
ಬೆಂಗಳೂರು (ಆ.07): ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಲ್ಲಿ ಯುವನಿಧಿ ಯೋಜನೆ ಜಾರಿಯಲ್ಲಿದ್ದು, ಈ ಯೋಜನೆಗೆ ಆ.14ರಂದು ಅಭ್ಯರ್ಥಿಗಳ ನೋಂದಣಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. 2025ನೇ ಸಾಲಿನಲ್ಲಿ ಪದವಿ/ಸ್ನಾತಕೋತ್ತರ ಪದವಿ ಅಥವಾ ಡಿಪ್ಲೋಮಾದಲ್ಲಿ ತೇರ್ಗಡೆಯಾದ ಬೆಂಗಳೂರು ನಗರ ಜಿಲ್ಲೆಯ ಅಭ್ಯರ್ಥಿಗಳು ಬೆಳಗ್ಗೆ 10 ಗಂಟೆಗೆ ಬಂದು ನೋಂದಣಿ ಮಾಡಿಸಬೇಕು ಎಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
'ಯುವನಿಧಿ' ಯೋಜನೆಯ ಅಡಿಯಲ್ಲಿ ಫಲಾನುಭವಿಗಳ ನೋಂದಣಿಯು ಚಾಲ್ತಿಯಲ್ಲಿದ್ದು, 2025ನೇ ಸಾಲಿನಲ್ಲಿ ಪದವಿ/ಸ್ನಾತಕೋತ್ತರ ಪದವಿ ಅಥವಾ ಡಿಪ್ಲೋಮಾದಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳು ಯೋಜನೆಯ ಪ್ರಯೋಜನ ಪಡೆಯಲು ಅವಕಾಶ ಕಲ್ಪಿಸಲಾಗಿದ್ದು, ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿ, ಬೆಂಗಳೂರು ವತಿಯಿಂದ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಾದಗೊಂಡನಹಳ್ಳಿ, ದೊಡ್ಡಬಳ್ಳಾಪುರ ಇವರುಗಳ ಸಹಯೋಗದಲ್ಲಿ 'ಯುವನಿಧಿ ಯೋಜನೆಯ ಅಭ್ಯರ್ಥಿಗಳ ನೋಂದಣಿ ಕಾರ್ಯಕ್ರಮವನ್ನು ಆಗಸ್ಟ್ 14, 2025 ರಂದು ಬೆಳಿಗ್ಗೆ 10 ರಿಂದ ಅಪರಾಹ್ನ 4.00 ಗಂಟೆಯವರೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಾದಗೊಂಡನಹಳ್ಳಿ, ದೊಡ್ಡಬಳ್ಳಾಪುರ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಆಯೋಜಿಸಲಾಗಿದೆ.
ಈ ಯೋಜನೆಯಡಿಯಲ್ಲಿ 2023 ಹಾಗೂ 2024ರಲ್ಲಿ ತೇರ್ಗಡೆಯಾಗಿ ಅರ್ಜಿ ಸಲ್ಲಿಸದೇ ಇರುವವರು ಕೂಡ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಸೂಚಿತ ವಿದ್ಯಾರ್ಹತೆಗಳಲ್ಲಿ ತೇರ್ಗಡೆಯಾದ ದಿನಾಂಕದಿಂದ 180 ದಿನ ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ (ವೃತಿಪರ ಕೋರ್ಸ್‌ಗಳು ಸೇರಿದಂತೆ) ಪ್ರತಿ ತಿಂಗಳು ರೂ.3,000 ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.1,500 ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ನೀಡಲಾಗುತ್ತದೆ. ನಿರುದ್ಯೋಗ ಭತ್ಯೆಯನ್ನು ಫಲಾನುಭಾವಿಗಳ ಬ್ಯಾಂಕ್ ಖಾತೆಗಳಿಗೆ ಡಿ.ಬಿ.ಟಿ ಮೂಲಕ ವರ್ಗಾವಣೆ ಮಾಡಲಾಗುತ್ತದೆ.
ಪದವಿ/ಡಿಪ್ಲೋಮಾ ನಂತರ ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುತ್ತಿರುವವರು. ಶಿಶಿಕ್ಷು ವೇತನವನ್ನು ಪಡೆಯುತ್ತಿರುವವರು, ಸರ್ಕಾರಿ/ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು, ರಾಜ್ಯ ಹಾಗೂ ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿರುವವರು ಹಾಗೂ ಕರ್ನಾಟಕದಲ್ಲಿ ಕನಿಷ್ಠ ಆರು ವರ್ಷಗಳಿಗಿಂತ ಕಡಿಮೆ ವಾಸವಿಲ್ಲದಿರುವ ಅಭ್ಯರ್ಥಿಗಳು ಯುವನಿಧಿ ಯೋಜನೆಗೆ ಅರ್ಹರಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿ, ಸಿಪಿಇ ಕಟ್ಟಡ. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಪೀಣ್ಯ, ತುಮಕೂರು ರಸ್ತೆ, ಬೆಂಗಳೂರು-22. ಪ್ರಾಂಶುಪಾಲರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಾದಗೊಂಡನಹಳ್ಳಿ, ದೊಡ್ಡಬಳ್ಳಾಪುರ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ. ಮತ್ತು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿ, ಕೊಠಡಿ ಸಂಖ್ಯೆ:132, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಸಂಪರ್ಕಿಸಬಹುದು ಎಂದು ಬೆಂಗಳೂರು ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ