* 15ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ಭರ್ಜರಿ ಸಿದ್ದತೆ ಆರಂಭಿಸಿದ ಧೋನಿ* ನೆಟ್ಸ್‌ನಲ್ಲಿ ಭರ್ಜರಿಯಾಗಿ ಸಿಕ್ಸರ್ ಬಾರಿಸುವ ಅಭ್ಯಾಸ ಆರಂಭಿಸಿದ ಧೋನಿ* ಕಳೆದ ಆವೃತ್ತಿಯ ಐಪಿಎಲ್‌ನಲ್ಲಿ ಬ್ಯಾಟಿಂಗ್‌ನಲ್ಲಿ ವೈಫಲ್ಯ ಅನುಭವಿಸಿದ್ದ ಸಿಎಸ್‌ಕೆ ನಾಯಕ
ಬೆಂಗಳೂರು(ಮಾ.13): ಬಹುನಿರೀಕ್ಷಿತ 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಟೂರ್ನಿ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ತಂಡವು ಟೂರ್ನಿ ಆರಂಭಕ್ಕೂ ಭರದ ಸಿದ್ದತೆಗಳನ್ನು ಆರಂಭಿಸಿದೆ. ಕಳೆದ ಆವೃತ್ತಿಯ ಐಪಿಎಲ್ (IPL) ಟೂರ್ನಿಯ ಬಳಿಕ ಕ್ರಿಕೆಟ್‌ನಿಂದ ದೂರವೇ ಉಳಿದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಇದೀಗ ನೆಟ್ಸ್‌ನಲ್ಲಿ ಭರ್ಜರಿಯಾಗಿ ಸಿಕ್ಸರ್ ಬಾರಿಸುವ ಅಭ್ಯಾಸ ಆರಂಭಿಸಿದ್ದಾರೆ.
ಸೂರತ್‌ನ ಮೈದಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಅಭ್ಯಾಸ ಶಿಬಿರವನ್ನು ಹಮ್ಮಿಕೊಂಡಿದ್ದು, ಸಹ ಆಟಗಾರರ ಜತೆ ಮಹೇಂದ್ರ ಸಿಂಗ್ ಧೋನಿ ಕಠಿಣ ಅಭ್ಯಾಸವನ್ನು ಆರಂಭಿಸಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣವಾದ ಟ್ವಿಟರ್, ಇನ್‌ಸ್ಟಾಗ್ರಾಂ ಖಾತೆಯಲ್ಲಿ ಧೋನಿ ಪ್ರಾಕ್ಟೀಸ್ ವೇಳೆ ಭರ್ಜರಿ ಸಿಕ್ಸರ್ ಬಾರಿಸುವ ವಿಡಿಯೋ ತುಣುಕುಗಳನ್ನು ಹಂಚಿಕೊಂಡಿದೆ.
14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಬ್ಯಾಟಿಂಗ್‌ನಲ್ಲಿ ನಿರಾಸೆ ಮೂಡಿಸಿದ್ದರು. ಒಟ್ಟು 16 ಪಂದ್ಯಗಳಿಂದ ಮಹೇಂದ್ರ ಸಿಂಗ್ ಧೋನಿ 16.29ರ ಬ್ಯಾಟಿಂಗ್ ಸರಾಸರಿಯಲ್ಲಿ ಕೇವಲ 114 ರನ್‌ಗಳನ್ನಷ್ಟೇ ಬಾರಿಸಿದ್ದರು. ಕಳೆದ ಆವೃತ್ತಿಯ ಐಪಿಎಲ್‌ನಲ್ಲಿ ಧೋನಿ ಒಂದು ಪಂದ್ಯದಲ್ಲೂ ಕನಿಷ್ಠ 20 ಬಾರಿಸಲು ಯಶಸ್ವಿಯಾಗಿರಲಿಲ್ಲ. 2021ನೇ ಸಾಲಿನ ಐಪಿಎಲ್‌ನಲ್ಲಿ ಧೋನಿಯ ವೈಯುಕ್ತಿಕ ಗರಿಷ್ಠ ಸ್ಕೋರ್ 18* ರನ್ ಆಗಿತ್ತು. ಈ ವರ್ಷವಾದರೂ ಧೋನಿ ಅಬ್ಬರಿಬಹುದು ಎಂದು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳು ಕಾಯುತ್ತಿದ್ದಾರೆ.
ಸಿಎಸ್‌ಕೆ ಡೆತ್ ಓವರ್ ಸಮಸ್ಯೆ ಎದುರಿಸಬಹುದು ಎಂದ ಆಕಾಶ್ ಚೋಪ್ರಾ
2022ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಡೆತ್ ಓವರ್ ಸ್ಪೆಷಲಿಸ್ಟ್ ಬೌಲರ್‌ಗಳ ಸಮಸ್ಯೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಟೀಂ ಇಂಡಿಯಾ ಮಾಜಿ ಆರಂಭಿಕ ಬ್ಯಾಟರ್ ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ. ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಡೆತ್ ಓವರ್‌ನಲ್ಲಿ ಕ್ರಿಸ್ ಜೋರ್ಡನ್ ಇಲ್ಲವೇ ಆಡಂ ಮಿಲ್ನೆ ಅವರನ್ನು ಹೆಚ್ಚಾಗಿ ನೆಚ್ಚಿಕೊಳ್ಳಬೇಕು ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ. ಅವರ ಡೆತ್ ಓವರ್ ಬೌಲಿಂಗ್‌ನಿಂದಾಗಿಯೇ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಒಂದು ಅಥವಾ ಎರಡು ಪಂದ್ಯಗಳಲ್ಲಿ ಸೋಲು ಕಾಣಬಹುದು. ನಮಗೆ ನಿಮಗೆ ಮಾತ್ರವಲ್ಲ, ಅವರಿಗೂ ಈ ವಿಚಾರ ಗೊತ್ತು. ಆದರೆ ಇದಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಆದಷ್ಟು ಬೇಗ ಪರಿಹಾರ ಕಂಡುಕೊಳ್ಳುವ ಸಾಧ್ಯತೆಯಿದೆ ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.
IPL 2022: ಐಪಿಎಲ್‌ನಲ್ಲಿ ಅತಿಹೆಚ್ಚು ಬಾರಿ ಪ್ಲೇ ಆಫ್ ಪ್ರವೇಶಿಸಿದ ಟಾಪ್ 3 ತಂಡಗಳಿವು..!
ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಸ್ಥಿರ ಪ್ರದರ್ಶನ ತೋರಿದ ತಂಡವೆಂದರೆ ಅದು ಚೆನ್ನೈ ಸೂಪರ್ ಕಿಂಗ್ಸ್. ಇದುವರೆಗೂ ಆಡಿದ 12 ಐಪಿಎಲ್ ಆವೃತ್ತಿಗಳ ಪೈಕಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 11 ಬಾರಿ ಪ್ಲೇ ಆಫ್ ಪ್ರವೇಶಿಸಿದೆ. ಇದಷ್ಟೇ ಅಲ್ಲದೇ ನಾಲ್ಕು ಬಾರಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಪ್ರಶಸ್ತಿಗೆ ಮುತ್ತಿಕ್ಕಿದೆ. ಇದೀಗ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು 15ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಮಾರ್ಚ್ 26ರಂದು ಆರಂಭವಾಗಲಿರುವ ಐಪಿಎಲ್ ಉದ್ಘಾಟನಾ ಪಂದ್ಯಕ್ಕೆ ಮುಂಬೈನ ವಾಂಖೆಡೆ ಮೈದಾನ ಆತಿಥ್ಯವನ್ನು ವಹಿಸಲಿದೆ.
