ಆರ್‌ಸಿಬಿ ವಿಜಯೋತ್ಸವ ಸಂಭ್ರಮದಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸರು ರಾತ್ರಿಯಿಡಿ ಕಾರ್ಯಾಚರಣೆ ನಡೆಸಿದ್ದಾರೆ. ದೂರಿನ ಆಧಾರದಲ್ಲಿ ಇದೀಗ ಆರ್‌ಸಿಬಿ ಮ್ಯಾನೇಜ್ಮೆಂಟ್‌ನ ಮೂವರನ್ನು ಬಂಧಿಸಿದ್ದಾರೆ.

ಬೆಂಗಳೂರು(ಜೂ.06) ಐಪಿಎಲ್ ಟೂರ್ನಿಯಲ್ಲಿ ಟ್ರೋಫಿ ಗೆದ್ದ ಆರ್‌ಸಿಬಿಗೆ ಬೆಂಗಳೂರಿನಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಆಯೋಜಿಸಿದ ಸನ್ಮಾನ ಕಾರ್ಯಕ್ರಮ ಹಾಗೂ ವಿಜಯೋತ್ಸವ ಸಂಭ್ರಮ ದುರಂತದಲ್ಲಿ ಅಂತ್ಯಗೊಂಡಿದೆ. ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಅಮಾಯಕರು ಬಲಿಯಾಗಿದ್ದಾರೆ. ಇದೀಗ ಸರ್ಕಾರ ಪೊಲೀಸ್ ಕಮಿಷನರ್ ತಲೆದಂಡ ಮಾಡಿ ಆದೇಶ ಹೊರಡಿಸಿದೆ. ಇತ್ತ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದಾಖಲಾದ ದೂರಿನ ಆಧಾರದಲ್ಲಿ ಇದೀಗ ಆರ್‌ಸಿಬಿ ಮ್ಯಾನೇಜ್ಮೆಂಟ್‌ನ ಮೂವರನ್ನು ಬಂಧಿಸಲಾಗಿದೆ. ಇತ್ತ ಕೆಎಸ್‌ಸಿ ಪದಾಧಿಕಾರಿಗಳು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆರ್‌ಸಿಬಿ ವಿಜಯೋತ್ಸವ ಪ್ರಕರಣ ಸಂಬಂಧ ದೂರು ದಾಖಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಆರ್‌ಸಿಬಿ ಟೀಂ ಮ್ಯಾನೇಜ್ಮೆಂಟ್, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಘಟನೆಗೆ ಕಾರಣ ಎಂದು ಆರೋಪಿಸಿ ದೂರು ದಾಖಲಾಗಿದೆ. ಈ ದೂರಿನ ಆಧಾರದಲ್ಲಿ ಕಬ್ಬನ್ ಪಾರ್ಕ್ ಪೊಲೀಸರು ರಾತ್ರಿಯಿಡಿ ಕಾರ್ಯಾಚರಣೆ ನಡೆಸಿದ್ದಾರೆ. ಬಳಿಕ ಮೂವರನ್ನು ಅರೆಸ್ಟ್ ಮಾಡಿದ್ದಾರೆ.

ಆರ್‌ಸಿಬಿ ಮ್ಯಾನೇಜ್ಮೆಂಟ್‌ನ ನಿಖಿಲ್ ಆರೆಸ್ಟ್

ಕಬ್ಬನ್ ಪಾರ್ಕ್ ಪೊಲೀಸರು ಇದೀಗ ಆರ್‌ಸಿಬಿ ಮ್ಯಾನೇಜ್ಮೆಂಟ್‌ ಸಿಬ್ಬಂದಿ ನಿಖಿಲ್ ಅರೆಸ್ಟ್ ಮಾಡಿದ್ದಾರೆ. ಇದರ ಜೊತೆಗೆ ಡಿಎನ್ಎ ಸಿಬ್ಬಂದಿ ಕಿರಣ್ ಹಾಗೂ ಸುಮತ್ ಇಬ್ಬರನ್ನೂ ಬಂಧಿಸಲಾಗಿದೆ. ಕಾಲ್ತುಳಿತ ಪ್ರಕರಣ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರು ಒಟ್ಟು ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಇದೇ ವೇಳೆ ಆರ್‌ಸಿಬಿ ಮ್ಯಾನೇಜ್ಮೆಂಟ್‌ನ ಹಲವರು ನಾಪತ್ತೆಯಾಗಿದ್ದಾರೆ.

ಕೆಎಸ್‌ಸಿಎ ಪದಾಧಿಕಾರಿಗಳು ನಾಪತ್ತೆ

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನಲ್ಲಿ ಕೆಎಸ್‌ಸಿಎ ಪದಾಧಿಕಾರಿಗಳನ್ನು ಉಲ್ಲೇಖಿಸಲಾಗಿದೆ. ಆದರೆ ನಿನ್ನೆಯಿಂದ ಕೆಎಸ್‌ಸಿಎ ಪಧಾದಿಕಾರಿಗಳು ನಾಪತ್ತೆಯಾಗಿರುವುದಾಗಿ ವರದಿಯಾಗಿದೆ. ಘಟನೆ ಸಂಬಂಧ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

ಎರಡು ಪ್ರತ್ಯೇಕ ದೂರು

ಆರ್‌ಸಿಬಿ ವಿಜಯೋತ್ಸವದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಆರ್‌ಸಿಬಿ ಮ್ಯಾನೇಜ್ಮೆಂಟ್, ಕೆಎಸ್‌ಸಿಎ ದೂರಿನಲ್ಲಿ ಉಲ್ಲೇಖಿಸಿದೆ. ಪೂರ್ವ ತಯಾರಿ ಇಲ್ಲದೆ ಕಾರ್ಯಕ್ರಮ ಆಯೋಜಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಕಾಲ್ತುಳಿತ ಪ್ರಕರಣಕ್ಕೆ ಪೊಲೀಸರ ಅಧಿಕಾರಿಗಳ ತಲೆದಂಡ

ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಪೊಲೀಸರ ತಲೆದಂಡ ಮಾಡಲಾಗಿದೆ. ಸರ್ಕಾರದ ಈ ನಡೆ ಬಾರಿ ಆಕ್ರೋಶಕ್ಕೆ ಕಾರಣಾಗಿದೆ. ದಕ್ಷ ಪೊಲೀಸ್ ಅಧಿಕಾರಿಗಳ ಮೇಲೆ ಗೂಬೆ ಗೂರಿಸಿ, ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ಯತ್ನ ಎಂದು ವಿಪಕ್ಷಗಳು ಆರೋಪಿಸಿದೆ. ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್ ಬಿ, ಅಡಿಷನಲ್ ಕಮಿಷನರ್ ವಿಕಾಸ್ ಕುಮಾರ್, ಕಬ್ಬನ್ ಪಾರ್ಕ್ ಇನ್ಸ್‌ಪೆಕ್ಟರ್ ಗಿರೀಶ್, ಕೇಂದ್ರ ವಿಭಾಗ ಡಿಸಿಪಿ ಶೇಖರ್ ಸೇರಿದಂತೆ ಉನ್ನತಾಧಿಕಾರಿಗಳ ತಲೆದಂಡವಾಗಿದೆ.