ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ನಾಳೆ ಹುಟ್ಟೂರಾದ ಮದ್ದೂರಿನ ಸೋಮನಹಳ್ಳಿಯಲ್ಲಿ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಬೆಂಗಳೂರು: ಕೆಲಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್ ಎಂ ಕೃಷ್ಣ ಇಂದು ಬೆಳಗಿನ ಜಾವ 2.30 ರ ಸುಮಾರಿಗೆ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಸಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುವುದು. ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಬೆಳಗ್ಗೆ ನೆರವೇರಿಸಲಾಗುವುದು ಎಂದು ಎಸ್ ಎಂ ಕೃಷ್ಣ ಅವರ ದೀರ್ಘಕಾಲದ ಒಡನಾಡಿಗಳು, ಸಂಬಂಧಿಗಳು ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿಎಂ ಸಿದ್ದರಾಮಯ್ಯ ಸಂತಾಪ
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ.

ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ‌ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು. ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮಖ ರಾಜಕಾರಣಿಗಳಿಗೆ ಮಾದರಿಯಾಗಿದೆ.

ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ‌ ನಾನೂ ಭಾಗಿಯಾಗಿದ್ದೇನೆ.‌ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: