ಚಿತ್ರದುರ್ಗ(ಅ.9): ಮುಂದಿನ ಆರು ತಿಂಗಳೊಳಗೆ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪತನವಾಗುವುದು ನಿಶ್ಚಿತ. ಹಾಗಾಗಿ, ಕಾರ್ಯಕರ್ತರೆಲ್ಲರೂ ಕಾಂಗ್ರೆಸ್‌ ಪಕ್ಷವನ್ನು ಸದೃಢಗೊಳಿಸಲು ಸನ್ನದ್ಧರಾಗಬೇಕಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಹೇಳಿದ್ದಾರೆ.  

ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು,  ಬಿ.ಎಸ್‌.ಯಡಿಯೂರಪ್ಪ ಅವರ ಮೇಲೆ ಅವರ ಪಕ್ಷದ ನಾಯಕರಿಗೆ ವಿಶ್ವಾಸವಿಲ್ಲದಂತಾಗಿದೆ. ಇನ್ನು ಆರು  ತಿಂಗಳೊಳಗೆ ರಾಜ್ಯ ಬಿಜೆಪಿ ಸರ್ಕಾರ ಪಥವಾಗುವುದು ನಿಶ್ಚಿತ. ಮತ್ತೆ ಚುನಾವಣೆ ನಡೆಯುತ್ತದೆ. ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ತರುವ ಜವಾಬ್ದಾರಿ ಎಲ್ಲರ ಮೇಲಿರುವುದರಿಂದ ಕಾರ್ಯಕರ್ತರು ಸಿದ್ಧರಾಗಿ ಎಂದು ಹೇಳಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಕೇಂದ್ರದ ಕೋಮುವಾದಿ ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಕಾರ್ಯಕರ್ತರು, ಮುಖಂಡರು ಸಿದ್ಧರಾಗಬೇಕಿದೆ. ಉತ್ತರ ಕರ್ನಾಟಕದಲ್ಲಿ ನೆರೆ ಪರಿಹಾರ ಉಂಟಾಗಿ ಎರಡು ತಿಂಗಳು ಕಳೆದರೂ ಕೇಂದ್ರದಿಂದ ಇನ್ನು ಪರಿಹಾರ ಸಿಕ್ಕಿಲ್ಲ. ಅಂದಾಜು 1 ಲಕ್ಷ ಕೋಟಿ ನಷ್ಟವಾಗಿದೆ. ಆದರೆ, ಕೇಂದ್ರ ಸರ್ಕಾರ ಬರೀ 1200 ಕೋಟಿ ಪರಿಹಾರ ನೀಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಪ್ರಭಾವಿ ನಾಯಕರಾಗಿದ್ದು, ವಿಪಕ್ಷ ನಾಯಕರ ಆಯ್ಕೆ ವಿಚಾರದಲ್ಲಿ ಎಲ್ಲರನ್ನೂ ಗಣನೆಗೆ ತೆಗೆದುಕೊಂಡು, ನಮ್ಮ ಹೈಕಮಾಂಡ್‌ ಸೂಕ್ತ ನಿರ್ಧಾರವನ್ನೇ ಕೈಗೊಳ್ಳುತ್ತದೆ ಎಂದರು.