ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲಾಡಳಿತವು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ.

ಬೆಂಗಳೂರು (ಆ.27): ಗಣೇಶ ಚತುರ್ಥಿಯ ಸಂಭ್ರಮದಲ್ಲಿದ್ದ ರಾಜ್ಯದ ಜನತೆಗೆ ಭಾರೀ ಮಳೆ ಭಕ್ತರ ಉತ್ಸಾಹಕ್ಕೆ ತಣ್ಣೀರೆರಚಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಜನಜೀವನವನ್ನು ಅಸ್ತವ್ಯಸ್ತ ಮಾಡಿದೆ. ಅದರಲ್ಲೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಮೇಘಸ್ಪೋಟವಾದಂಥ ರೀತಿಯಲ್ಲಿ ಮಳೆ ಬೀಳುತ್ತಿದ್ದು, ಜನರಿಗೆ ಮನೆಯಿಂದ ಹೊರಹೋಗಲು ಸಾಧ್ಯವಾಗದಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ನಾಳೆ ರಜೆ ಘೋಷಣೆ ಮಾಡಿದ್ದಾರೆ. ಇಡೀ ಉತ್ತರ ಕನ್ನಡ ಜಿಲ್ಲೆಯ ಹತ್ತು ತಾಲೂಕುಗಳ ಅಂಗನವಾಡಿ, ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಅ.28 ರಂದು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಇದರ ಅನ್ವಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೊಯಿಡಾ, ದಾಂಡೇಲಿ ತಾಲೂಕಿಗೆ ರಜೆ ಘೋಷಣೆಯಾಗಿದೆ. ರೆಡ್ ಅಲರ್ಟ್ ಹಿನ್ನೆಲೆ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾರಿಂದ ರಜೆ ಘೋಷಣೆ ಮಾಡಲಾಗಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮವಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರಿದಿದ್ದು, ಈ ಪರಿಸ್ಥಿತಿ ಆಗಸ್ಟ್ 31 ರವರೆಗೂ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಅತ್ಯಂತ ತೀವ್ರವಾದ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಕರ್ನಾಟಕದ ಕೆಲವು ಭಾಗಗಳಲ್ಲೂ ಗುಡುಗು ಸಹಿತ ಮಳೆ ದಾಖಲಾಗಿದೆ.

ಕರಾವಳಿ ಮತ್ತು ಮಲೆನಾಡಿಗೆ ಎಚ್ಚರಿಕೆ ರವಾನೆ ಮಂಗಳವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾದ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಆಗಸ್ಟ್ 28, ಗುರುವಾರ ಕೂಡಾ ಕರಾವಳಿಯ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಆಗಸ್ಟ್ 31 ರವರೆಗೆ ಯೆಲ್ಲೋ ಅಲರ್ಟ್ ಮುಂದುವರೆಯಲಿದೆ. ಇದರ ಜೊತೆಗೆ ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಹಾಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಿಗೂ ಆಗಸ್ಟ್ 28-29 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.

ರಾಜ್ಯದ ಇತರೆ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಕಳೆದ ರಾತ್ರಿ ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದೆ. ಬೀದರ್ ಮತ್ತು ಕಲಬುರಗಿಗೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಅದೇ ರೀತಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು, ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಹಬ್ಬದ ಸಂಭ್ರಮಕ್ಕೆ ಅಡ್ಡಿಯಾಗದ ಮಳೆ ಗಣೇಶ ಚತುರ್ಥಿಯ ಸಿದ್ಧತೆಯ ಹೊತ್ತಿನಲ್ಲಿ ಮಳೆಯು ರಭಸ ಪಡೆದುಕೊಂಡಿದೆ. ಮಂಗಳವಾರ ದಿನವಿಡೀ ಬಿಟ್ಟು ಬಿಟ್ಟು ಸುರಿದ ಮಳೆಯು ಹಬ್ಬದ ಖರೀದಿ ಚಟುವಟಿಕೆಗಳಿಗೆ ಅಡ್ಡಿಯಾದರೂ, ಜಿಲ್ಲೆಯಲ್ಲಿ ಹಬ್ಬದ ಸಂಭ್ರಮ ಮಾತ್ರ ಕುಂದಿಲ್ಲ. ಕಳೆದ ವಾರ ವಿರಾಮ ನೀಡಿದ್ದ ಮಳೆ ಮತ್ತೆ ಪ್ರಾರಂಭವಾಗಿದ್ದು, ಈ ವರ್ಷ ಮೇ ತಿಂಗಳಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗಿದ್ದರೂ, ಆಗಸ್ಟ್‌ನಲ್ಲಿ ಮಳೆಯ ಕೊರತೆ ಕಂಡುಬಂದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರದಿ ತಿಳಿಸಿದೆ.