Asianet Suvarna News Asianet Suvarna News

ಮತ್ತೊಂದು ರೈಲು ಯೋಜನೆ ಘೋಷಿಸಿದ ಸಿಎಂ ಕುಮಾರಸ್ವಾಮಿ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ ಕುಮಾರಸ್ವಾಮಿ ಮತ್ತೊಂದು ರೈಲು ಯೋಜನೆಯನ್ನು ಘೋಷಿಸಿದ್ದಾರೆ. ಶೀಘ್ರವೇ ಶಂಕು ಸ್ಥಾಪನೆ ನೆರವೇರಿಸುವುದಾಗಿ ಹೇಳಿದ್ದಾರೆ. 

CM HD Kumaraswamy Inaugurated Development Programs In Bengaluru
Author
Bengaluru, First Published Feb 26, 2019, 8:49 AM IST

ಬೆಂಗಳೂರು :  ಉದ್ಯಾನ ನಗರಿಯ ಬಡಜನರಿಗೆ 1 ಲಕ್ಷ ಮನೆಗಳ ನಿರ್ಮಾಣ ಹಾಗೂ ನಗರದ ಉಪನಗರ ರೈಲು ಯೋಜನೆ ಶೀಘ್ರದಲ್ಲೇ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ನಗರದ ಮಹಾಲಕ್ಷ್ಮಿ ವಿಧಾನಸಭಾ ಕ್ಷೇತ್ರದ ಕಮಲಮ್ಮನಗುಂಡಿ ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ, ವೇದಿಕೆಯಿಂದಲೇ ರಿಮೋಟ್‌ ಮೂಲಕ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಹಾಗೂ ವಿವಿಧ ಯೋಜನೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ನಗರದ ಬಡ ಜನರಿಗೆ 1 ಲಕ್ಷ ಮನೆಗಳನ್ನು ನಿರ್ಮಿಸುವ ಯೋಜನೆಗೆ ಘೋಷಿಸಲಾಗಿತ್ತು. ಮೈತ್ರಿ ಸರ್ಕಾರದಲ್ಲಿ ಯೋಜನೆ ಮುಂದುವರೆಸಿದ್ದು ಒಟ್ಟು 48 ಸಾವಿರ ಜನರು ಮನೆಗಳಿಗಾಗಿ ಅರ್ಜಿ ಹಾಕಿದ್ದಾರೆ. ಶೀಘ್ರದಲ್ಲೇ ಮನೆಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗುವುದು ಎಂದರು.

ಅದೇ ರೀತಿ, ನಗರದಲ್ಲಿ ಉಪನಗರ ರೈಲು ಯೋಜನೆಗೆ ಇನ್ನು ಎಂಟು ಹತ್ತು ದಿನಗಳಲ್ಲಿ ಶಂಕುಸ್ಥಾಪನೆ ಮಾಡಲು ಸಿದ್ಧತೆ ನಡೆಯುತ್ತಿದೆ. ಮಾಜಿ ಪ್ರಧಾನಿ ದೇವೇಗೌಡರು 1995ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ನಗರಕ್ಕೆ ಉಪ ನಗರ ರೈಲು ಸೌಲಭ್ಯ ಆರಂಭಿಸಲು ಚಿಂತಿಸಲಾಗಿತ್ತು. ಅದು ಈಗ ಸಾಕಾರವಾಗುತ್ತಿದೆ. ಕೇಂದ್ರ ಸರ್ಕಾರದ ಎಲ್ಲ ಷರತ್ತುಗಳಿಗೆ ಒಪ್ಪಿ .23 ಸಾವಿರ ಕೋಟಿಗಳ ಈ ಯೋಜನೆ ಆರಂಭಿಸಲು ಕ್ರಮ ವಹಿಸಲಾಗುತ್ತಿದೆ ಎಂದರು.

ಇದಕ್ಕೂ ಮುನ್ನ ಬೆಂಗಳೂರು ಅಭಿವೃದ್ಧಿ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಮಾತನಾಡಿ, ಬೆಂಗಳೂರು ನಗರವನ್ನು ಇನ್ನು ನಾಲ್ಕು ತಿಂಗಳಲ್ಲಿ ಸಂಪೂರ್ಣ ವೈ-ಫೈ ನಗರವನ್ನಾಗಿ ಮಾಡಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರದ ನೂತನ ಪದವಿ ಕಾಲೇಜು ಉದ್ಘಾಟನೆ, ಪಾಲಿಕೆ ಕಚೇರಿಗಳ ಸಂಕೀರ್ಣ ಕಟ್ಟಡ, ಒಂದು ಸಾವಿರ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಣೆ ಸೇರಿದಂತೆ ಒಟ್ಟು 16 ಕೋಟಿಯ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಗೋಪಾಲಯ್ಯ, ಮೇಯರ್‌ ಗಂಗಾಂಬಿಕೆ, ಉಪಮೇಯರ್‌ ಬಿ.ಭದ್ರೇಗೌಡ, ಬಿಬಿಎಂಪಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ಗೋಪಾಲಯ್ಯ, ಪಾಲಿಕೆ ಆಡಳಿತ ಪಕ್ಷದ ನಾಯಕ ಅಬ್ದುಲ್‌ ವಾಜಿದ್‌, ಜೆಡಿಎಸ್‌ ನಾಯಕಿ ನೇತ್ರಾನಾರಾಯಣ್‌, ಕ್ಷೇತ್ರದ ವಿವಿಧ ವಾರ್ಡ್‌ಗಳ ಪಾಲಿಕೆ ಸದಸ್ಯರಾದ ಎಂ.ಶಿವರಾಜು, ಎಂ.ಮಹಾದೇವ, ಗಂಗಮ್ಮ, ಉಮೇ ಸಲ್ಮಾ, ಐಶ್ವರ್ಯ, ಬಿಬಿಎಂಪಿ ಆಯುಕ್ತ ಮಂಜುನಾಥ್‌ ಪ್ರಸಾದ್‌ ಮತ್ತಿತರರು ಉಪಸ್ಥಿತರಿದ್ದರು.

Follow Us:
Download App:
  • android
  • ios