ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಧರಣಿ ಆರಂಭಿಸಿದ್ದಾರೆ.
ಬೆಂಗಳೂರು : ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಫೆ.10ರಂದು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಆರಂಭಿಸಿದರು.
ಕಳೆದ 10-15 ವರ್ಷಗಳಿಂದ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಡಿ ರಾಜ್ಯದ ಸರ್ಕಾರಿ ಆಸ್ಪತ್ರೆ, ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಫಾರ್ಮಸಿಸ್ಟ್, ಲ್ಯಾಬ್ ಟೆಕ್ನಿಶಿಯನ್, ಹೆಲ್ತ್ ಇನ್ಸ್‌ಪೆಕ್ಟರ್, ಸ್ಟಾಫ್ ನರ್ಸ್, ಗ್ರೂಪ್ ಡಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಸುಮಾರು 30 ಸಾವಿರ ನೌಕರರು ದುಡಿಯುತ್ತಿದ್ದಾರೆ, ಅತ್ಯಲ್ಪ ವೇತನ ಪಡೆದು ಯಾವುದೇ ಸೌಲಭ್ಯಗಳಿಲ್ಲದೆ ಕಾರ್ಯ ನಿರ್ವಹಿಸುತ್ತಿದ್ದೇವೆ. ಬೇಡಿಕೆ ಈಡೇರಿಕೆಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಸಂಘದ ಸದಸ್ಯ ದೇಶಿಕ್, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಎಲ್ಲ ಗುತ್ತಿಗೆ ನೌಕರರಿಗೆ ನಿವೃತ್ತಿಯ ವಯಸ್ಸಿನವರೆಗೂ ಸೇವಾ ಭತ್ಯೆಗಳನ್ನು ನೀಡಬೇಕು. ಭತ್ಯೆ ಹಾಗೂ ವೇತನ ಶ್ರೇಣಿ ನೀಡಲು ಹರಿಯಾಣ ಮಾದರಿಯ ಸಮಗ್ರ ಎಚ್‌ಆರ್ ಪಾಲಿಸಿ ರಚಿಸಬೇಕು. ಗುತ್ತಿಗೆ ನೌಕರರ ಕ್ಷೇಮಾಭಿವೃದ್ಧಿ ಕಾಯ್ದೆ ರಚಿಸಿ ಸೇವಾ ಭದ್ರತೆ ಒದಗಿಸಬೇಕು. ಹೊರಗುತ್ತಿಗೆ ನೌಕರರಿಗೆ ಇಲಾಖೆಯಿಂದಲೇ ವೇತನ ಪಾವತಿಸಬೇಕು. ಒಳಗುತ್ತಿಗೆ ನೌಕರರಿಗೆ ಸಿಗುವ ಎಲ್ಲ ಸೌಲಭ್ಯಗಳು ಹೊರಗುತ್ತಿಗೆ ನೌಕರರಿಗೂ ವಿಸ್ತರಿಸಬೇಕು ಎಂದು ಆಗ್ರಹಿಸಿದರು.
ಸರ್ಕಾರಿ ನೌಕರರಿಗೆ ನೀಡುವ ಜ್ಯೋತಿ ಸಂಜೀವಿನಿ ವೈದ್ಯಕೀಯ ಯೋಜನೆಯನ್ನು ಗುತ್ತಿಗೆ ನೌಕರರಿಗೆ ಜಾರಿಗೊಳಿಸಬೇಕು. ಸರ್ಕಾರಿ ನೇಮಕಾತಿಗಳಲ್ಲಿ ಗುತ್ತಿಗೆ ನೌಕರರಿಗೆ ವಯೋಮಿತಿ ವಿಸ್ತರಿಸಬೇಕು. ಕಾಯಂ ನೇಮಕಾತಿ ನಡೆದರೂ ಗುತ್ತಿಗೆ ನೌಕರರನ್ನು ಸೇವೆಯಿಂದ ತೆಗೆಯಬಾರದು. ಕೆಲಸದ ಸ್ಥಳಗಳಲ್ಲಿ ಗುತ್ತಿಗೆ ನೌಕರರ ಮೇಲಿನ ಶೋಷಣೆ ತಡೆಗೆ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ನೌಕರರ ಅಹವಾಲು ಸಮಿತಿ ರಚಿಸಬೇಕು ಎಂದು ಒತ್ತಾಯಿಸಿದರು.
ಬೇಡಿಕೆಗಳು ಈಡೇರುವವರೆಗೂ ಅಹೋರಾತ್ರಿ ಧರಣಿ ಕೈಬಿಡುವುದಿಲ್ಲ. ಮತ್ತಷ್ಟು ನೌಕರರು ಧರಣಿ ಸೇರಿಕೊಳ್ಳಲಿದ್ದಾರೆ. ಇದರಿಂದ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆಯಲ್ಲಿ ವ್ಯತ್ಯವಾಗಲಿದೆ. ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸಿಲ್ಲ. ಹಾಗಾಗಿ ಧರಣಿ ಅನಿವಾರ್ಯವಾಗಿದೆ.
- ಎಚ್.ವೈ.ವಿಶ್ವಾರಾಧ್ಯ, ಅಧ್ಯಕ್ಷ, ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Feb 11, 2019, 8:17 AM IST