Apr 28, 2023, 8:42 PM IST
ಬೆಂಗಳೂರು (ಏ.28): ನಟ ಶಿವರಾಜ್‌ಕುಮಾರ್ ಪತ್ನಿ ಹಾಗೂ ಮಾಜಿ ಮುಖ್ಯಮಂತ್ರಿ ದಿ.ಎಸ್.ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಅವರು ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಈವರೆಗೆ ಜೆಡಿಎಸ್ ಪಕ್ಷದಲ್ಲಿದ್ದ ಅವರು 2014ರ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಈ ವೇಳೆ ಜೆಡಿಎಸ್‌ನಲ್ಲಿ ಜತೆಗಿದ್ದ ಸಹೋದರ ಮಧು ಬಂಗಾರಪ್ಪ ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾಗಿ ಸೊರಬದಿಂದ ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿಯಾಗಿದ್ದಾರೆ. ಹೀಗಾಗಿ ಕಳೆದ ಕೆಲವು ದಿನಗಳಿಂದ ಸಹೋದರನ ಪರ ಗೀತಾ ಶಿವರಾಜ್ ಕುಮಾರ್ ಪ್ರಚಾರವನ್ನೂ ಆರಂಭಿಸಿದ್ದಾರೆ. ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಿರಿಯ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈ ಬಾರಿ ಗೀತಾ ಜತೆ ಶಿವರಾಜ್ ಕುಮಾರ್ ಪ್ರಚಾರ ಮಾಡಲಿದ್ದಾರೆಯೇ ಎಂಬುದು ಸಹ ಕುತೂಹಲ ಮೂಡಿಸಿದೆ. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಾಗಿತ್ತು.