ಬಾಂಗ್ಲಾದೇಶ ಎದುರಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ ಬೃಹತ್ ಮೊತ್ತದತ್ತ ಭಾರತಮೊದಲ ದಿನದಾಟದಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 278 ರನ್ ಬಾರಿಸಿದ ಟೀಂ ಇಂಡಿಯಾಕೇವಲ 10 ರನ್‌ ಅಂತರದಲ್ಲಿ ಶತಕ ವಂಚಿತರಾದ ಚೇತೇಶ್ವರ್ ಪೂಜಾರ

ಚಟ್ಟೋಗ್ರಾಮ್‌(ಡಿ.14): ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಶತಕ ವಂಚಿತ(90) ಬ್ಯಾಟಿಂಗ್ ಹಾಗೂ ಶ್ರೇಯಸ್ ಅಯ್ಯರ್ ಸಮಯೋಚಿತ ಅರ್ಧಶತಕ(82*)ದ ನೆರವಿನಿಂದ ಟೀಂ ಇಂಡಿಯಾ, ಬಾಂಗ್ಲಾದೇಶ ಎದುರಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ 6 ವಿಕೆಟ್ ಕಳೆದುಕೊಂಡು 278 ರನ್ ಬಾರಿಸಿದ್ದು, ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಿದೆ. 

ಇಲ್ಲಿನ ಝಹೂರ್ ಅಹಮದ್ ಚೌಧರಿ ಸ್ಟೇಡಿಯಂನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಮಾಡಲಿಳಿದ ಟೀಂ ಇಂಡಿಯಾ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಆರಂಭಿಕ ಬ್ಯಾಟರ್‌ ಶುಭ್‌ಮನ್‌ ಗಿಲ್‌ 20 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ನಾಯಕ ಕೆ ಎಲ್ ರಾಹುಲ್ ಬ್ಯಾಟಿಂಗ್ 20 ರನ್‌ ಬಾರಿಸಿ ವಿಕೆಟ್‌ ಒಪ್ಪಿಸಿದರು. ಇನ್ನು ಮಾಜಿ ನಾಯಕ ವಿರಾಟ್ ಕೊಹ್ಲಿ ಕೇವಲ ಒಂದು ರನ್‌ ಬಾರಿಸಿ ತೈಜುಲ್ ಇಸ್ಲಾಂ ಬೌಲಿಂಗ್‌ನಲ್ಲಿ ಎಲ್‌ಬಿ ಬಲಗೆ ಬಿದ್ದರು. ಟೀಂ ಇಂಡಿಯಾ 48 ರನ್‌ ಗಳಿಸುವಷ್ಟರಲ್ಲಿ ಪ್ರಮುಖ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

Scroll to load tweet…

ರನ್‌ ವೇಗಕ್ಕೆ ಚುರುಕು ಮುಟ್ಟಿಸಿದ ಪಂತ್: ಕೇವಲ 7 ರನ್‌ ಅಂತರದಲ್ಲಿ ಪ್ರಮಖ ಮೂರು ವಿಕೆಟ್ ಕಳೆದುಕೊಂಡು ಆಘಾತಕ್ಕೊಳಗಾಗಿದ್ದ ಟೀಂ ಇಂಡಿಯಾ, ರಕ್ಷಣಾತ್ಮಕ ಆಟಕ್ಕೆ ಮೊರೆ ಹೋಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ನಾಲ್ಕನೇ ವಿಕೆಟ್‌ಗೆ ಪೂಜಾರ ಜತೆಗೂಡಿ ರಿಷಭ್ ಪಂತ್ ಚುರುಕಿನ 64 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ರಿಷಭ್‌ ಪಂತ್ ಕೇವಲ 45 ಎಸೆತಗಳಲ್ಲಿ 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 46 ರನ್‌ ಬಾರಿಸಿ ವಿಕೆಟ್ ಒಪ್ಪಿಸಿದರು.

Ind vs Ban ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 4 ಸಾವಿರ ರನ್ ಪೂರೈಸಿದ ಪಂತ್..! ಸಿಕ್ಸರ್‌ನಲ್ಲೂ ಹೊಸ ದಾಖಲೆ

ಪೂಜಾರ-ಅಯ್ಯರ್ ಜುಗಲ್ಬಂದಿ: ರಿಷಭ್ ಪಂತ್ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ಶ್ರೇಯಸ್ ಅಯ್ಯರ್, ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಜತೆಗೂಡಿ ಸಮಯೋಚಿತ ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಐದನೇ ವಿಕೆಟ್‌ಗೆ ಈ ಜೋಡಿ 317 ಎಸೆತಗಳನ್ನು ಎದುರಿಸಿ 149 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾಯಿತು. ಸಮಯೋಚಿತ ಬ್ಯಾಟಿಂಗ್ ನಡೆಸಿದ ಚೇತೇಶ್ವರ್ ಪೂಜಾರ ಕೇವಲ 10 ರನ್‌ ಅಂತರದಲ್ಲಿ ಶತಕ ವಂಚಿತರಾದರು. ಪೂಜಾರ 203 ಎಸೆತಗಳನ್ನು ಎದುರಿಸಿ 11 ಬೌಂಡರಿ ಸಹಿತ 90 ರನ್ ಬಾರಿಸಿ ತೈಜುಲ್ ಇಸ್ಲಾಂ ಬೌಲಿಂಗ್‌ನಲ್ಲಿ ಕ್ಲೀನ್‌ ಬೌಲ್ಡ್‌ ಆಗಿ ಪೆವಿಲಿಯನ್ ಸೇರಿದರು. ಇನ್ನು ಮತ್ತೊಂದು ತುದಿಯಲ್ಲಿ ಆಕರ್ಷಕ ಬ್ಯಾಟಿಂಗ್ ನಡೆಸುತ್ತಿರುವ ಶ್ರೇಯಸ್ ಅಯ್ಯರ್ 169 ಎಸೆತಗಳನ್ನು ಎದುರಿಸಿ 82 ರನ್ ಬಾರಿಸಿ ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಇನ್ನು ಅಕ್ಷರ್ ಪಟೇಲ್ 14 ರನ್‌ ಗಳಿಸಿ ದಿನದಾಟದ ಕೊನೆಯ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು.