಸಿಕೊಂಡಿತು. ಇತ್ತೀಚಿನ ದಿನಗಳಲ್ಲಿ ಎಚ್ಐವಿಪೀಡಿತರ ಸಂಖ್ಯೆ ಹಾಗೂ ಅದರ ಹರಡುವಿಕೆಯೂ ಕಡಿಮೆಯಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಹೇಳಿದರು.
ನರೇಂದ್ರ ಮೋದಿ: ಸವಾಲಿನ ನಡುವೆಯೇ ಅಸಾಧಾರಣ ಜಿ20 ಸಾಧನೆ!
ನಮ್ಮ ಸಮಾಜವನ್ನು ಎಚ್ಐವಿ ಮುಕ್ತ ಸಮಾಜವನ್ನಾಗಿ ಮಾಡಬೇಕು. ಇದಕ್ಕಾಗಿ ಜನರಲ್ಲಿ ಮತ್ತು ಯುವಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಬೇಕು. 2015-2020ರವರೆಗೆ ಏಡ್ಸ್‌ಪೀಡಿತರ ಸಂಖ್ಯೆಯನ್ನು ಸೊನ್ನೆಗೆ ತನ್ನಿ ಎಂಬ ಘೋಷವಾಕ್ಯವಿತ್ತು. ಆದರೆ ಈ ಗುರಿಯನ್ನು ಇನ್ನೂ ಸಾಧಿಸಲಾಗಿಲ್ಲ. ಈ ಘೋಷಣೆಯನ್ನು ಕಾರ್ಯರೂಪಕ್ಕೆ ತರುವುದು ಕೇವಲ ಆರೋಗ್ಯ ಇಲಾಖೆಯ ಹೊಣೆಯಾಗಿರದೆ, ಇಡೀ ಸಮಾಜದ ಹೊಣೆಯಾಗಿದೆ. ಸೋಂಕಿನ ಪ್ರಮಾಣದಲ್ಲಿ ಜಗತ್ತಿನಲ್ಲಿ ನಾವು ಮೂರನೇ ಸ್ಥಾನದಲ್ಲಿದ್ದೇವೆ. ಅದಕ್ಕಾಗಿ ಹೆಚ್ಚು ಜಾಗೃತರಾಗಿರುವ ಅಗತ್ಯವಿದೆ ಎಂದರು.
ಸಮುದಾಯಗಳು ಮುನ್ನಡೆಸಲಿ ಎಂಬ ಧ್ಯೇಯವಾಕ್ಯದೊಂದಿಗೆ ಈ ವರ್ಷದ ಏಡ್ಸ್ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. 2017ರಲ್ಲಿ ಏಡ್ಸ್ ನಿಯಂತ್ರಣ ಕಾಯ್ದೆಯನ್ನು ಜಾರಿಗೆ ತಂದಿದ್ದು ನಮ್ಮ ಸರ್ಕಾರ. ಏಡ್ಸ್ ರೋಗ ಬಂದರೆ ತಕ್ಷಣ ಏನೂ ಆಗುವುದಿಲ್ಲ. ಆದರೆ ಇದು ವಾಸಿಯಾಗದ ರೋಗವಾಗಿದೆ. ಇಷ್ಟೆಲ್ಲಾ ವಿಜ್ಞಾನದ ಬೆಳವಣಿಗೆಯಾದರೂ ಏಡ್ಸ್ ರೋಗಕ್ಕೆ ಇನ್ನೂ ಔಷಧಿ ಕಂಡುಹಿಡಿದಿಲ್ಲ. ಆರೋಗ್ಯ ಇಲಾಖೆ ಈ ಬಗ್ಗೆ ಸಂಶೋಧನೆಗಳನ್ನು ಹೆಚ್ಚು ಹೆಚ್ಚು ಮಾಡಬೇಕು ಎಂದು ತಿಳಿಸಿದರು.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ ದರು. ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಏಡ್ಸ್‌ಪೀಡಿತರೊಂದಿಗೆ ಮಾತುಕತೆ ನಡೆಸಿದರು. ಎಚ್‌ಐವಿ ಸೋಂಕಿತರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಏಡ್ಸ್ ನಿರ್ಮೂಲನೆಯಲ್ಲಿ ಶ್ರಮಿಸಿದ ವ್ಯಕ್ತಿ ಮತ್ತು ಸಂಸ್ಥೆಗಳನ್ನು ಸನ್ಮಾನಿಸಲಾಯಿತು.
World Aids Day: ಕೇವಲ ಲೈಂಗಿಕ ಸಂಬಂಧದಿಂದ ಮಾತ್ರವಲ್ಲ, ಈ ಸಣ್ಣಪುಟ್ಟ ತಪ್ಪಿನಿಂದಾನೂ ಏಡ್ಸ್ ಬರುತ್ತೆ!
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕ ಅಜಯ್‌ಸಿಂಗ್, ನಟ ಪ್ರೇಮ್, ನಟಿ ಸಂಜನಾ ಗಲ್ರಾನಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ