Jul 3, 2022, 7:08 PM IST
ಬೆಂಗಳೂರು (ಜು. 03): ಕಳೆದೊಂದು ವಾರದಿಂದ ಮಲೆನಾಡ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದೆ. ರಾಜ್ಯದ ಹಲವೆಡೆ ಇವತ್ತೂ ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಹರೇಕಳ ಎಂಬಲ್ಲಿ ಅತಿಹೆಚ್ಚು 181 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಯ ಬಹುತೇಕ ಕಡೆ ಭಾರೀ ಮಳೆಯಾಗಲಿದೆ. ಮುಂದಿನ 24 ಗಂಟೆಗಳ ಕಾಲ ಕರ್ನಾಟಕದ ಮೂರು ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯಲಿದ್ದು, ಆಯಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದ ಎರಡು ದಿನಗಳಿಂದ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಪ್ರಮುಖವಾಗಿ ಮಂಗಳೂರು, ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಿದೆ. ಇನ್ನುಳಿದಂತೆ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ನೀಡಲಾಗಿದೆ. ಮಂಗಳೂರು ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ಆದರೆ ಜಿಲ್ಲೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.
ಮಳೆಯಿಂದಾಗಿ ಮಂಗಳೂರಿನ ಪ್ರಮುಖ ರಸ್ತೆಗಳು ಜಲಾವೃತಗೊಂಡಿವೆ. ತಗ್ಗು ಪ್ರದೇಶಗಳು ಮತ್ತು ಕಟ್ಟಡಗಳಿಗೆ ನೀರು ನುಗ್ಗಿ ದೈನಂದಿನ ಜೀವನಕ್ಕೆ ಅಡ್ಡಿಯಾಗಿದೆ. ಜಲಾವೃತಗೊಂಡ ರಸ್ತೆಗಳಲ್ಲಿ ವಾಹನ ಸವಾರರು ಮತ್ತು ಪಾದಚಾರಿಗಳಿಗೆ ಸಂಚಾರ ಮಾಡಲು ದೊಡ್ಡ ಸವಾಲಾಗಿ ಪರಿಣಮಿಸಿದೆ. ಹೀಗಾಗಿ ಕರಾವಳಿ ಜಿಲ್ಲೆಗಳ ಕೆಲವು ರಸ್ತೆಗಳಲ್ಲಿ ಸಂಚಾರ ಆಮೆ ಗತಿಯಲ್ಲಿ ಸಾಗಿದೆ. ಕಳೆದ 24 ಗಂಟೆಗಳಲ್ಲಿ 11 ಮನೆಗಳಿಗೆ ತೀವ್ರ ಹಾನಿಯಾಗಿದ್ದು, 77 ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಒಂದೇ ಮಳೆಗೆ ಸ್ವಿಮ್ಮಿಂಗ್ ಪೂಲ್‌ನಂತಾದ 200 ಕೋಟಿ ರೂಪಾಯಿ ವೆಚ್ಚದ ಸೇತುವೆ!
ರಾಜ್ಯ ವಿಪತ್ತು ಪರಿಹಾರ ಪಡೆಗಳ 86 ತಂಡಗಳು ಮತ್ತು 50 ನಾಗರಿಕ ರಕ್ಷಣಾ ತಂಡಗಳು ಜಿಲ್ಲೆಯಲ್ಲಿ ಮೊಕ್ಕಾಂ ಹೂಡಿವೆ. ಹವಾಮಾನ ಅಧಿಕಾರಿಗಳು ಮುಂದಿನ ಕೆಲವು ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ನೀಡಿರುವ ಕಾರಣ ಯಾವುದೇ ಅನಾಹುತ ಆಗದಂತೆ ಕಟ್ಟೆಚ್ಚರ ವಹಿಸಿದ್ದಾರೆ. ಇನ್ನುಳಿದಂತೆ ಭಾರೀ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ 9 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ