ಏಷ್ಯನ್ ಗೇಮ್ಸ್‌ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್‌ನಲ್ಲಿ ಶ್ರೀಲಂಕಾವನ್ನು 124 ರನ್‌ಗಳಿಂದ ಮಣಿಸಿದ ಭಾರತ ಫೈನಲ್‌ಗೆ ಲಗ್ಗೆಯಿಟ್ಟಿದೆ. ಇಶಾನ್ ಕಿಶನ್ ಅವರ ಸ್ಪೋಟಕ ಅರ್ಧಶತಕ ಹಾಗೂ ಬೌಲರ್‌ಗಳ ಸಂಘಟಿತ ಪ್ರದರ್ಶನ ತಂಡದ ಗೆಲುವಿಗೆ ಕಾರಣವಾಯಿತು. ಅಕ್ಟೋಬರ್ 3ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ.

ಶ್ರೇಯಸ್ ಅಯ್ಯರ್ ನೇತೃತ್ವದ ಟೀಂ ಇಂಡಿಯಾ, ಏಷ್ಯನ್ ಗೇಮ್ಸ್‌ ಕ್ರಿಕೆಟ್ ಟೂರ್ನಿಯಲ್ಲಿ ಶ್ರೀಲಂಕಾ ತಂಡವನ್ನು ಹೀನಾಯವಾಗಿ ಸೋಲಿಸುವ ಮೂಲಕ ಫೈನಲ್‌ಗೆ ಲಗ್ಗೆಯಿಟ್ಟಿದೆ. ಇಶಾನ್ ಕಿಶನ್ ಸ್ಪೋಟಕ ಬ್ಯಾಟಿಂಗ್ ಹಾಗೂ ಬೌಲರ್‌ಗಳ ಸಂಘಟಿತ ಪ್ರದರ್ಶನ ನೆರವಿನಿಂದ ಸೆಮಿಫೈನಲ್ ಪಂದ್ಯದಲ್ಲಿ ನೆರೆಯ ಶ್ರೀಲಂಕಾವನ್ನು 124 ರನ್‌ಗಳಿಂದ ಮಣಿಸಿ ಫೈನಲ್‌ಗೆ ಲಗ್ಗೆಯಿಟ್ಟಿದೆ. ಇದೀಗ ಅಕ್ಟೋಬರ್ 03ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಬದ್ದ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ. ಇದೇ ಮೊದಲ ಬಾರಿಗೆ ಏಷ್ಯನ್ ಗೇಮ್ಸ್‌ ಫೈನಲ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ.

ಗೆಲ್ಲಲು ಬರೋಬ್ಬರಿ 170 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಶ್ರೀಲಂಕಾ ತಂಡವು ಖಾತೆ ತೆರೆಯುವ ಮುನ್ನವೇ ಮೊದಲ ಓವರ್‌ನಲ್ಲೇ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ಆರಂಭದಲ್ಲೇ ಲಂಕಾ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು. ಭಾರತದ ಸಂಘಟಿತ ಬೌಲಿಂಗ್ ದಾಳಿ ಹೇಗಿತ್ತು ಎಂದರೇ, ಐದು ಓವರ್ ಮುಗಿಯುವುದರೊಳಗಾಗಿ ಶ್ರೀಲಂಕಾ ತಂಡವು 31 ರನ್‌ ಗಳಿಸುವಷ್ಟರಲ್ಲಿ ಅಗ್ರಕ್ರಮಾಂಕದ ಆರು ಬ್ಯಾಟರ್‌ಗಳು ಪೆವಿಲಿಯನ್ ಸೇರಿದ್ದರು.

ಲಂಕಾದ ಐವರು ಬ್ಯಾಟರ್ಸ್ ಸ್ಕೋರ್ ಝೀರೋ:

ಏಷ್ಯನ್ ಗೇಮ್ಸ್‌ ಸೆಮಿಫೈನಲ್‌ನಲ್ಲಿ ಲಂಕಾದ ಯಾವೊಬ್ಬ ಬ್ಯಾಟರ್ ಕೂಡಾ ಜವಾಬ್ದಾರಿಯುತ ಇನ್ನಿಂಗ್ಸ್‌ ಆಡಲಿಲ್ಲ. ಅಗ್ರಕ್ರಮಾಂಕದ ಮೂವರು ಬ್ಯಾಟರ್‌ಗಳಾದ ಸಿನೆತ್ ಜಯವರ್ಧನ, ಲಸಿತ್ ಕ್ರೂಸ್‌ಪುಲ್ಲೆ ಹಾಗೂ ವಿಕೆಟ್ ಕೀಪರ್ ಬ್ಯಾಟರ್ ಸೋಹನ್ ಡಿ ಲಿವೆರಾ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಪೆರೆಡ್ ನಡೆಸಿದರು. ಇನ್ನು ಆಸೀನ್ ಭಂಡಾರ ಹಾಗೂ ಬಿನುರಾ ಫರ್ನಾಂಡೋ ಕೂಡಾ ಸೊನ್ನೆ ಸುತ್ತಿ ಬಂದಷ್ಟೇ ವೇಗದಲ್ಲಿ ಪೆವಿಲಿಯನ್ ಹಾದಿ ಹಿಡಿದರು. ಲಂಕಾ ಪರ ನುವಾನಿದು ಫೆರ್ನಾಂಡೊ(15) ಹೊರತುಪಡಿಸಿ ಯಾವೊಬ್ಬ ಬ್ಯಾಟರ್‌ ಕೂಡಾ ಎರಡಂಕಿ ಮೊತ್ತ ದಾಖಲಿಸಲು ಯಶಸ್ವಿಯಾಗಲಿಲ್ಲ.

ಭಾರತ ಪರ ಶಿಸ್ತು ಬದ್ದ ದಾಳಿ ನಡೆಸಿದ ಜಸ್ಪ್ರೀತ್ ಬುಮ್ರಾ 2 ಓವರ್‌ನಲ್ಲಿ 7 ರನ್ ನೀಡಿ ಎರಡು ವಿಕೆಟ್ ಪಡೆದರೆ, ಅಕ್ಷರ್ ಪಟೇಲ್ 8 ರನ್ ನೀಡಿ 2 ವಿಕೆಟ್ ತಮ್ಮ ಬುಟ್ಟಿಗೆ ಹಾಕಿಕೊಂಡರು. ಇನ್ನು ಅಭಿಷೇಕ್ ಶರ್ಮಾ ಕೇವಲ 5 ಎಸೆತಗಳನ್ನು ಹಾಕಿ ಎರಡು ರನ್ ನೀಡಿ ಎರಡು ವಿಕೆಟ್ ಪಡೆದರು. ವಾಷಿಂಗ್ಟನ್ ಸುಂದರ್ ಕೂಡಾ ಒಂದು ವಿಕೆಟ್ ತಮ್ಮ ಬುಟ್ಟಿಗೆ ಹಾಕಿಕೊಂಡರು.

ಇನ್ನು ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡದ ಆರಂಭ ಕೂಡಾ ಉತ್ತಮವಾಗಿರಲಿಲ್ಲ. ಅಭಿಷೇಕ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್ ತಲಾ 7 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ವೈಭವ್ ಸೂರ್ಯವಂಶಿ 21 ಎಸೆತಗಳಲ್ಲಿ ಚುರುಕಾಗಿ 38 ರನ್ ಸಿಡಿಸಿದರು. ನಾಯಕ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಕೇವಲ 13 ರನ್‌ಗಳಿಗೆ ಸೀಮಿತವಾಯಿತು.

ಇಶಾನ್ ಕಿಶನ್ ಸ್ಪೋಟಕ ಅರ್ಧಶತಕ:

ಒಂದು ಕಡೆ ನಿರಂತರವಾಗಿ ವಿಕೆಟ್ ಬೀಳುತ್ತಿದ್ದರೂ ಮತ್ತೊಂದು ತುದಿಯಲ್ಲಿ ಮೈಚಳಿ ಬಿಟ್ಟು ಬ್ಯಾಟ್ ಬೀಸಿದ ಇಶಾನ್ ಕಿಶನ್, ಸ್ಪೋಟಕ ಅರ್ಧಶತಕ ಸಿಡಿಸಿ ತಂಡ ಸವಾಲಿನ ಮೊತ್ತ ಕಲೆಹಾಕಲು ನೆರವಾದರು. ಒಂದು ಹಂತದಲ್ಲಿ 112 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡ ಭಾರತ ಅಲ್ಪ ಮೊತ್ತಕ್ಕೆ ಕುಸಿಯುವ ಭೀತಿಗೆ ಸಿಲುಕಿತ್ತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಇಶಾನ್ ಕಿಶನ್ ಕೇವಲ 46 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ ಅಜೇಯ 80 ರನ್ ಸಿಡಿಸಿ ಮಿಂಚಿದರು.

ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಮ್ಯಾಚ್‌ಗೆ ವೇದಿಕೆ ರೆಡಿ:

ಕ್ರಿಕೆಟ್ ಜಗತ್ತಿನ ಸಾಂಪ್ರದಾಯಿಕ ಎದುರಾಳಿಗಳೆಂದು ಗುರುತಿಸಿಕೊಂಡಿರುವ ಭಾರತ ಹಾಗೂ ಪಾಕಿಸ್ತಾನ ತಂಡಗಳು ಇದೀಗ ಏಷ್ಯನ್ ಗೇಮ್ಸ್‌ ಕ್ರಿಕೆಟ್‌ ಫೈನಲ್‌ನಲ್ಲಿ ಚಿನ್ನದ ಪದಕಕ್ಕಾಗಿ ಅಕ್ಟೋಬರ್ 03ರಂದು ಕಾದಾಟ ನಡೆಸಲಿವೆ. ಒಂದು ವೇಳೆ ಮಳೆಯಿಂದ ಫೈನಲ್ ಪಂದ್ಯ ರದ್ದಾದರೇ ಉಭಯ ತಂಡಗಳು ಚಿನ್ನದ ಪದಕ ಹಂಚಿಕೊಳ್ಳಲಿವೆ.