ಅನುಭವಿ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್, ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ತಂಡದ ಮೆಂಟರ್ ಹಾಗೂ ಬ್ಯಾಟಿಂಗ್ ಕೋಚ್ ಆಗಿ ನೇಮಕವಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ
ಬೆಂಗಳೂರು: ಟೀಂ ಇಂಡಿಯಾ ಅನುಭವಿ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್, 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಗಿಯುತ್ತಿದ್ದಂತೆಯೇ ಎಲ್ಲಾ ಮಾದರಿಯ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು. ಇದೀಗ ದಿನೇಶ್ ಕಾರ್ತಿಕ್, ಮತ್ತೊಮ್ಮೆ ಆರ್‌ಸಿಬಿ ತೆಕ್ಕೆಗೆ ಸೇರಿಕೊಂಡಿದ್ದು, ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಡಿಕೆ, ಆರ್‌ಸಿಬಿ ತಂಡದ ಮೆಂಟರ್ ಹಾಗೂ ಬ್ಯಾಟಿಂಗ್ ಕೋಚ್ ಆಗಿ ಕಾಣಿಸಿಕೊಳ್ಳಲಿದ್ದಾರೆ.
ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ತಂಡದ ಪರ ದಿನೇಶ್ ಕಾರ್ತಿಕ್, ಅದ್ಭುತ ಬ್ಯಾಟಿಂಗ್ ಮೂಲಕ ಮಿಂಚಿದ್ದರು. 2024ರ ಐಪಿಎಲ್ ಟೂರ್ನಿಯಲ್ಲಿ ದಿನೇಶ್ ಕಾರ್ತಿಕ್, ಆರ್‌ಸಿಬಿ ಪರ 15 ಪಂದ್ಯಗಳನ್ನಾಡಿ 36.22ರ ಬ್ಯಾಟಿಂಗ್ ಸರಾಸರಿಯಲ್ಲಿ 187.35ರ ಸ್ಟ್ರೈಕ್‌ರೇಟ್‌ನಲ್ಲಿ 2 ಅರ್ಧಶತಕ ಸಹಿತ 326 ರನ್ ಚಚ್ಚಿದ್ದರು.
ದಿನೇಶ್ ಕಾರ್ತಿಕ್ ಇದೀಗ ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದನ್ನು ಆರ್‌ಸಿಬಿ ಫ್ರಾಂಚೈಸಿ ತನ್ನ ಅಧಿಕೃತ 'ಎಕ್ಸ್' ಖಾತೆಯಲ್ಲಿ ಖಚಿತಪಡಿಸಿದೆ.
ದಿನೇಶ್ ಕಾರ್ತಿಕ್ ಕೇವಲ ವಿಕೆಟ್ ಕೀಪರ್ ಮಾತ್ರವಲ್ಲದೇ ಬ್ಯಾಟಿಂಗ್ ಕೆಳಕ್ರಮಾಂಕದಲ್ಲಿ ಮ್ಯಾಚ್ ಫಿನಿಶರ್ ಆಗಿಯೂ ಕಾಣಿಸಿಕೊಂಡು ಸೈ ಎನಿಸಿಕೊಂಡಿದ್ದರು. 2008ರಿಂದಲೂ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಾ ಬಂದಿದ್ದ ದಿನೇಶ್ ಕಾರ್ತಿಕ್ ಒಟ್ಟು 257 ಐಪಿಎಲ್ ಪಂದ್ಯಗಳನ್ನಾಡಿ 26.31ರ ಬ್ಯಾಟಿಂಗ್ ಸರಾಸರಿಯಲ್ಲಿ 22 ಅರ್ಧಶತಕ ಸಹಿತ 4842 ರನ್ ಬಾರಿಸಿದ್ದಾರೆ. ದಿನೇಶ್ ಕಾರ್ತಿಕ್ ಟೀಂ ಇಂಡಿಯಾ, ಕೋಲ್ಕತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಪರ ಹಲವಾರು ಬಾರಿ ಏಕಾಂಗಿಯಾಗಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ.
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಕ್ರಿಕೆಟ್ ಜಗತ್ತಿನ ಶ್ಲಾಘನೆ..!
ಡಿಕೆ ಹೊಸ ಅವತಾರ ಆರ್‌ಸಿಬಿ ಟ್ರೋಫಿ ಬರ ನೀಗಿಸುತ್ತಾ?
ಚೊಚ್ಚಲ ಆವೃತ್ತಿಯ ಐಪಿಎಲ್ ಟೂರ್ನಿಯಿಂದಲೂ ಟ್ರೋಫಿ ಕನವರಿಕೆಯಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 17 ಐಪಿಎಲ್ ಆವೃತ್ತಿ ಕಳೆದರೂ ಟ್ರೋಫಿ ಗೆಲ್ಲಲು ಸಾಧ್ಯವಾಗಿಲ್ಲ. ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ತಂಡವು ಪ್ಲೇ ಆಫ್ ಹಂತಕ್ಕೆ ಪ್ರವೇಶಿಸಿತ್ತಾದರೂ, ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಎದುರು ಮುಗ್ಗರಿಸುವ ಮೂಲಕ ಟೂರ್ನಿಯಿಂದ ಹೊರಬಿದ್ದಿತ್ತು. ಆರ್‌ಸಿಬಿ ತಂಡವು ಮೂರು ಬಾರಿ ಫೈನಲ್ ಪ್ರವೇಶಿಸಿದ್ದೇ ಇಲ್ಲಿಯವರೆಗಿನ ಶ್ರೇಷ್ಠ ಪ್ರದರ್ಶನ ಎನಿಸಿಕೊಂಡಿದೆ. ಇನ್ನು ದಿನೇಶ್ ಕಾರ್ತಿಕ್, ಆರ್‌ಸಿಬಿ ತಂಡದ ಮೆಂಟರ್ ಹಾಗೂ ಬ್ಯಾಟಿಂಗ್ ಕೋಚ್ ಆದ ಬಳಿಕವಾದರೂ ಆರ್‌ಸಿಬಿ ಟ್ರೋಫಿ ಬರ ನೀಗಿಸಿಕೊಳ್ಳುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.
