ವಿಧಾನಸೌಧ :  ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ ಚೆನ್ನೈನ ಅಲ್ಪಸಂಖ್ಯಾತ ಆಡಳಿತ ಮಂಡಳಿ ನೇತೃತ್ವದ ರೇಲಾ ಆಸ್ಪತ್ರೆ ಉತ್ತಮ ಚಿಕಿತ್ಸೆ ನೀಡುತ್ತಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ನೀಡಿದ ಹೇಳಿಕೆ ತೀವ್ರ ವಿವಾದ ಹುಟ್ಟುಹಾಕಿದ್ದು, ಇದನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ತೀವ್ರ ತರಾಟೆ ತೆಗೆದುಕೊಂಡಿದ್ದಾರೆ.

ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಸಚಿವ ಶಿವಕುಮಾರ್‌ ಈ ಬಗ್ಗೆ ಕ್ಷಮೆ ಕೋರಿ ವಿವಾದ ತಣ್ಣಗಾಗಿಸುವ ಪ್ರಯತ್ನವನ್ನೂ ಮಾಡಿದರು.

ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಡಿ.ಕೆ. ಶಿವಕುಮಾರ್‌ ಅವರು ಸಿದ್ಧಗಂಗಾ ಶ್ರೀಗಳ ಆರೋಗ್ಯ ಉತ್ತಮವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಚೆನ್ನೈನ ರೆಲಾ ಆಸ್ಪತ್ರೆಯು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಆಡಳಿತ ಮಂಡಳಿಯಾದರೂ ಶ್ರೀಯವರಿಗೆ ಉತ್ತಮ ಚಿಕಿತ್ಸೆ ನೀಡುತ್ತಿದೆ ಎಂದು ಹೇಳಿದರು.

ಈ ಹೇಳಿಕೆಗೆ ಬಿಜೆಪಿಯಿಂದ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್‌.ಯಡಿಯೂರಪ್ಪ, ‘ವೈದ್ಯೋ ನಾರಾಯಣೋ ಹರಿಃ’ ಎಂಬ ಮಾತಿನಂತೆ ವೈದ್ಯ ವೃತ್ತಿಗೆ ದೇವರ ಸ್ಥಾನ ಕಲ್ಪಿಸಲಾಗಿದೆ. ಅಂತಹ ವೃತ್ತಿಗೆ ಧರ್ಮದ ಲೇಪನ ಮಾಡುವುದು ಕೀಳು ರಾಜಕೀಯ. ಶಿವಕುಮಾರ್‌ ಅವರ ಹೇಳಿಕೆ ಅಕ್ಷಮ್ಯ ಅಪರಾಧ ಎಂದು ಕಿಡಿ ಕಾರಿದರು.

ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಮಾತನಾಡಿ, ಸಿದ್ಧಗಂಗಾ ಶ್ರೀಗಳ ಚೇತರಿಕೆಗೆ ಎಲ್ಲರೂ ಪ್ರಾರ್ಥನೆ ಮಾಡುತ್ತಿದ್ದಾರೆ. ಇಂತಹ ವೇಳೆಯಲ್ಲಿ ಶಿವಕುಮಾರ್‌ ಅವರು ವೈದ್ಯ ವೃತ್ತಿ ವಿಚಾರದಲ್ಲಿ ಜಾತಿ, ಧರ್ಮ ಎಳೆದು ತರುವ ಪ್ರಯತ್ನ ಮಾಡಿದ್ದಾರೆ. ಇದು ಅವರ ಸಂಕುಚಿತ ಮನೋಭಾವವನ್ನು ತೋರುತ್ತದೆ ಅಸಮಾಧಾನ ವ್ಯಕ್ತಪಡಿಸಿದರು.

ಶಾಸಕ ವಿ. ಸೋಮಣ್ಣ, ಗುಡಿ-ಗೋಪುರ, ಮಸೀದಿಗಳು ಸಾಂಕೇತಿಕ. ಆಸ್ಪತ್ರೆಗಳು ಅಲ್ಪಸಂಖ್ಯಾತರ ಜಾಗ ಆಗಿರುವುದಿಲ್ಲ. ಡಿ.ಕೆ. ಶಿವಕುಮಾರ್‌ ಹೋಗುವುದಕ್ಕೆ ಒಂದು ಗಂಟೆ ಮೊದಲು ನಾನೂ ಹೋಗಿದ್ದೆ. ಇಂತಹ ಹೇಳಿಕೆ ನೀಡುವುದು ತಪ್ಪು. ಯಾವ ಉದ್ದೇಶಕ್ಕೆ ಈ ಹೇಳಿಕೆ ನೀಡಿದ್ದಾರೆ ಎಂಬುದನ್ನು ಅವರನ್ನೇ ಕೇಳಬೇಕು ಎಂದರು.

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಮಾತನಾಡಿ, ಶಿವಕುಮಾರ್‌ ಅರ್ಥ ಇಲ್ಲದ ಹೇಳಿಕೆ ಕೊಟ್ಟಿದ್ದಾರೆ. ಯಾವ ಸಂದರ್ಭದಲ್ಲಿ ಏನು ಮಾತನಾಡಬೇಕು ಎಂಬುದು ಅವರಿಗೆ ಗೊತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.

ಡಿಕೆಶಿ ಕ್ಷಮೆಯಾಚನೆ:  ತಮ್ಮ ಹೇಳಿಕೆ ವಿವಾದ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಸಚಿವ ಡಿ.ಕೆ.ಶಿವಕುಮಾರ್‌ ಕ್ಷಮೆ ಕೋರುವ ಮೂಲಕ ವಿವಾದ ತಣ್ಣಗಾಗಿಸುವ ಪ್ರಯತ್ನ ಮಾಡಿದರು. ಅಲ್ಲದೆ, ಸದುದ್ದೇಶದಿಂದ ನೀಡಿದ ಹೇಳಿಕೆಯನ್ನು ತಿರುಚಿ ರಾಜಕೀಯವಾಗಿ ಬಳಸಿಕೊಳ್ಳಲು ಬಿಜೆಪಿ ನಾಯಕರು ಯತ್ನಿಸುತ್ತಿದ್ದಾರೆ ಎಂದು ಕಿಡಿ ಕಾರಿದರು.

ಬಿಜೆಪಿ ಮುಖಂಡರು ನನ್ನ ಹೇಳಿಕೆ ತಿರುಚಿ ರಾಜಕೀಯವಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಒಂದು ಉತ್ತಮ ಆಸ್ಪತ್ರೆ ನಿರ್ಮಾಣ, ನಿರ್ವಹಣೆಗೆ ಯಾವುದೇ ಜಾತಿ-ಧರ್ಮದ ಲೇಪ ಇರುವುದಿಲ್ಲ ಎಂಬ ಅರ್ಥದಲ್ಲಿ ನಾನು ಹೇಳಿದ್ದೆ. ತಮ್ಮ ಹೇಳಿಕೆಯನ್ನು ಯಾರೂ ತಪ್ಪಾಗಿ ಭಾವಿಸುವುದು ಬೇಡ. ಒಂದೊಮ್ಮೆ ತಮ್ಮ ಹೇಳಿಕೆಯಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದು ಶಿವಕುಮಾರ್‌ ಹೇಳಿದರು.