ಬೆಂಗಳೂರು ಟೆಸ್ಟ್ ಗೆಲ್ಲಲು ನ್ಯೂಜಿಲೆಂಡ್‌ಗೆ 107 ರನ್ ಗುರಿ ನೀಡಿದ ಟೀಂ ಇಂಡಿಯಾ!

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಬೆಂಗಳೂರು ಟೆಸ್ಟ್ ಪಂದ್ಯ ಗೆಲ್ಲಲು ಕಿವೀಸ್‌ಗೆ ಟೀಂ ಇಂಡಿಯಾ 107 ರನ್ ಗುರಿ ನೀಡಿದೆ

Bengaluru Test Team India Set 107 runs target to New Zealand kvn

ಬೆಂಗಳೂರು: ಸರ್ಫರಾಜ್ ಖಾನ್ ಆಕರ್ಷಕ ಶತಕ ಹಾಗೂ ರಿಷಭ್ ಪಂತ್ ಶತಕ ವಂಚಿತ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ ಎರಡನೇ ಇನ್ನಿಂಗ್ಸ್‌ನಲ್ಲಿ 462 ರನ್‌ಗಳಿಗೆ ಸರ್ವಪತನ ಕಂಡಿದೆ. ಈ ಮೂಲಕ ಬೆಂಗಳೂರು ಟೆಸ್ಟ್ ಪಂದ್ಯವನ್ನು ಗೆಲ್ಲಲು ನ್ಯೂಜಿಲೆಂಡ್‌ಗೆ ಟೀಂ ಇಂಡಿಯಾ 107 ರನ್‌ಗಳ ಸ್ಪರ್ಧಾತ್ಮಕ ಗುರಿ ನೀಡಿದೆ.

ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ 356 ರನ್‌ಗಳ ಬೃಹತ್ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ಟೀಂ ಇಂಡಿಯಾ, ಮೂರನೇ ದಿನದಾಟದಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 231 ರನ್ ಗಳಿಸಿತ್ತು. ಇನ್ನು ನಾಲ್ಕನೇ ದಿನದಾಟದಲ್ಲಿ ಸರ್ಫರಾಜ್ ಖಾನ್ ಹಾಗೂ ರಿಷಭ್ ಪಂತ್ ನಾಲ್ಕನೇ ವಿಕೆಟ್‌ಗೆ 177 ರನ್‌ಗಳ ಅಮೂಲ್ಯ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಸರ್ಫರಾಜ್ ಖಾನ್ 195 ಎಸೆತಗಳನ್ನು ಎದುರಿಸಿ 18 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 150 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸಿದ ರಿಷಭ್ ಪಂತ್ 105 ಎಸೆತಗಳನ್ನು ಎದುರಿಸಿ 9 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 99 ರನ್ ಸಿಡಿಸಿ ಕೇವಲ ಒಂದು ರನ್ ಅಂತರದಲ್ಲಿ ಶತಕ ವಂಚಿತರಾದರು.

ಐಸಿಸಿ ಚಾಂಪಿಯನ್ಸ್‌ ಟ್ರೋಫಿ: ಭಾರತಕ್ಕೆ ಪಾಕಿಸ್ತಾನ ಕ್ರಿಕೆಟ್‌ ಹೊಸ ಆಫರ್‌!

ಕೈಕೊಟ್ಟ ಮಧ್ಯಮ ಕ್ರಮಾಂಕ: ಒಂದು ಹಂತದಲ್ಲಿ 408ರ ವರೆಗೆ ಕೇವಲ ಮೂರು ವಿಕೆಟ್ ಕಳೆದುಕೊಂಡಿದ್ದ ಟೀಂ ಇಂಡಿಯಾ, ಸರ್ಫರಾಜ್ ಖಾನ್ ಹಾಗೂ ರಿಷಭ್ ಪಂತ್ ವಿಕೆಟ್ ಪತನದ ಬಳಿಕ ನಾಟಕೀಯ ಕುಸಿತ ಕಂಡಿತು. ಕನ್ನಡಿಗ ಕೆ ಎಲ್ ರಾಹುಲ್ ಮತ್ತೊಮ್ಮೆ ತವರಿನಲ್ಲಿ ಮಿಂಚಲು ವಿಫಲರಾದರು. ರಾಹುಲ್ 12 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, ಜಡೇಜಾ ಬ್ಯಾಟಿಂಗ್ ಕೇವಲ 5 ರನ್‌ಗಳಿಗೆ ಸೀಮಿತವಾಯಿತು. ಇನ್ನು ಅಶ್ವಿನ್ ಕೂಡಾ 15 ರನ್ ಗಳಿಸಿ ಮ್ಯಾಟ್ ಹೆನ್ರಿ ಬೌಲಿಂಗ್‌ನಲ್ಲಿ ಎಲ್‌ಬಿ ಬಲೆಗೆ ಬಿದ್ದರು. 

ಎರಡನೇ ಹೊಸ ಬಾಲ್‌ನಲ್ಲಿ ಟೀಂ ಇಂಡಿಯಾ ಬ್ಯಾಟರ್‌ಗಳು ರನ್ ಗಳಿಸಲು ಪರದಾಡಿದರು. ಕೇವಲ 63 ರನ್ ಗಳಿಸುವಷ್ಟರಲ್ಲಿ 7 ವಿಕೆಟ್ ಕಳೆದುಕೊಂಡರು. 

ನ್ಯೂಜಿಲೆಂಡ್ ಪರ ಮ್ಯಾಟ್ ಹೆನ್ರಿ ಹಾಗೂ ವಿಲಿಯಮ್ ಓ'ರೂರ್ಕಿ ತಲಾ ಮೂರು ವಿಕೆಟ್ ಪಡೆದರೆ, ಎಜಾಜ್ ಪಟೇಲ್ 2 ಹಾಗೂ ಟಿಮ್ ಸೌಥಿ ಹಾಗೂ ಗ್ಲೆನ್ ಫಿಲಿಫ್ಸ್ ತಲಾ ಒಂದೊಂದು ವಿಕೆಟ್ ಪಡೆದರು.

Latest Videos
Follow Us:
Download App:
  • android
  • ios