ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾಕಪ್ ಪಂದ್ಯ ರದ್ದತಿಗೆ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಪಾಕಿಸ್ತಾನದ ಉಗ್ರರ ವಿರುದ್ಧದ ಹೋರಾಟದ ಹಿನ್ನೆಲೆಯಲ್ಲಿ ಪಂದ್ಯವನ್ನು ರದ್ದುಗೊಳಿಸಬೇಕೆಂದು ಕೆಲವು ಕಾನೂನು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.
ನವದೆಹಲಿ: 17ನೇ ಆವೃತ್ತಿಯ ಬಹುನಿರೀಕ್ಷಿತ ಏಷ್ಯಾಕಪ್ ಟೂರ್ನಿಯ ಬಹುನಿರೀಕ್ಷಿತ ಪಂದ್ಯವಾದ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಸೆಪ್ಟೆಂಬರ್ 14ರಂದು ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯವು ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯಲಿದೆ. ಹೀಗಿರುವಾಗಲೇ ಈ ಪಂದ್ಯ ರದ್ದಾಗಬೇಕು ಎಂದು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದ್ದು, ಹೊಸ ಸಂಚಲನ ಮೂಡಿಸಿದೆ. ಹೀಗಾಗಿ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರತ-ಪಾಕಿಸ್ತಾನ ನಡುವಿನ ಪಂದ್ಯ ನಡೆಯುತ್ತಾ ಅಥವಾ ಕ್ಯಾನ್ಸಲ್ ಆಗುತ್ತಾ ಎನ್ನುವ ಕುತೂಹಲ ಮನೆ ಮಾಡಿದೆ.
ಊರ್ವಸಿ ಜೈನ್ ನೇತೃತ್ವದ ನಾಲ್ವರು ಕಾನೂನು ವಿದ್ಯಾರ್ಥಿಗಳಾದ ಸ್ನೇಹ ರಾಣಿ,ಅಭಿಷೇಕ್ ಶರ್ಮಾ ಹಾಗೂ ಮೊಹಮ್ಮದ್ ಅನಾಸ್ ಚೌಧರಿ ಅವರನ್ನೊಳಗೊಂಡ ತಂಡವು ಅಡ್ವೊಕೇಟ್ ಮೂಲಕ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲೇನಿದೆ?
ಕೆಲ ತಿಂಗಳ ಹಿಂದಷ್ಟೇ ಪಾಕ್ ಮೂಲದ ಉಗ್ರರು ಭಾರತೀಯ ಪ್ರವಾಸಿಗರನ್ನು ನಿರ್ದಯವಾಗಿ ಹತ್ಯೆ ಮಾಡಿದ್ದರು. ಇದಕ್ಕುತ್ತರವಾಗಿ ಭಾರತೀಯ ಸೇನೆ ಆಪರೇಷನ್ ಸಿಂದೂರ್ ಮೂಲಕ ಉಗ್ರರ ಸದೆಬಡಿಯುವಲ್ಲಿ ಯಶಸ್ವಿಯಾಗಿತ್ತು. ಇದೆಲ್ಲದರ ನಡುವೆ ಪಾಕ್ ಉಗ್ರರರಿಗೆ ಕುಮ್ಮಕ್ಕು ನೀಡುತ್ತಿದ್ದು, ಭಾರತ ತಂಡವು ಪಾಕಿಸ್ತಾನ ಎದುರು ಏಷ್ಯಾಕಪ್ ಟೂರ್ನಿಯಲ್ಲಿ ಕಣಕ್ಕಿಳಿಯಬಾರದು ಎನ್ನುವಂತಹ ಕೂಗು ಬಲವಾಗಿ ಕೇಳಿ ಬರುತ್ತಿದೆ. ಇದರ ನಡುವೆ ಇದೀಗ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಕೆಯಾಗಿದೆ. 'ಪಾಕ್ ಪ್ರೇರಿತ ಭಯೋತ್ಪಾದಕರು ನಮ್ಮ ಯೋಧರನ್ನು ಹಾಗೂ ನಾಗರಿಕರನ್ನು ಹತ್ಯಮಾಡುತ್ತಿದ್ದಾರೆ. ಹೀಗಿರುವಾಗ ಪಾಕ್ ಎದುರು ಕ್ರಿಕೆಟ್ ಆಡುವುದು ನಮ್ಮ ಸೈನಿಕರು ಹಾಗೂ ನಾಗರಿಕರ ಬಲಿದಾನಕ್ಕೆ ಮಾಡುವ ಅವಮಾನ' ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಕ್ರಿಕೆಟ್ ರಾಷ್ಟ್ರೀಯ ಹಿತಾಸಕ್ತಿಗಿಂತ ದೊಡ್ಡದಲ್ಲ. ನಮ್ಮ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ಘನತೆಯಿಂದ ಬದುಕುವ ಹಕ್ಕನ್ನು ನೀಡಿದೆ. ನಮ್ಮ ದೇಶದ ಸೈನಿಕರು ಅವರ ಕುಟುಂಬದವರು ನೋವಿನಿಂದ ಕಣ್ಣೀರಿಡುತ್ತಿರುವಾಗ ನಾವು ಪಾಕ್ ಜತೆ ಕ್ರಿಕೆಟ್ ಆಡುವುದು ಉಗ್ರವಾದವನ್ನು ಸಹಿಸಿಕೊಂಡಂತೆ ಆಗಲಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ವಿವರಿಸಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಪಾಕಿಸ್ತಾನ ಎದುರು ಪಂದ್ಯವನ್ನಾಡಲು ಬಿಸಿಸಿಐಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿತ್ತು. ದ್ವಿಪಕ್ಷೀಯ ಸರಣಿಗಳನ್ನು ಹೊರತುಪಡಿಸಿ ಐಸಿಸಿ ಹಾಗೂ ಬಹುಪಕ್ಷೀಯ ಸರಣಿಯಲ್ಲಿ ಭಾರತ ತಂಡವು ಪಾಕಿಸ್ತಾನ ವಿರುದ್ದ ಆಡಲು ಕೇಂದ್ರ ಸರ್ಕಾರ ಅನುಮತಿ ನೀಡಿತ್ತು. ಆದರೆ ಪಾಕಿಸ್ತಾನ ಎದುರು ದ್ವಿಪಕ್ಷೀಯ ಸರಣಿ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿತ್ತು.
ಇದೆಲ್ಲದರ ನಡುವೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿರುವುದು, ಕ್ರಿಕೆಟ್ ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ. ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ಆರಂಭಕ್ಕೆ ಇನ್ನು ಕೇವಲ ಮೂರು ದಿನಗಳಷ್ಟೇ ಬಾಕಿ ಉಳಿದಿವೆ. ಹೀಗಾಗಿ ಸುಪ್ರೀಂ ಕೋರ್ಟ್ ಯಾವ ನಿರ್ಧಾರ ಕೈಗೊಳ್ಳಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.
ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ತಂಡವು ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಇದೇ ಗುಂಪಿನಲ್ಲಿ ಪಾಕಿಸ್ತಾನ, ಯುಎಇ ಹಾಗೂ ಓಮಾನ್ ತಂಡಗಳು ಸ್ಥಾನ ಪಡೆದಿವೆ. ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ, ತಾನಾಡಿದ ಮೊದಲ ಪಂದ್ಯದಲ್ಲಿ ಯುಎಇ ವಿರುದ್ದ 9 ವಿಕೆಟ್ ಅಂತರದ ಭರ್ಜರಿ ಗೆಲುವು ಸಾಧಿಸುವ ಮೂಲಕ ಶುಭಾರಂಭ ಮಾಡಿದೆ. ಎರಡನೇ ಪಂದ್ಯದಲ್ಲಿ ಪಾಕ್ ಸವಾಲು ಎದುರಾಗಲಿದೆ. ಇದಾದ ಬಳಿಕ ಸೆಪ್ಟೆಂಬರ್ 19ರಂದು ಭಾರತ ತನ್ನ ಗ್ರೂಪ್ ಹಂತದ ಕೊನೆಯ ಪಂದ್ಯದಲ್ಲಿ ಓಮಾನ್ ತಂಡವನ್ನು ಎದುರಿಸಲಿದೆ.


