2028ರ ಒಲಿಂಪಿಕ್ಸ್‌ಗೆ ಭಾರತ ಕ್ರಿಕೆಟ್ ತಂಡ: ಬಿಸಿಸಿಐ ಗ್ರೀನ್ ಸಿಗ್ನಲ್
2028ರ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲು ಭಾರತ ತಂಡವನ್ನು ಕಳಿಸಿಕೊಡಲು ಬಿಸಿಸಿಐ ಹಸಿರು ನಿಶಾನೆ ತೋರಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ನವದೆಹಲಿ(ಏ.17): 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರ್ಪಡೆಗೊಳಿಸಲು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ(ಐಒಸಿ) ನಿರ್ಧರಿಸಿದರೆ, ಭಾರತ ಪುರುಷ ಹಾಗೂ ಮಹಿಳಾ ತಂಡಗಳನ್ನು ಕಳುಹಿಸಲು ಬಿಸಿಸಿಐ ತೀರ್ಮಾನಿಸಿದೆ.
ಶುಕ್ರವಾರ ನಡೆದ ಅಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಜೊತೆಗೆ 2022ರ ಬರ್ಮಿಂಗ್‌ಹ್ಯಾಮ್ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಭಾಗವಹಿಸಲಿದೆ ಎಂದು ಬಿಸಿಸಿಐ ಮತ್ತೊಮ್ಮೆ ಸ್ಪಷ್ಟಪಡಿಸಿದೆ.
ಟೋಕಿಯೋ ಒಲಿಂಪಿಕ್ಸ್‌ಗೆ 100 ದಿನ ಬಾಕಿ!
2020ರಲ್ಲಿ ನಡೆದ ಬಿಸಿಸಿಐ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಒಲಿಂಪಿಕ್ಸ್‌ಗೆ ಭಾರತ ತಂಡವನ್ನು ಕಳಿಸಿಕೊಡುವ ಕುರಿತಂತೆ ಎಲ್ಲಾ ಸಾಧ್ಯಾಸಾಧ್ಯತೆಗಳ ಕುರಿತಂತೆ ಚರ್ಚೆ ನಡೆಸಲಾಗಿತ್ತು. ಇದೀಗ 2028ರ ಒಲಿಂಪಿಕ್ಸ್‌ನಲ್ಲಿ ಭಾರತ ಕ್ರಿಕೆಟ್ ತಂಡವನ್ನು ಕಳಿಸಿಕೊಡುವ ಕುರಿತಂತೆ ಹಸಿರು ನಿಶಾನೆ ತೋರಿದೆ. 1900ರಲ್ಲಿ ಕೊನೆಯ ಬಾರಿಗೆ ಕ್ರಿಕೆಟ್ ಒಲಿಂಪಿಕ್ಸ್‌ನಲ್ಲಿ ಸೇರ್ಪಡೆಗೊಳಿಸಲಾಗಿತ್ತು.
ಇನ್ನು 2021ರ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟವು ಜುಲೈ 23ರಿಂದ ಆಗಸ್ಟ್ 08ರವರೆಗೆ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ಭಾರತವು 17 ಪದಕಗಳನ್ನು ಜಯಿಸಬಹುದು ಎಂದು ಗ್ರೇಸ್ ನೋಟ್ ತನ್ನ ಸಮೀಕ್ಷೆಯಲ್ಲಿ ಭವಿಷ್ಯ ನುಡಿದಿದೆ.