ಮೆಲ್ಬರ್ನ್‌(ಡಿ.26): ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಎರಡನೇ ಟೆಸ್ಟ್‌ ಪಂದ್ಯವಾದ ಬಾಕ್ಸಿಂಗ್‌ ಡೇ ಟೆಸ್ಟ್‌ ಪಂದ್ಯದ ಆರಂಭಿಕ ಅವಧಿಯಲ್ಲಿ ಅಜಿಂಕ್ಯ ರಹಾನೆ ನೇತೃತ್ವದ ಟೀಂ ಇಂಡಿಯಾ ಆರಂಭಿಕ ಮೇಲುಗೈ ಸಾಧಿಸಿದೆ. ಮೆಲ್ಬರ್ನ್‌ ಟೆಸ್ಟ್ ಪಂದ್ಯದ ಊಟದ ವಿರಾಮದ ವೇಳೆಗೆ ಆಸ್ಟ್ರೇಲಿಯಾ ಅಗ್ರ ಕ್ರಮಾಂಕದ ಮೂವರು ಬ್ಯಾಟ್ಸ್‌ಮನ್‌ಗಳನ್ನು ಕಳೆದುಕೊಂಡು ಕೇವಲ 65 ರನ್‌ ಬಾರಿಸಿದೆ.

ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಟಿಮ್ ಪೈನ್ ಮೊದಲು ಬ್ಯಾಟಿಂಗ್‌ ಮಾಡುವ ತೀರ್ಮಾನ ತೆಗೆದುಕೊಂಡರು. ಆದರೆ ಪಂದ್ಯದ 5ನೇ ಓವರ್‌ನಲ್ಲೇ ಜಸ್ಪ್ರೀತ್ ಬುಮ್ರಾ ಆಸ್ಟ್ರೇಲಿಯಾದ ಆರಂಭಿಕ ಬ್ಯಾಟ್ಸ್‌ಮನ್ ಜೋ ಬರ್ನ್ಸ್‌(0) ಅವರನ್ನು ಪೆವಿಲಿಯನ್ನಿಗಟ್ಟುವಲ್ಲಿ ಯಶಸ್ವಿಯಾದರು. ಬಳಿಕ ಎರಡನೇ ವಿಕೆಟ್‌ಗೆ ಮ್ಯಾಥ್ಯೂ ವೇಡ್‌ ಹಾಗೂ ಮಾರ್ನರ್ ಲಬುಶೇನ್‌ 25 ರನ್‌ಗಳ ಜತೆಯಾಟವಾಡಿದರು. ಮೊದಲ ಟೆಸ್ಟ್ ಪಂದ್ಯದಲ್ಲಿ ಉತ್ತಮವಾಗಿ ಬ್ಯಾಟ್ ಬೀಸಿದ್ದ ಮ್ಯಾಥ್ಯೂ ವೆಡ್‌ ಅವರನ್ನು ಬಲಿ ಪಡೆಯುವಲ್ಲಿ ಅನುಭವಿ ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಯಶಸ್ವಿಯಾದರು. 

ಬಾಕ್ಸಿಂಗ್ ಡೇ ಟೆಸ್ಟ್‌ಗೆ ಬಲಿಷ್ಠ ಟೀಂ ಇಂಡಿಯಾ ಪ್ರಕಟ; 4 ಬದಲಾವಣೆ..!

ಶೂನ್ಯ ಸುತ್ತಿದ ಸ್ಮಿತ್: ಸ್ಥಿರ ಪ್ರದರ್ಶನಕ್ಕೆ ಹೆಸರಾಗಿರುವ ಸ್ಟೀವ್ ಸ್ಮಿತ್ ಮತ್ತೊಮ್ಮೆ ಆಶ್ವಿನ್ ಎದುರು ತಡಬಡಾಯಿಸಿ ವಿಕೆಟ್‌ ಒಪ್ಪಿಸಿದ್ದಾರೆ. ಪಿಂಕ್ ಬಾಲ್ ಟೆಸ್ಟ್‌ ಪಂದ್ಯದಲ್ಲಿ ಕೇವಲ 1 ರನ್ ಗಳಿಸಿ ಅಶ್ವಿನ್‌ಗೆ ವಿಕೆಟ್‌ ಒಪ್ಪಿಸಿದ್ದ ಸ್ಮಿತ್, ಇದೀಗ ಎರಡನೇ ಟೆಸ್ಟ್‌ ಪಂದ್ಯದಲ್ಲೂ ಅಶ್ವಿನ್‌ಗೆ ವಿಕೆಟ್‌ ಒಪ್ಪಿಸಿ ಪೆವಿಲಿಯನ್ ಸೇರಿದ್ದಾರೆ.

ಊಟದ ವಿರಾಮದ ಮುನ್ನ ಆಸ್ಟ್ರೇಲಿಯಾ ಪರ ಮಾರ್ನಸ್ ಲಬುಶೇನ್ 26 ಹಾಗೂ ತ್ರಾವಿಸ್ ಹೆಡ್ 4 ರನ್ ಬಾರಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.