ಬಳ್ಳಾರಿ(ಅ.29): ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ದಮ್ಮೂರು ಶೇಖರ್ ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆ ಜಿಲ್ಲಾ ಬಿಜೆಪಿ ಘಟಕದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸರ್ಕಾರದ ವಿರುದ್ಧ ಸೆಡ್ಡು ಹೊಡೆದ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆಗೆ ನಿರ್ಧಾರಕ್ಕೆ ಬಂದಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. 

ಬಳ್ಳಾರಿ ಬಿಜೆಪಿ ಜನಾರ್ದನ ರೆಡ್ಡಿ ಹಾಗೂ ಸಚಿವ ಶ್ರೀರಾಮುಲು ಅವರ ಕಪಿಮುಷ್ಠಿಯಲ್ಲಿದೆ. ಕೇವಲ ರೆಡ್ಡಿ ಬೆಂಬಲಿಗರಿಗೆ ಮಣೆ ಹಾಕಲಾಗುತ್ತಿದೆ ಎಂದು ಪದಾಧಿಕಾರಿಗಳು ಆರೋಪಿಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ನಿನ್ನೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ದಮ್ಮೂರು ಶೇಖರ್ ಅವರು ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆ ಮೂಲ ಬಿಜೆಪಿಗರ ಕೆಂಗಣ್ಣಿಗೆ ಗುರಿಯಾಗಿದೆ. ಶೇಖರ್ ನೇಮಕಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು ವಿರೋಧದ ಮಧ್ಯೆಯೂ ಶೇಖರ್ ಅಧಿಕಾರ ಸ್ವೀಕಾರ ಮಾಡಿದ್ದರು. 

ಈ ವೇಳೆ ಶಾಸಕ ಸೋಮಶೇಖರ್ ರೆಡ್ಡಿ ಅವರು ಮೂಲ ಬಿಜೆಪಿಗರ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ್ದರು. ಇದರಿಂದ ಕಾರ್ಯಕರ್ತರು ಅಸಮಾಧಾನಗೊಂಡಿದ್ದರು. ಹೀಗಾಗಿ ಕಾರ್ಯಕರ್ತರೆಲ್ಲರೂ ಸಾಮೂಹಿಕ ರಾಜೀನಾಮೆ ನೀಡುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. 

ಈ ಸಂಬಂಧ ಬಿಜೆಪಿ ಜಿಲ್ಲಾಧ್ಯಕ್ಷ ಚೆನ್ನಬಸವನ ಗೌಡ ಅವರು ಇಂದು ಬೆಳಗ್ಗೆ 11.30 ಕ್ಕೆ ಸುದ್ದಿಗೋಷ್ಠಿ ಕರೆದಿದ್ದಾರೆ. ಸಾಮೂಹಿಕ ರಾಜೀನಾಮೆ ಬಗ್ಗೆ ವಿವರಣೆ ನೀಡಲಿದ್ದಾರೆಯೇ ಎಂಬುದರ ಬಗ್ಗೆ ತೀವ್ರ ಕುತೂಹಲ ಕೆರೆಳಿಸಿದೆ.