ಏಷ್ಯಾಕಪ್ ಸೂಪರ್-4 ಹಂತದ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ 6 ವಿಕೆಟ್‌ಗಳ ಜಯ ಸಾಧಿಸಿದೆ. ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಅಭಿಷೇಕ್ ಶರ್ಮಾ, ಕೇವಲ 24 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ತಮ್ಮ ಗುರು ಯುವರಾಜ್ ಸಿಂಗ್ ಅವರ ದಾಖಲೆಯನ್ನು ಮುರಿದರು.
ದುಬೈ: ಭಾರತ ಹಾಗೂ ಪಾಕಿಸ್ತಾನ ನಡುವಿನ ಏಷ್ಯಾಕಪ್ ಟೂರ್ನಿಯ ಸೂಪರ್-4 ಹಂತದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ 6 ವಿಕೆಟ್ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಭಾರತ ಫೀಲ್ಡಿಂಗ್ ವೇಳೆ ಅಭಿಷೇಕ್ ಶರ್ಮಾ ಕೊಂಚ ಮಂಕಾಗಿದ್ದರು, ಆದರೆ ಬ್ಯಾಟಿಂಗ್‌ನಲ್ಲಿ ಮತ್ತೊಮ್ಮೆ ವಿಸ್ಪೋಟಕ ಇನ್ನಿಂಗ್ಸ್ ಆಡುವ ಮೂಲಕ ತಮ್ಮ ಗುರು ಯುವರಾಜ್ ಸಿಂಗ್ ಹೆಸರಿನಲ್ಲಿದ್ದ ದಾಖಲೆಯನ್ನು ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಗೆಲ್ಲಲಿ 172 ರನ್‌ಗಳ ಸವಾಲಿನ ಗುರಿ ಬೆನ್ನತ್ತಿದ ಟೀಂ ಇಂಡಿಯಾಗೆ ಅಭಿಷೇಕ್ ಶರ್ಮಾ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲೇ ಶಾಹೀನ್ ಅಫ್ರಿದಿಗೆ ಸಿಕ್ಸರ್ ಸಿಡಿಸುವ ಮೂಲಕ ರನ್ ಖಾತೆಯನ್ನು ಆರಂಭಿಸಿದರು. ಇದಾದ ಬಳಿಕವೂ ಮಿಂಚಿನ ಬ್ಯಾಟಿಂಗ್ ನಡೆಸಿದ ಅಭಿಷೇಕ್ ಶರ್ಮಾ, ಏಷ್ಯಾಕಪ್ ಟೂರ್ನಿಯಲ್ಲಿ ತಮ್ಮ ಮೊದಲ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. ಇದರ ಜತೆಗೆ ಪಾಕಿಸ್ತಾನ ಎದುರು ಅಭಿಷೇಕ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆ ಬರೆಯುವಲ್ಲಿಯೂ ಯಶಸ್ವಿಯಾಗಿದ್ದಾರೆ.
ಇತಿಹಾಸ ಬರೆದ ಅಭಿಷೇಕ್ ಶರ್ಮಾ
ಏಷ್ಯಾಕಪ್ ಟೂರ್ನಿಯ ಗ್ರೂಪ್ ಹಂತದಲ್ಲಿ ಅಭಿಷೇಕ್ ಶರ್ಮಾ ಉತ್ತಮ ಆರಂಭದ ಹೊರತಾಗಿಯೂ ಅರ್ಧಶತಕ ಸಿಡಿಸಲು ಸಾಧ್ಯವಾಗಿರಲಿಲ್ಲ. ಆದರೆ ಮಹತ್ವದ ಘಟ್ಟದಲ್ಲಿ ಪಾಕ್ ಎದುರು ಮೈ ಚಳಿ ಬಿಟ್ಟು ಬ್ಯಾಟ್ ಬೀಸಿದ ಅಭಿಷೇಕ್ ಶರ್ಮಾ ಕೇವಲ 24 ಎಸೆತಗಳನ್ನು ಎದುರಿಸಿ ತಮ್ಮ ಅರ್ಧಶತಕ ಸಿಡಿಸುವಲ್ಲಿ ಯಶಸ್ವಿಯಾದರು. ಈ ಮೂಲಕ ತಮ್ಮ ಗುರು ಯುವರಾಜ್ ಸಿಂಗ್ ಹೆಸರಿನಲ್ಲಿದ್ದ ದಾಖಲೆ ಅಳಿಸಿಹಾಕುವಲ್ಲಿ ಅಭಿಷೇಕ್ ಶರ್ಮಾ ಯಶಸ್ವಿಯಾಗಿದ್ದಾರೆ.
ಹೌದು, ಈ ಮೊದಲು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿವೇಗದ ಅರ್ಧಶತಕ ಸಿಡಿಸಿದ ದಾಖಲೆ ಎಡಗೈ ಬ್ಯಾಟರ್ ಯುವರಾಜ್ ಸಿಂಗ್ ಹೆಸರಿನಲ್ಲಿತ್ತು. ಯುವಿ ಪಾಕ್ ಎದುರು 29 ಎಸೆತಗಳನ್ನು ಎದುರಿಸಿ ಅರ್ಧಶತಕ ಸಿಡಿಸಿದ್ದರು. ಆದರೆ ಇದೀಗ ಅಭಿಷೇಕ್ ಶರ್ಮಾ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ಯುವಿ ದಾಖಲೆ ಬ್ರೇಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
74 ರನ್ ಸಿಡಿಸಿ ವಿಕೆಟ್ ಒಪ್ಪಿಸಿದ ಅಭಿಷೇಕ್ ಶರ್ಮಾ
ಪಾಕಿಸ್ತಾನ ಎದುರು ಅಭಿಷೇಕ್ ಶರ್ಮಾ ಆಕರ್ಷಕ ಬ್ಯಾಟಿಂಗ್ ನಡೆಸುವ ಮೂಲಕ ಗಮನ ಸೆಳೆದರು. ಶುಭ್‌ಮನ್ ಗಿಲ್ ಜತೆಗೂಡಿ ಮೊದಲ ವಿಕೆಟ್‌ಗೆ ಅಭಿಷೇಕ್ ಶರ್ಮಾ 105 ರನ್‌ಗಳ ಜತೆಯಾಟವಾಡಿದರು. ಇನ್ನು ಪಾಕ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಅಭಿಷೇಕ್ ಶರ್ಮಾ ಕೇವಲ 39 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ 5 ಮುಗಿಲೆತ್ತರದ ಸಿಕ್ಸರ್‌ಗಳ ನೆರವಿನಿಂದ ಸ್ಪೋಟಕ 74 ರನ್ ಸಿಡಿಸಿದರು.
