
ಬೆಂಗಳೂರು(ಜೂ.10): ಮೈಸೂರು ರಾಜ್ಯ ‘ಕರ್ನಾಟಕ’ ಎಂದು ನಾಮಕರಣಗೊಂಡು 50 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ವರ್ಷವಿಡೀ ವಿಶೇಷ ಕಾರ್ಯಕ್ರಮ ಆಯೋಜಿಸಲು ಸೂಕ್ತ ರೂಪುರೇಷೆ ಸಿದ್ಧಪಡಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅಧಿಕಾರಿಗಳಿಗೆ ಸೂಚಿಸಿದರು.
ಶುಕ್ರವಾರ ನಗರದ ‘ಕನ್ನಡ ಭವನ’ದಲ್ಲಿ ನಡೆದ ಇಲಾಖೆಯ ಆಯವ್ಯಯ ಸಭೆಯಲ್ಲಿ ಮಾತನಾಡಿದ ಅವರು, ಮೈಸೂರು ರಾಜ್ಯ 1973 ಅಕ್ಟೋಬರ್ 20ರಂದು ಕರ್ನಾಟಕ ಎಂದು ಮರು ನಾಮಕರಣಗೊಂಡಿದ್ದು ಈಗ 50 ವರ್ಷ ಪೂರೈಸುತ್ತಿದೆ. ಈ ಐತಿಹಾಸಿಕ ಸಂದರ್ಭದಲ್ಲಿ ಕನ್ನಡ ನಾಡು, ನುಡಿ, ಸಂಸ್ಕೃತಿ ಸಾರುವಂತಹ ವಿಶೇಷವಾದ ಕಾರ್ಯಕ್ರಮಗಳನ್ನು ರೂಪಿಸಿ ವರ್ಷವಿಡಿ ಆಯೋಜಿಸಲು ಸೂಕ್ತ ರೂಪರೇಷೆ ಸಿದ್ಧಪಡಿಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಜನ್ಮದಿನಕ್ಕೆ ಕೇಕ್ ಬೇಡ, ಗಿಡ ಕೊಡಿ: ಸಚಿವ ಶಿವರಾಜ ತಂಗಡಗಿ
ಈ ಬಾರಿ ಆಯವ್ಯಯದಲ್ಲಿ ಇಲಾಖೆ ಕಾರ್ಯಕ್ರಮಗಳಿಗೆ ಹೆಚ್ಚಿನ ಅನುದಾನ ಕೋರಲಾಗುವುದು. ಇಲಾಖೆಯ ಕಾರ್ಯಕ್ರಮಗಳು ವ್ಯಾಪಕವಾಗಿ ಮತ್ತು ಹೆಚ್ಚು ಆಕರ್ಷಣೀಯವಾಗಿ ಯೋಜಿಸಲು ಉದ್ದೇಶಿಸಲಾಗಿದೆ. ರವೀಂದ್ರ ಕಲಾಕ್ಷೇತ್ರವನ್ನು ನವೀಕರಿಸಿ ಅಲ್ಲಿನ ಆಸನ ವ್ಯವಸ್ಥೆ, ಧ್ವನಿ ಮತ್ತು ಬೆಳಕು ಸುಧಾರಣೆಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಕನ್ನಡ ನಾಡಿನ ಸಂಸ್ಕೃತಿ, ಪರಂಪರೆ ಪ್ರತಿಬಿಂಬಿಸುವ ಚಾಲುಕ್ಯ ಉತ್ಸವ, ಆನೆಗುಂದಿ ಉತ್ಸವ, ಲಕ್ಕುಂಡಿ ಉತ್ಸವ, ಹಂಪಿ ಉತ್ಸವ, ನವರಸಪುರ ಉತ್ಸವ, ಕದಂಬ ಉತ್ಸವ, ಇಟಗಿ ಉತ್ಸವ ಹಾಗೂ ಕನಕಗಿರಿ ಉತ್ಸವ ಮುಂತಾದ ಉತ್ಸವಗಳನ್ನು ಇನ್ನು ಮುಂದೆ ನಿಗದಿತ ದಿನಾಂಕಗಳಂದು ಪ್ರವಾಸಿಗರ ಅನುಕೂಲವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಆಯೋಜಿಸಬೇಕು. ಅದಕ್ಕೊಂದು ವೇಳಾಪಟ್ಟಿಯನ್ನು ಸಿದ್ಧಪಡಿಸಬೇಕೆಂದು ಸಚಿವರು ಹೇಳಿದರು.
ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಭಾಗಗಳಲ್ಲಿ ಜಾನಪದ ಲೋಕ ಸ್ಥಾಪನೆಗೆ ಸೂಕ್ತ ಯೋಜನೆ ರೂಪಿಸಬೇಕು. ಐತಿಹಾಸಿಕ ಸ್ಮಾರಕಗಳ ಮುಂದೆ ಪ್ರತಿ ತಿಂಗಳು ರಜಾ ದಿನಗಳಂದು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲು ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಕಾರ್ಯಕ್ರಮ ರೂಪಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ.ಎನ್. ಮಂಜುಳಾ, ನಿರ್ದೇಶಕ ವಿಶ್ವನಾಥ ಪಿ.ಹಿರೇಮಠ ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ