Asianet Suvarna News Asianet Suvarna News

Asia Cup 2023: ಏಷ್ಯಾಕಪ್‌ ಗೆಲ್ಲಲು ಬಲಿಷ್ಠ ಭಾರತ ಕ್ರಿಕೆಟ್‌ ತಂಡ ಪ್ರಕಟ..! ವಿಶ್ವಕಪ್‌ಗೂ ತಂಡ ಸಿದ್ದ..!

6 ತಂಡಗಳ ಟೂರ್ನಿ ಆಗಸ್ಟ್‌ 30ರಿಂದ ಸೆಪ್ಟೆಂಬರ್ 17ರ ವರೆಗೆ ನಡೆಯಲಿದ್ದು, ಪಾಕಿಸ್ತಾನದ ಮುಲ್ತಾನ್‌, ಲಾಹೋರ್‌ ಒಟ್ಟು 4, ಶ್ರೀಲಂಕಾದ ಕ್ಯಾಂಡಿ ಹಾಗೂ ಕೊಲಂಬೊ ಫೈನಲ್‌ ಸೇರಿ 9 ಪಂದ್ಯಗಳಿಗೆ ಆತಿಥ್ಯ ವಹಿಸಲಿವೆ. ಕನ್ನಡಿಗ ಕೆ ಎಲ್ ರಾಹುಲ್ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಭಾರತ ಕ್ರಿಕೆಟ್ ತಂಡ ಕೂಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

Asia Cup 2023 India pick KL Rahul Shreyas Iyer drop Sanju Samson kvn
Author
First Published Aug 21, 2023, 1:34 PM IST

ನವದೆಹಲಿ(ಆ.21): ಬಹುನಿರೀಕ್ಷಿತ ಇದೇ ಆಗಸ್ಟ್‌ 30ರಿಂದ ಆರಂಭವಾಗಲಿರುವ ಏಷ್ಯಾಕಪ್ ಟೂರ್ನಿಗೆ 17 ಆಟಗಾರರನ್ನೊಳಗೊಂಡ ಬಲಿಷ್ಠ ಭಾರತ ಕ್ರಿಕೆಟ್ ತಂಡ ಪ್ರಕಟವಾಗಿದೆ. ರೋಹಿತ್ ಶರ್ಮಾ ನಾಯಕನಾಗಿ ಭಾರತ ಕ್ರಿಕೆಟ್ ತಂಡವನ್ನು ಮುನ್ನಡೆಸಲಿದ್ದು, ಕನ್ನಡಿಗ ಕೆ ಎಲ್ ರಾಹುಲ್ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಭಾರತ ಕ್ರಿಕೆಟ್ ತಂಡ ಕೂಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್‌ಗೆ ಮತ್ತೊಮ್ಮೆ ನಿರಾಸೆ ಎದುರಾಗಿದ್ದು, ತಿಲಕ್‌ ವರ್ಮಾಗೆ ಮಣೆ ಹಾಕಲಾಗಿದೆ.

ಮುಂಬರುವ ಅಕ್ಟೋಬರ್ 05ರಿಂದ ಭಾರತದಲ್ಲೇ ಆರಂಭವಾಗಲಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಏಷ್ಯಾಕಪ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡವನ್ನು ಆಯ್ಕೆ ಮಾಡಲಾಗಿದೆ. ವೆಸ್ಟ್ ಇಂಡೀಸ್ ಎದುರಿನ ಸರಣಿಯಲ್ಲಿ ಮಿಂಚಿದ್ದ ಯುವ ಎಡಗೈ ಬ್ಯಾಟರ್‌ ತಿಲಕ್ ವರ್ಮಾಗೆ ಭಾರತ ತಂಡದಲ್ಲಿ ಸ್ಥಾನ ನೀಡಲಾಗಿದೆ. ಇನ್ನು ವಿಕೆಟ್ ಕೀಪರ್‌ ಬ್ಯಾಟರ್‌ ಆಗಿ ಕೆ ಎಲ್ ರಾಹುಲ್ ಹಾಗೂ ಇಶಾನ್ ಕಿಶನ್ ಸ್ಥಾನ ಪಡೆದಿದ್ದು, ಸಂಜು ಸ್ಯಾಮ್ಸನ್‌ ಮೀಸಲು ಆಟಗಾರನಾಗಿ ಸ್ಥಾನ ಪಡೆದಿದ್ದಾರೆ.

ಇನ್ನುಳಿದಂತೆ ಭಾರತದ ಭವಿಷ್ಯದ ನಾಯಕ ಎಂದೇ ಬಿಂಬಿತವಾಗಿರುವ ಹಾರ್ದಿಕ್ ಪಾಂಡ್ಯಗೆ ಉಪನಾಯಕ ಪಟ್ಟ ಕಟ್ಟಲಾಗಿದೆ. ಇನ್ನುಳಿದಂತೆ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ, ಬೌಲಿಂಗ್ ಆಲ್ರೌಂಡರ್‌ಗಳಾದ ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್ ಕೂಡಾ ಏಷ್ಯಾಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಬೌಲಿಂಗ್ ವಿಭಾಗದಲ್ಲಿ ತ್ರಿವಳಿ ವೇಗಿಗಳಾದ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್ ತಂಡದಲ್ಲಿ ಸ್ಥಾನ ಪಡೆದಿದ್ದು, ಕುಲ್ದೀಪ್ ಯಾದವ್‌ ತಜ್ಞ ಸ್ಪಿನ್ನರ್ ರೂಪದಲ್ಲಿ ಸ್ಥಾನ ಪಡೆದಿದ್ದಾರೆ.

ಏಷ್ಯಾಕಪ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡ ಹೀಗಿದೆ ನೋಡಿ:

ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್‌, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ

6 ತಂಡಗಳ ಟೂರ್ನಿ ಆಗಸ್ಟ್‌ 30ರಿಂದ ಸೆಪ್ಟೆಂಬರ್ 17ರ ವರೆಗೆ ನಡೆಯಲಿದ್ದು, ಪಾಕಿಸ್ತಾನದ ಮುಲ್ತಾನ್‌, ಲಾಹೋರ್‌ ಒಟ್ಟು 4, ಶ್ರೀಲಂಕಾದ ಕ್ಯಾಂಡಿ ಹಾಗೂ ಕೊಲಂಬೊ ಫೈನಲ್‌ ಸೇರಿ 9 ಪಂದ್ಯಗಳಿಗೆ ಆತಿಥ್ಯ ವಹಿಸಲಿವೆ. ಸೆಪ್ಟೆಂಬರ್ 19ರಂದು ಏಷ್ಯಾಕಪ್‌ ಫೈನಲ್‌ ಪಂದ್ಯಕ್ಕೆ ಕೊಲಂಬೊದ ಪ್ರೇಮದಾಸ ಸ್ಟೇಡಿಯಂ ಸಾಕ್ಷಿಯಾಗಲಿದೆ.

ಏಷ್ಯಾಕಪ್‌ಗೆ ಇಂದು ಭಾರತ ಕ್ರಿಕೆಟ್ ತಂಡ ಆಯ್ಕೆ; ಯಾರಿಗೆಲ್ಲಾ ಸ್ಥಾನ?

ಏಷ್ಯಾಕಪ್‌ ಟೂರ್ನಿಯ ಆತಿಥ್ಯದ ಹಕ್ಕನ್ನು ಪಾಕಿಸ್ತಾನ ಪಡೆದುಕೊಂಡಿತ್ತು. ಆದರೆ ರಾಜತಾಂತ್ರಿಕ ಬಿಕ್ಕಟ್ಟಿನಿಂದಾಗಿ, ಭಾರತ ಕ್ರಿಕೆಟ್ ತಂಡವು ಪಾಕಿಸ್ತಾನದಲ್ಲಿ ಏಷ್ಯಾಕಪ್ ಆಡಲು ಹಿಂದೇಟು ಹಾಕಿತ್ತು. ಹೀಗಾಗಿ ಈ ಬಾರಿಯ ಏಷ್ಯಾಕಪ್ ಟೂರ್ನಿಯನ್ನು ಹೈಬ್ರೀಡ್‌ ಮಾದರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಅದರಂತೆ 4 ಪಂದ್ಯಗಳನ್ನು ಪಾಕಿಸ್ತಾನದಲ್ಲಿ ಹಾಗೂ ಉಳಿದ 9 ಪಂದ್ಯಗಳನ್ನು ಶ್ರೀಲಂಕಾದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.

ಟೂರ್ನಿ ಮಾದರಿ ಹೇಗೆ?

6 ತಂಡಗಳನ್ನು ತಲಾ 3 ತಂಡಗಳ 2 ಗುಂಪುಗಳನ್ನಾಗಿ ವಿಂಗಡಿಸಲಾಗಿದೆ. ಭಾರತ, ಪಾಕಿಸ್ತಾನ, ನೇಪಾಳ ‘ಎ’ ಗುಂಪಿನಲ್ಲಿದ್ದು, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ‘ಬಿ’ ಗುಂಪಿನಲ್ಲಿವೆ. ಗುಂಪು ಹಂತದಲ್ಲಿ ಪ್ರತಿ ತಂಡ ಇನ್ನುಳಿದ 2 ತಂಡದ ವಿರುದ್ಧ ಒಮ್ಮೆ ಸೆಣಸಲಿದೆ. ಗುಂಪಿನಲ್ಲಿ ಅಗ್ರ-2 ಸ್ಥಾನ ಪಡೆವ ತಂಡಗಳು ಸೂಪರ್‌-4 ಹಂತಕ್ಕೇರಲಿವೆ. ಸೂಪರ್‌-4ನಲ್ಲಿ ಪ್ರತಿ ತಂಡ ಇನ್ನುಳಿದ 3 ತಂಡದ ವಿರುದ್ಧ ಒಮ್ಮೆ ಆಡಲಿದ್ದು, ಅಂಕಪಟ್ಟಿಯಲ್ಲಿ ಅಗ್ರ-2 ಸ್ಥಾನ ಪಡೆಯುವ ತಂಡಗಳು ಫೈನಲ್‌ಗೇರಲಿವೆ.


 

Follow Us:
Download App:
  • android
  • ios