
ಢಾಕಾ (ಡಿ.25): ಭಾರತದ ನೆರೆಯ ರಾಷ್ಟ್ರ ಬಾಂಗ್ಲಾದೇಶದಲ್ಲಿ ಅಶಾಂತಿ, ಹಿಂಸಾಚಾರ ಮತ್ತಷ್ಟು ತೀವ್ರಗೊಂಡಿದೆ. ಒಂದೆಡೆ ಮಾಜಿ ಪ್ರಧಾನಿ ಖಲೀದಾ ಜಿಯಾ ಪುತ್ರ ತಾರಿಕ್ ರೆಹಮಾನ್ ಸುದೀರ್ಘ ಕಾಲದ ಬಳಿಕ ಸ್ವದೇಶಕ್ಕೆ ಮರಳಿದ್ದರೆ, ಇನ್ನೊಂದೆಡೆ ಮೊಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ಸಾಲು ಸಾಲು ರಾಜೀನಾಮೆಗಳಿಂದ ಕಂಗೆಟ್ಟಿದೆ.
ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನಸ್ ಅವರಿಗೆ ಭಾರಿ ಹಿನ್ನಡೆಯಾಗಿದ್ದು, ಗೃಹ ಸಚಿವಾಲಯದ ವಿಶೇಷ ಸಹಾಯಕ ಖುದಾಬಕ್ಷ್ ಚೌಧರಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಮಾಜಿ ಐಜಿಪಿ ಆಗಿದ್ದ ಇವರ ರಾಜೀನಾಮೆಯನ್ನು ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅಂಗೀಕರಿಸಿದ್ದಾರೆ. ಯೂನಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಚಿವಾಲಯಕ್ಕೆ ಸಲ್ಲಿಕೆಯಾದ 4ನೇ ಪ್ರಮುಖ ರಾಜೀನಾಮೆ ಇದಾಗಿದ್ದು, ಸರ್ಕಾರದ ಆಡಳಿತದ ಮೇಲೆ ಪ್ರಶ್ನೆಗಳು ಏಳತೊಡಗಿವೆ.
ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ನಾಯಕ ಮತ್ತು ಮಾಜಿ ಪ್ರಧಾನಿ ಖಲೀದಾ ಜಿಯಾ ಅವರ ಪುತ್ರ ತಾರಿಕ್ ರೆಹಮಾನ್ ಇಂದು (ಡಿ.25) ಲಂಡನ್‌ನಿಂದ ಬಾಂಗ್ಲಾದೇಶಕ್ಕೆ ಮರಳಿದ್ದಾರೆ. 2008ರಲ್ಲಿ ಹಸೀನಾ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರದ ಪ್ರಕರಣಗಳಿಂದ ತಪ್ಪಿಸಿಕೊಳ್ಳಲು ಲಂಡನ್‌ಗೆ ತೆರಳಿದ್ದ ಅವರು, ಸುಮಾರು 17 ವರ್ಷಗಳ ಬಳಿಕ ತಾಯ್ನಾಡಿಗೆ ಬಂದಿಳಿದಿದ್ದಾರೆ. ವಿಮಾನ ನಿಲ್ದಾಣದಲ್ಲಿ ಸುಮಾರು 1 ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಸೇರಿ ಅವರಿಗೆ ಅದ್ಧೂರಿ ಸ್ವಾಗತ ಕೋರಿದ್ದಾರೆ.
ಬಾಂಬ್ ಸ್ಫೋಟ, ಮಾಧ್ಯಮ ಕಚೇರಿಗಳ ಮೇಲೆ ದಾಳಿ
ತಾರಿಕ್ ರೆಹಮಾನ್ ಆಗಮನಕ್ಕೂ ಮುನ್ನ ಢಾಕಾದಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಬುಧವಾರ (ಡಿ.24) ರಾಜಧಾನಿಯ ಚರ್ಚ್ ಸಮೀಪ ನಡೆದ ಬಾಂಬ್ ದಾಳಿಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. ವಿದ್ಯಾರ್ಥಿ ನಾಯಕ ಉಸ್ಮಾನ್ ಹಾದಿ ಅವರ ನಿಗೂಢ ಸಾವಿನ ನಂತರ ಹಿಂಸಾಚಾರ ತೀವ್ರಗೊಂಡಿದ್ದು, ಪ್ರತಿಭಟನಾಕಾರರು ದೇಶದ ಪ್ರತಿಷ್ಠಿತ ಪತ್ರಿಕೆಗಳಾದ 'ಡೈಲಿ ಸ್ಟಾರ್' ಮತ್ತು 'ಪ್ರಥಮ್ ಅಲೋ' ಕಚೇರಿಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಫೆಬ್ರವರಿ 12ಕ್ಕೆ ಮಹತ್ವದ ಸಾರ್ವತ್ರಿಕ ಚುನಾವಣೆ
ಬಾಂಗ್ಲಾದೇಶದಲ್ಲಿ ಫೆಬ್ರವರಿ 12, 2026 ರಂದು ಸಾರ್ವತ್ರಿಕ ಚುನಾವಣೆ ನಡೆಯುವುದು ಬಹುತೇಕ ಖಚಿತವಾಗಿದೆ. ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷವನ್ನು ಮಧ್ಯಂತರ ಸರ್ಕಾರ ನಿಷೇಧಿಸಿರುವುದರಿಂದ, ಮುಂಬರುವ ಚುನಾವಣೆಯಲ್ಲಿ ಬಿಎನ್‌ಪಿ ಪಕ್ಷವು ಗೆಲ್ಲುವ ನೆಚ್ಚಿನ ತಂಡವಾಗಿದೆ. ಬಿಎನ್‌ಪಿ ಮುಖ್ಯಸ್ಥೆ ಖಲೀದಾ ಜಿಯಾ ಅವರಿಗೆ ವಯಸ್ಸಾಗಿರುವ ಕಾರಣ (80 ವರ್ಷ), ತಾರಿಕ್ ರೆಹಮಾನ್ ಅವರೇ ದೇಶದ ಮುಂದಿನ ಪ್ರಧಾನಿ ಅಭ್ಯರ್ಥಿಯಾಗುವ ಸಾಧ್ಯತೆ ದಟ್ಟವಾಗಿದೆ.
ಭದ್ರತೆಯೇ ದೊಡ್ಡ ಸವಾಲು
ಜುಲೈ 2024ರಲ್ಲಿ ಶೇಖ್ ಹಸೀನಾ ಸರ್ಕಾರ ಪತನಗೊಂಡ ನಂತರ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದ್ದು, ದೇಶಾದ್ಯಂತ ಭದ್ರತೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಪ್ರಬಲ ವಿರೋಧ ಪಕ್ಷವಾದ ಅವಾಮಿ ಲೀಗ್ ಅನ್ನು ಚುನಾವಣಾ ಕಣದಿಂದ ಹೊರಗಿಟ್ಟಿರುವುದು ದೇಶದ ಪ್ರಜಾಪ್ರಭುತ್ವದ ಮೇಲೆ ಯಾವ ರೀತಿಯ ಪರಿಣಾಮ ಬೀರಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ