ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನೆ ಮುಂದುವರಿದಿದೆ. ಹೋರಾಟದ ಸ್ಥಳಕ್ಕೆ ಭೇಟಿ ನೀಡಿದ ನಟಿ ಕಾರುಣ್ಯ ರಾಮ್, ಕಾರ್ಯಕರ್ತೆಯರ ಆರೋಗ್ಯ, ಸುರಕ್ಷತೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸಚಿವ ಯು.ಟಿ. ಖಾದರ್ ಗೆ ಮನವಿ ಸಲ್ಲಿಸಿದ್ದಾರೆ.

ಬೆಂಗಳೂರು: ಗೌರವಧನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿರುವ ಅಹೋರಾತ್ರಿ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಬುಧವಾರಕ್ಕೆ 9 ನೇ ದಿನಕ್ಕೆ ಕಾಲಿಟ್ಟಿದ್ದು, ಕೊರೆಯುವ ಚಳಿ ಹಾಗೂ ಮಂಗಳವಾರ ಸುರಿದ ಮಳೆಯನ್ನೂ ಲೆಕ್ಕಿಸದೆ ಪ್ರತಿಭಟನೆ ನಡೆಸುತ್ತಿರುವ ಕಾರ್ಯಕರ್ತೆಯರು, ತಮ್ಮ ಬೇಡಿಕೆಗಳು ಈಡೇರುವವರೆಗೂ ಸ್ಥಳದಿಂದ ಕದಲುವುದಿಲ್ಲ ಎಂದು ದೃಢಸಂಕಲ್ಪ ಮಾಡಿದ್ದಾರೆ.

ಇದೀಗ ಆಶಾ ಕಾರ್ಯಕರ್ತೆಯರ ಈ ನ್ಯಾಯಯುತ ಹೋರಾಟಕ್ಕೆ ಕನ್ನಡ ಚಿತ್ರರಂಗದ ತಾರೆಯರಿಂದ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಟಿಯರಾದ ರಮ್ಯಾ, ಹಿರಿಯ ನಟಿ ತಾರಾ ಅನುರಾಧಾ, ಗೌತಮಿ ಜಾಧವ್ ಸೇರಿದಂತೆ ಹಲವರು ಕಾರ್ಯಕರ್ತೆಯರ ಪರ ಧ್ವನಿ ಎತ್ತಿದ್ದಾರೆ. ಇದರ ಮುಂದುವರಿದ ಭಾಗವಾಗಿ ನಟಿ ಕಾರುಣ್ಯ ರಾಮ್ ಅವರು ಖುದ್ದಾಗಿ ಫ್ರೀಡಂ ಪಾರ್ಕ್‌ಗೆ ಭೇಟಿ ನೀಡಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಲ್ಲದೆ, ಸರ್ಕಾರಕ್ಕೆ ಮನವಿ ಪತ್ರವನ್ನೂ ಸಲ್ಲಿಸಿದ್ದಾರೆ.

ಪ್ರತಿಭಟನಾ ಸ್ಥಳದಲ್ಲೇ 6-7 ಗಂಟೆ ಕಳೆದ ಕಾರುಣ್ಯ ರಾಮ್

ಫ್ರೀಡಂ ಪಾರ್ಕ್‌ನಲ್ಲಿ ಧರಣಿ ನಿರತ ಆಶಾ ಕಾರ್ಯಕರ್ತೆಯರನ್ನು ಭೇಟಿಯಾದ ನಟಿ ಕಾರುಣ್ಯ ರಾಮ್, ಸುಮಾರು 6 ರಿಂದ 7 ಗಂಟೆಗಳ ಕಾಲ ಅವರೊಂದಿಗೆ ಕುಳಿತು ಅವರ ಕಷ್ಟ-ಸುಖಗಳನ್ನು ಆಲಿಸಿದರು. ಸಮಾಜದ ಆರೋಗ್ಯ ಕಾಪಾಡುವ ಆಶಾ ಕಾರ್ಯಕರ್ತೆಯರ ಧ್ವನಿಯಾಗಿ ನಿಲ್ಲುವುದು ನಮ್ಮೆಲ್ಲರ ಜವಾಬ್ದಾರಿ. ಜನರ ಪರವಾಗಿ ಧ್ವನಿ ಎತ್ತುವುದು ನಮ್ಮ ಕರ್ತವ್ಯವಾಗಿದ್ದು, ಅವರ ನ್ಯಾಯಯುತ ಬೇಡಿಕೆಗಳಿಗೆ ಸರ್ಕಾರ ಶೀಘ್ರ ಸ್ಪಂದನೆ ನೀಡಲಿ ಎಂದು ಒತ್ತಾಯಿಸಿದ್ದಾರೆ.

ಈ ವಿಚಾರವಾಗಿ ಆರೋಗ್ಯ ಸಚಿವ ಶ್ರೀ ಯು.ಟಿ. ಖಾದರ್ ಅವರನ್ನು ಭೇಟಿಯಾದ ಕಾರುಣ್ಯ ರಾಮ್, ಆಶಾ ಕಾರ್ಯಕರ್ತೆಯರು ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ನಿಸ್ವಾರ್ಥ ಸೇವೆ, ಅವರ ವೇತನ ಹೆಚ್ಚಳದ ಬೇಡಿಕೆ ಹಾಗೂ ಪ್ರತಿಭಟನಾ ಸ್ಥಳದಲ್ಲಿ ಅವರು ಎದುರಿಸುತ್ತಿರುವ ಗಂಭೀರ ಆರೋಗ್ಯ ಸಮಸ್ಯೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿ ಮನವಿ ಪತ್ರವನ್ನು ಹಸ್ತಾಂತರಿಸಿದರು.

ಕಾರುಣ್ಯ ರಾಮ್ ಸಲ್ಲಿಸಿದ ಮನವಿ ಪತ್ರದ ಮುಖ್ಯಾಂಶಗಳು

ಪ್ರತಿಭಟನಾ ಸ್ಥಳದಲ್ಲಿರುವ ಮಹಿಳೆಯರ ಆರೋಗ್ಯ ಮತ್ತು ಸುರಕ್ಷತೆಯ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಕಾರುಣ್ಯ ರಾಮ್, ತಮ್ಮ ಪತ್ರದಲ್ಲಿ ಹಲವು ಮಹತ್ವದ ಅಂಶಗಳನ್ನು ಉಲ್ಲೇಖಿಸಿದ್ದಾರೆ:

"ನಾನು ಖುದ್ದಾಗಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಸುಮಾರು 6 ರಿಂದ 7 ಗಂಟೆಗಳ ಕಾಲ ಅಲ್ಲಿದ್ದೆ. ಸುತ್ತಮುತ್ತಲಿನ ವಿಪರೀತ ಧೂಳು ಮತ್ತು ಕಲುಷಿತ ವಾತಾವರಣದಿಂದಾಗಿ ಕೆಲವೇ ಗಂಟೆಗಳ ಕಾಲ ಅಲ್ಲಿದ್ದ ನನಗೇ ಕಣ್ಣಿನ ಸೋಂಕು ಹಾಗೂ ಗಂಟಲಿನ ಸಮಸ್ಯೆ ಕಾಣಿಸಿಕೊಂಡಿತು. ಹೀಗಿರುವಾಗ, ಹಗಲು-ರಾತ್ರಿ ಎನ್ನದೆ ದಿನಗಟ್ಟಲೆ ಅಲ್ಲೇ ಉಳಿದು ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಆರೋಗ್ಯದ ಮೇಲೆ ಎಂತಹ ಗಂಭೀರ ಪರಿಣಾಮ ಬೀರಬಹುದು ಎಂಬುದನ್ನು ಊಹಿಸಿಕೊಳ್ಳಿ" ಎಂದು ಅವರು ಪತ್ರದಲ್ಲಿ ಎಚ್ಚರಿಸಿದ್ದಾರೆ.

ಪ್ರಜಾಸತ್ತಾತ್ಮಕವಾಗಿ ಹೋರಾಟ ನಡೆಸುತ್ತಿರುವ ಮಹಿಳೆಯರು ವಾಯುಮಾಲಿನ್ಯ, ಸ್ವಚ್ಛತೆಯ ಕೊರತೆ ಹಾಗೂ ಮೂಲಭೂತ ಸೌಲಭ್ಯಗಳ ಅಭಾವದಿಂದ ಬಳಲುತ್ತಿದ್ದು, ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಿ ಈ ಕೆಳಗಿನ ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ:

ತುರ್ತು ವೈದ್ಯಕೀಯ ಸೇವೆ: ಪ್ರತಿಭಟನಾ ಸ್ಥಳದಲ್ಲಿರುವ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ತಕ್ಷಣವೇ ವೈದ್ಯಕೀಯ ತಪಾಸಣೆ ನಡೆಸಿ ಅಗತ್ಯ ಆರೋಗ್ಯ ಸೇವೆಗಳನ್ನು ಒದಗಿಸಬೇಕು.

ನೈರ್ಮಲ್ಯ ಮತ್ತು ಕುಡಿಯುವ ನೀರು: ಧರಣಿ ನಿರತ ಮಹಿಳೆಯರಿಗೆ ಶುದ್ಧ ಕುಡಿಯುವ ನೀರು, ಸ್ವಚ್ಛ ಶೌಚಾಲಯ ಹಾಗೂ ಸೂಕ್ತ ನೈರ್ಮಲ್ಯ ವ್ಯವಸ್ಥೆಯನ್ನು ಕಲ್ಪಿಸಬೇಕು.

ಧೂಳು ನಿಯಂತ್ರಣ: ಫ್ರೀಡಂ ಪಾರ್ಕ್ ಸುತ್ತಮುತ್ತಲಿನ ಧೂಳಿನ ಪ್ರಮಾಣವನ್ನು ತಗ್ಗಿಸಲು ಹಾಗೂ ಸ್ಥಳವನ್ನು ಸ್ವಚ್ಛವಾಗಿಡಲು ಪಾಲಿಕೆ ಮತ್ತು ಸಂಬಂಧಪಟ್ಟ ಇಲಾಖೆಗಳು ಕ್ರಮ ಕೈಗೊಳ್ಳಬೇಕು.

ರಕ್ಷಣಾ ಸಾಮಗ್ರಿಗಳು: ಆರೋಗ್ಯ ರಕ್ಷಣೆಗೆ ಅಗತ್ಯವಿರುವ ಮಾಸ್ಕ್‌ಗಳು, ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳು ಹಾಗೂ ತುರ್ತು ವೈದ್ಯಕೀಯ ಸಾಮಗ್ರಿಗಳನ್ನು ಪೂರೈಸಬೇಕು.

ತಾತ್ಕಾಲಿಕ ಆಶ್ರಯ: ಚಳಿ, ಮಳೆ ಹಾಗೂ ಪ್ರತಿಕೂಲ ಹವಾಮಾನದಿಂದ ರಕ್ಷಿಸಿಕೊಳ್ಳಲು ಸೂಕ್ತ ತಾತ್ಕಾಲಿಕ ಆಶ್ರಯದ ವ್ಯವಸ್ಥೆ ಮಾಡಬೇಕು.

"ಜನರ ಆರೋಗ್ಯಕ್ಕಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಈ ಮಹಿಳೆಯರು, ತಮ್ಮ ಹಕ್ಕುಗಳಿಗಾಗಿ ಹೋರಾಡುವ ಸಂದರ್ಭದಲ್ಲಿ ಮತ್ತಷ್ಟು ಆರೋಗ್ಯ ಅಪಾಯಗಳಿಗೆ ಸಿಲುಕದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ. ಸಂಬಂಧಪಟ್ಟ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ತಕ್ಷಣವೇ ಸ್ಥಳಕ್ಕೆ ಕಳುಹಿಸಿ, ಆಶಾ ಕಾರ್ಯಕರ್ತೆಯರ ಆರೋಗ್ಯ, ಸುರಕ್ಷತೆ ಮತ್ತು ಘನತೆಯನ್ನು ಕಾಪಾಡಬೇಕು" ಎಂದು ಕಾರುಣ್ಯ ರಾಮ್ ತಮ್ಮ ಮನವಿ ಪತ್ರದಲ್ಲಿ ವಿನಂತಿಸಿದ್ದಾರೆ.