ಮೆಲ್ಬರ್ನ್‌(ಡಿ.29): ಬಹುನಿರೀಕ್ಷಿತ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ಎದುರು ಅಜಿಂಕ್ಯ ರಹಾನೆ ನೇತೇತ್ವದ ಟೀಂ ಇಂಡಿಯಾ 8 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸುವ ಮೂಲಕ ಮೊದಲ ಪಂದ್ಯದ ಸೋಲಿಗೆ ತಿರುಗೇಟು ನೀಡಿದೆ.

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಪಿಂಕ್ ಬಾಲ್ ಟೆಸ್ಟ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ಭಾರತ 8 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿತ್ತು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ ತವರಿಗೆ ಮರಳಿದ್ದು, ಮೊಹಮ್ಮದ್ ಶಮಿ ಗಾಯಗೊಂಡು ಸರಣಿಯಿಂದ ಹೊರಬಿದ್ದಿದ್ದರು. ಇದರಿಂದ ಭಾರತಕ್ಕೆ ಮತ್ತಷ್ಟು ಹಿನ್ನಡೆಯಾಗಬಹುದು ಎಂದು ಕ್ರಿಕೆಟ್‌ ಪಂಡಿತರು ಲೆಕ್ಕಾಚಾರ ಹಾಕಿದ್ದರು. ಆದರೆ ಅಜಿಂಕ್ಯ ರಹಾನೆ ನೇತೃತ್ವದ ಟೀಂ ಇಂಡಿಯಾ ಸಂಘಟಿತ ಪ್ರದರ್ಶನ ತೋರುವ ಮೂಲಕ ಮೆಲ್ಬರ್ನ್ ಟೆಸ್ಟ್‌ ಪಂದ್ಯದಲ್ಲಿ 8 ವಿಕೆಟ್‌ಗಳ ಸ್ಮರಣೀಯ ಗೆಲುವು ದಾಖಲಿಸಿದೆ. 

ವಿರಾಟ್ ಕೊಹ್ಲಿ, ಶಮಿ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಕಮ್‌ಬ್ಯಾಕ್ ಮಾಡುವ ಪ್ರಶ್ನೆಯೇ ಇಲ್ಲ. ಕೊಹ್ಲಿ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ 4-0 ಅಂತರದ ಹೀನಾಯ ಸೋಲು ಕಾಣಲಿದೆ ಎಂದೆಲ್ಲ ವಿಶ್ಲೇಷಿಸಲಾಗಿತ್ತು. ಆದರೆ ಟೀಂ ಇಂಡಿಯಾ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಅಮೋಘ ಪ್ರದರ್ಶನ ತೋರುವ ಕಾಂಗರೂ ಪಡೆಗೆ ತಿರುಗೇಟು ನೀಡಿದೆ.

ಬಾಕ್ಸಿಂಗ್ ಡೇ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾ ದಿಗ್ವಿಜಯ

ಟೀಂ ಇಂಡಿಯಾ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಭಾರತ ತಂಡದ ಪ್ರದರ್ಶನವನ್ನು ಕೊಂಡಾಡಿದ್ದು, ಗಾಯಗೊಂಡ ಹುಲಿಯನ್ನು ಸುಲಭವಾಗಿ ಪರಿಗಣಿಸಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ. ಇನ್ನು ವಿರೇಂದ್ರ ಸೆಹ್ವಾಗ್, ವಾಸೀಂ ಜಾಫರ್‌, ಟಾಮ್‌ ಮೂಡಿ ಸೇರಿದಂತೆ ಹಲವು ಮಂದಿ ಟೀಂ ಇಂಡಿಯಾಗೆ ಅಭಿನಂದನೆಗಳ ಸುರಿಮಳೆ ಸುರಿಸಿದ್ದಾರೆ.