ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಸಾಕಷ್ಟು ಅವಾಂತರಗಳಾಗಿವೆ. ಜನರು ಸಂಕಷ್ಟದಲ್ಲಿದ್ದಾರೆ.
ಬೆಂಗಳೂರು (ನ. 21): ರಾಜ್ಯದಲ್ಲಿ ಅಕಾಲಿಕ ಮಳೆಯಿಂದ (Untimely Rain) ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಸಾಕಷ್ಟು ಅವಾಂತರಗಳಾಗಿವೆ. ಜನರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗಿಲ್ಲವೆಂದು ಮಾಜಿ ಸಿಎಂ ಸಿದ್ದರಾಮಯ್ಯ, (Siddaramaiah) ಆಡಳಿತಾರೂಢ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ.
ಬೊಮ್ಮಾಯಿಯವರೇ, (CM Bommai) ನಿಮ್ಮ ಹನಿಮೂನ್ ಕಾಲ ಮುಗಿದಿದೆ. ನಿಮ್ಮ ಸಚಿವರ ಈ ನಾಟಕ ಪ್ರದರ್ಶನದ ಯಾತ್ರೆಯನ್ನು ಮೊದಲು ನಿಲ್ಲಿಸಿ. ಅವರನ್ನು ಮಳೆಪೀಡಿತ ಜಿಲ್ಲೆಗಳಿಗೆ ಓಡಿಸಿ. ಕಣ್ಣೀರಿಟ್ಟು ಗೋಳಾಡುತ್ತಿರುವ ಜನರ ಕಷ್ಟಗಳನ್ನು ಆಲಿಸಿ ಪರಿಹಾರ ಕಾರ್ಯ ಕೈಗೊಳ್ಳಲು ಹೇಳಿ. ಸಾವಿರಾರು ಎಕರೆ ಭೂಮಿಯಲ್ಲಿ ಭತ್ತ,ರಾಗಿ,ಜೋಳ, ತರಕಾರಿ,ಬಾಳೆ,ತೆಂಗು ಎಲ್ಲವೂ ನಾಶವಾಗಿದೆ. ರೈತರು ಕಣ್ಣೀರಿನಿಂದ ಕೈತೊಳೆದುಕೊಳ್ಳುತ್ತಿದ್ದಾನೆ. ಸಚಿವರು ಯಾತ್ರೆಯಲ್ಲಿದ್ದಾರೆ, ಅಧಿಕಾರಿಗಳು ಬೆಚ್ಚನೆ ಮನೆಯಲ್ಲಿದ್ದಾರೆ. ಜನ ಬೀದಿಪಾಲಾಗಿದ್ದಾರೆ.ಇಲ್ಲೊಂದು ಸರ್ಕಾರ ಇದೆಯೇ? ಎಂದು ಪ್ರಶ್ನಿಸಿದ್ದಾರೆ.
ಮೊದಲು ಅಧಿಕಾರಿಗಳ ತಂಡ ಕಟ್ಟಿಕೊಂಡು ಮಳೆಪೀಡಿತ ಪ್ರದೇಶಗಳಿಗೆ ಸಚಿವರು ಹೋಗಿ ಮಳೆ ನಷ್ಟದ ಅಂದಾಜು ನಡೆಸಿ ತಾತ್ಕಾಲಿಕ ಪರಿಹಾರ ನೀಡಲು ಸೂಚನೆ ನೀಡಿ. ಗಂಜಿ ಕೇಂದ್ರಗಳನ್ನುತೆರೆಯಲು ಹೇಳಿ. ನಷ್ಟದ ಸಮೀಕ್ಷೆ ನಡೆಸಿ ಹೆಚ್ಚಿನ ಪರಿಹಾರ ನೀಡಲು ಕೇಂದ್ರಕ್ಕೆ ಮನವಿ ಮಾಡಿ ಎಂದಿದ್ದಾರೆ.