ಹುಬ್ಬಳ್ಳಿ(ಏ.06): ಕೊರೋನಾ ತಡೆಯಲು ಸರ್ಕಾರ ಹತ್ತು ಹಲವು ಕ್ರಮಕೈಗೊಳ್ಳುತ್ತಿದ್ದು, ಇದೀಗ ಇಲ್ಲಿನ ಅಮರಗೋಳದಲ್ಲಿನ ಎಪಿಎಂಸಿ ಮಹಾದ್ವಾರದ ಬಳಿ ಸೋಂಕು ಕಳೆಯುವ ಸುರಂಗ ನಿರ್ಮಿಸಿದೆ. ಉತ್ತರ ಕರ್ನಾಟಕದಲ್ಲಿ ಮೊದಲ ಪ್ರಯತ್ನವಾಗಿದೆ. ಸುರಂಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್‌ ಶೆಟ್ಟರ್‌ ಚಾಲನೆ ನೀಡಿದ್ದಾರೆ. 

ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ, ಸ್ಥಳೀಯ ಯಂಗ್‌ ಇಂಡಿಯಾ (ವೈಐ) ಹಾಗೂ ಕಾನ್ಫಿಡರೇಷನ್‌ ಆಫ್‌ ಇಂಡಿಯನ್‌ ಇಂಡಸ್ಟ್ರಿ (ಸಿಐಐ) ಸಹಯೋಗದಲ್ಲಿ ಅಮರಗೋಳದ ಎಪಿಎಂಸಿ ಮಹಾದ್ವಾರದ ಬಳಿ ಸೋಂಕು ಕಳೆಯುವ ಸುರಂಗ ನಿರ್ಮಿಸಲಾಗಿದೆ.

10 ದಿನದಲ್ಲಿ ಹೆಚ್ಚು ಕೊರೋನಾ, ಮಾನಸಿಕವಾಗಿ ಸಿದ್ಧರಾಗಿ: ಡಾ. ದೇವಿ ಶೆಟ್ಟಿ

ಚಾಲನೆ ನೀಡಿದ ಸಚಿವ ಜಗದೀಶ ಶೆಟ್ಟರ್‌ ಮಾತನಾಡಿ, ಸಾವಿರಾರು ಸಂಖ್ಯೆಯಲ್ಲಿ ಆಗಮಿಸುವ ರೈತರು, ವ್ಯಾಪಾರಸ್ಥರ ಆರೋಗ್ಯ ರಕ್ಷಣೆಗೆ ಇದು ಸಹಕಾರಿಯಾಗಲಿದೆ. ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಘಟನೆಗಳ ಸಹಭಾಗಿತ್ವದಲ್ಲಿ ಈ ಕಾರ್ಯ ಮಾಡಿರುವುದು ಉತ್ತಮ ಬೆಳವಣಿಗೆ ಎಂದರು.

ಯಂಗ್‌ ಇಂಡಿಯಾ ಸಂಸ್ಥೆ ಅಧ್ಯಕ್ಷ ಡಾ. ಶ್ರೀನಿವಾಸ ಜೋಶಿ ಮಾತನಾಡಿ, ತಮಿಳುನಾಡಿನ ತಿರುಪ್ಪೂರನಲ್ಲಿ ಅಲ್ಲಿನ ಯಂಗ್‌ ಇಂಡಿಯಾ ಸಂಸ್ಥೆ ಇಂತಹ ಪ್ರಯತ್ನ ಮಾಡಿದೆ. ಅದನ್ನು ಕಂಡು, ಇಲ್ಲಿ ಸ್ಥಾಪಿಸಿದ್ದೇವೆ. ಪಾರಾದಿ ಅವರಿಂದ ಸ್ಟೀಲ್‌ ಫ್ರೇಮ್‌ ಸಿದ್ಧಪಡಿಸಿ, ಹೈ ಪ್ರೆಶರ್‌ ಉಳ್ಳ ಫಾಗರ್ಸ್‌, 1 ಅಶ್ವಶಕ್ತಿಯ ಪಂಪ್‌ ಅಳವಡಿಸಲಾಗಿದೆ. ಸುರಂಗದ 4 ಅಡಿ ಅಂತರದಲ್ಲಿ ವ್ಯಕ್ತಿಗಳು ಬಂದಾಗ ಸೆನ್ಸಾರ್‌ ಮೂಲಕ ಕಾರ್ಯ ಆರಂಭವಾಗುತ್ತದೆ. ಮನುಷ್ಯ ತೊಯ್ಯದ ಹಾಗೆ ಸೋಂಕು ನಿವಾರಕ ಸಿಂಪಡಣೆಯಾಗುತ್ತದೆ. ಶೇ. 1ರ ಸೋಡಿಯಂ ಹೈಪೋಕ್ಲೋರೈಟ್‌ ಮಿಶ್ರಿತ ದ್ರಾವಣವನ್ನು ಮಹಾನಗರ ಪಾಲಿಕೆ ನಿರಂತರವಾಗಿ ಒದಗಿಸಲಿದೆ. ಯಂಗ್‌ ಇಂಡಿಯಾ ಮತ್ತು ಸಿಐಐ 1 ಲಕ್ಷ ವೆಚ್ಚದಲ್ಲಿ ಪ್ರಾಯೋಗಿಕವಾಗಿ ಈ ಕಾರ್ಯ ಕೈಗೊಂಡಿದೆ ಎಂದು ತಿಳಿಸಿದರು.

ಮಹಾನಗರ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಮಾತನಾಡಿ, ಹುಬ್ಬಳ್ಳಿ ಎಪಿಎಂಸಿಗೆ ಪ್ರತಿನಿತ್ಯ ಸಾವಿರಾರು ರೈತರು, ವ್ಯಾಪಾರಿಗಳಿಗೆ ಸೋಂಕು ಹರಡುವಿಕೆ ತಡೆಯಲು ಈ ಪ್ರಯತ್ನ ಮಾಡಲಾಗಿದೆ. ಸಾರ್ವಜನಿಕರು ಸ್ವಲ್ಪ ತಾಳ್ಮೆಯಿಂದ ವಾಹನದಿಂದ ಇಳಿದು, ಸುರಂಗದಲ್ಲಿ ಒಮ್ಮೆ ಹಾಯ್ದು ಬರುವ ಅಭ್ಯಾಸ ರೂಢಿಸಿಕೊಂಡರೆ ಒಳ್ಳೆಯದು ಎಂದರು.

ಜಿಲ್ಲಾಧಿಕಾರಿ ದೀಪಾ ಚೋಳನ್‌, ಮಹಾನಗರ ಪೊಲೀಸ್‌ ಆಯುಕ್ತ ಆರ್‌. ದಿಲೀಪ್‌, ಮಹಾನಗರ ಪಾಲಿಕೆ ಪರಿಸರ ಎಂಜಿನಿಯರ್‌ ನಯನಾ, ಪೊಲೀಸ್‌ ಇನ್‌ಸ್ಪೆಕ್ಟರ್‌ ಪ್ರಭು ಸೂರಿನ್‌, ಯಂಗ್‌ ಇಂಡಿಯಾದ ಸಚಿನ್‌, ಡಾ. ನಾಗರಾಜ ನಾಯಕ, ಕಿರಣ ಮಾಳವದೆ, ಸಿಐಐ ಅಧ್ಯಕ್ಷ ವಿ.ಎಸ್‌.ವಿ. ಪ್ರಸಾದ, ಅನುಪಮಾ ಬೇತಾಳ ಇದ್ದರು.