Nov 23, 2023, 11:31 PM IST
ಡಿಕೆ ಶಿವಕುಮಾರ್ ಅವರ ಅಕ್ರಮ ಆಸ್ತಿಗಳಿಕೆ ಪ್ರಕರಣವನ್ನು 2019ರಲ್ಲಿ ಸಿಬಿಐ ತನಿಖೆಗೆ ಶಿಫಾರಸು ಮಾಡಿತ್ತು. ಅಂದಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಈ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಕಳೆದ ನಾಲ್ಕು ವರ್ಷದಲ್ಲಿ ಸಿಬಿಐ ಪ್ರಕರಣದ ಶೇಕಡಾ 90 ರಷ್ಟು ತನಿಖೆ ಮಾಡಿದೆ. ಇದೀಗ ಕಾಂಗ್ರೆಸ್ ಸರ್ಕಾರ ಈ ತನಿಖೆಯನ್ನು ಸಿಬಿಐನಿಂದ ವಾಪಸ್ ಪಡೆಯಲು ನಿರ್ಧರಿಸಿದೆ. ಸಂಪುಟ ಸಭೆಯಲ್ಲಿ ಈ ನಿರ್ಧಾರ ಘೋಷಿಸಿದೆ.ಈ ಪ್ರಕರಣದ ತನಿಖೆ ನಡೆಸಲು ಹೈಕೋರ್ಟ್ ಸಿಬಿಐಗೆ ಗ್ರೀನ್ ಸಿಗ್ನಲ್ ನೀಡಿತ್ತು. ಇದೀಗ ಏಕಾಏಕಿ ಕೇಸ್ ವಾಪಸ್ ಪಡೆಯಲು ಕಾನೂನಿನಲ್ಲಿ ಅವಕಾಶವಿದೆಯಾ ಅನ್ನೋ ಚರ್ಚೆ ಶುರುವಾಗಿದೆ. ಇದೇ ವೇಳೆ ಡಿಕೆ ಶಿವಕುಮಾರ್ ಒತ್ತಡ ಹಾಕಿ ತನ್ನ ಮೇಲಿನ ಕೇಸ್ ವಾಪಸ್ ಪಡೆಯಲು ಸಂಪುಟ ನಿರ್ಧಾರ ಮಾಡುವಂತೆ ಮಾಡಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಇಷ್ಟೇ ಅಲ್ಲ ನಿಗಮ ಮಂಡಳಿ ನೇಮಕದಲ್ಲಿ ಡಿಕೆ ಶಿವಕುಮಾರ್ ಒತ್ತಾಯಿಸಿದ ಕಾರ್ಯಕರ್ತರಿಗೆ ಯಾವುದೇ ಸ್ಥಾನ ಸಿಕ್ಕಿಲ್ಲ. ಈ ಪೈಕಿ ಸಿದ್ದರಾಮಯ್ಯ ವಾದಕ್ಕೆ ಹೈಕಮಾಂಡ್ ಮನ್ನಣೆ ನೀಡಿತ್ತು. ಈ ಸೇಡನ್ನು ಡಿಕೆ ಶಿವಕುಮಾರ್ ಸಂಪುಟದಲ್ಲಿ ತನ್ನ ಪರವಾಗಿ ನಿರ್ಣಯ ತೆಗೆದುಕೊಳ್ಳುವಂತೆ ಮಾಡಿ ತೀರಿಸಿಕೊಂಡ್ರಾ ಅನ್ನೋ ಚರ್ಚೆ ಶುರುವಾಗಿದೆ.