ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಕೇವಲ 35 ಎಸೆತಗಳಲ್ಲಿ ಸ್ಪೋಟಕ ಶತಕ ಸಿಡಿಸಿದ್ದಾರೆ. ಒಟ್ಟು 113 ರನ್ ಗಳಿಸಿದ ಇವರು, ಟಿ20 ಕ್ರಿಕೆಟ್ನಲ್ಲಿ ಅತಿಹೆಚ್ಚು ಶತಕ ಬಾರಿಸಿದ ವಿರಾಟ್ ಕೊಹ್ಲಿಯವರ ದಾಖಲೆಯನ್ನು ಮುರಿದಿದ್ದಾರೆ.
ವೆಲ್ಲಿಂಗ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ವಿಸ್ಪೋಟಕ ಶತಕ ಸಿಡಿಸಿ ಗಮನ ಸೆಳೆದಿದ್ದಾರೆ. ಕಿವೀಸ್ ಬೌಲರ್ಗಳನ್ನು ಮನಬಂದಂತೆ ದಂಡಿಸಿದ ಅಭಿಷೇಕ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಮತ್ತೊಂದು ಶತಕ ಸಿಡಿಸಿ ಸಂಭ್ರಮಿಸಿದ್ದಾರೆ.
14 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕಿವೀಸ್ ನೀಡಿದ್ದ 199 ರನ್ಗಳ ಕಠಿಣ ಗುರಿ ಬೆನ್ನತ್ತಿದ ಟೀಂ ಇಂಡಿಯಾಗೆ ಅಭಿಷೇಕ್ ಶರ್ಮಾ ಹಾಗೂ ವೈಭವ್ ಸೂರ್ಯವಂಶಿ ಸ್ಪೋಟಕ ಅರಂಭ ಒದಗಿಸಿಕೊಟ್ಟರು. ಅಭಿಷೇಕ್ ಶರ್ಮಾ ಮೊದಲ ಎಸೆತದಲ್ಲೇ ಸಿಕ್ಸರ್ ಚಚ್ಚುವ ಮೂಲಕ ತಾನು ಅಪಾಯಕಾರಿಯಾಗಬಲ್ಲೇ ಎನ್ನುವ ಸ್ಪಷ್ಟ ಸಂದೇಶವನ್ನು ರವಾನಿಸಿದರು. ಕೇವಲ 14 ಎಸೆತಗಳಲ್ಲೇ ಅರ್ಧಶತಕ ಸಿಡಿಸುವ ಮೂಲಕ ಅಭಿಷೇಕ್ ಶರ್ಮಾ, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಎರಡನೇ ಅತಿವೇಗದ ಅರ್ಧಶತಕ ಸಿಡಿಸಿದ ಸಾಧನೆ ಮಾಡಿದರು. ಯುವರಾಜ್ ಸಿಂಗ್ 12 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು, ಇದೀಗ ಕಾಲಿನ್ ಮನ್ರೋ ಜತೆ ಅಭಿಷೇಕ್ ಶರ್ಮಾ 14 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಜಂಟಿ ಎರಡನೇ ಸ್ಥಾನಕ್ಕೇರಿದರು.
ಇದಾದ ಬಳಿಕವೂ ಸ್ಪೋಟಕ ಬ್ಯಾಟಿಂಗ್ ಮುಂದುವರೆಸಿದ ಅಭಿಷೇಕ್ ಶರ್ಮಾ ಕೇವಲ 35 ಎಸೆತಗಳಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ಕ್ರಿಕೆಟ್ ಶತಕ ಸಿಡಿಸುವಲ್ಲಿ ಯಶಸ್ವಿಯಾದರು. ಇದು ಅಭಿಷೇಕ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಬಾರಿಸಿದ ನಾಲ್ಕನೇ ಶತಕ ಎನಿಸಿಕೊಂಡಿತು. ಅಂತಿಮವಾಗಿ ಅಭಿಷೇಕ್ ಶರ್ಮಾ ಕೇವಲ 38 ಎಸೆತಗಳನ್ನು ಎದುರಿಸಿ 9 ಬೌಂಡರಿ ಹಾಗೂ 11 ಮುಗಿಲೆತ್ತರದ ಸಿಕ್ಸರ್ಗಳಗಳ ನೆರವಿನಿಂದ 113 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರು.
ವಿರಾಟ್ ಕೊಹ್ಲಿ ದಾಖಲೆ ಮುರಿದ ಅಭಿಷೇಕ್ ಶರ್ಮಾ:
ಇನ್ನು ಟಿ20 ಕ್ರಿಕೆಟ್ನಲ್ಲಿ ಇದೀಗ ಅಭಿಷೇಕ್ ಶರ್ಮಾ 11ನೇ ಶತಕ ಸಿಡಿಸುವ ಮೂಲಕ ಈ ಮಾದರಿಯ ಕ್ರಿಕೆಟ್ನಲ್ಲಿ ಅತಿಹೆಚ್ಚು ಶತಕ ಸಿಡಿಸಿದ ಭಾರತೀಯ ಬ್ಯಾಟರ್ ಎನ್ನುವ ಅಪರೂಪದ ದಾಖಲೆಗೆ ಅಭಿಷೇಕ್ ಶರ್ಮಾ ಪಾತ್ರರಾಗಿದ್ದಾರೆ. ಅಭಿಷೇಕ್ ಶರ್ಮಾ ಇದುವರೆಗೂ ಕೇವಲ 216 ಇನ್ನಿಂಗ್ಸ್ಗಳನ್ನಾಡಿ 11 ಟಿ20 ಶತಕ ಸಿಡಿಸಿದ್ದಾರೆ. ಇದಕ್ಕೂ ಮೊದಲು ವಿರಾಟ್ ಕೊಹ್ಲಿ 413 ಟಿ20 ಇನ್ನಿಂಗ್ಸ್ಗಳನ್ನಾಡಿ 10 ಶತಕ ಸಿಡಿಸಿದ್ದರು. ಇನ್ನುಳಿದಂತೆ ಕೆ ಎಲ್ ರಾಹುಲ್(210 ಇನ್ನಿಂಗ್ಸ್), ಸಂಜು ಸ್ಯಾಮ್ಸನ್(344 ಇನ್ನಿಂಗ್ಸ್) ಹಾಗೂ ರೋಹಿತ್ ಶರ್ಮಾ(459) ಇನ್ನಿಂಗ್ಸ್ಗಳನ್ನಾಡಿ 8 ಟಿ20 ಶತಕ ಸಿಡಿಸಿದ್ದಾರೆ.






