ಜೂನ್ 20ರಿಂದ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದ್ದು, ಮೊದಲ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. ಆದರೆ ಸ್ಟಾರ್ ಆಟಗಾರ ಜೇಮಿ ಓವರ್‌ಟನ್‌ಗೆ ಇಂಗ್ಲೆಂಡ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಕ್ಕಿಲ್ಲ.
ಲಂಡನ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯು ಜೂನ್ 20ರಿಂದ ಆರಂಭವಾಗಲಿದೆ. 2025-27ರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಟ್ರೋಫಿ ಗೆಲ್ಲುವ ಗುರಿ ಇಟ್ಟುಕೊಂಡಿರುವ ಶುಭ್‌ಮನ್ ಗಿಲ್ ನೇತೃತ್ವದ ಟೀಂ ಇಂಡಿಯಾ, ಇಂಗ್ಲೆಂಡ್ ಸವಾಲಿಗೆ ಸಜ್ಜಾಗಿದೆ. ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಶುಭಾರಂಭ ಮಾಡಲು ಉಭಯ ತಂಡಗಳು ತುದಿಗಾಲಿನಲ್ಲಿ ನಿಂತಿವೆ. ಹೀಗಾಗಿ ಎರಡೂ ತಂಡದ ಆಟಗಾರರು ಮೊದಲ ಟೆಸ್ಟ್‌ಗಾಗಿ ಮೈದಾನದಲ್ಲಿ ಬೆವರು ಹರಿಸುತ್ತಿವೆ. ಹೀಗಿರುವಾಗಲೇ ಮೊದಲ ಟೆಸ್ಟ್ ಪಂದ್ಯಕ್ಕೆ 11 ಆಟಗಾರರನ್ನೊಳಗೊಂಡ ಬಲಿಷ್ಠ ಇಂಗ್ಲೆಂಡ್ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದೆ
ಸ್ಟಾರ್ ಆಟಗಾರನಿಗಿಲ್ಲ ಸ್ಥಾನ: ಲೀಡ್ಸ್‌ನ ಹೆಡ್ಡಿಂಗ್ಲೆಯಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡವನ್ನು ಆಲ್ರೌಂಡರ್ ಬೆನ್ ಸ್ಟೋಕ್ಸ್ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಆದರೆ ಪ್ರತಿಭಾನ್ವಿತ ಸ್ಟಾರ್ ಆಟಗಾರನಾಗಿ ಗುರುತಿಸಿಕೊಂಡಿರುವ ಜೇಮಿ ಓವರ್‌ಟನ್‌ಗೆ ಇಂಗ್ಲೆಂಡ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಗದಿರುವುದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಇನ್ನು 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಿದ್ದ ಜೆಕೋಬ್ ಬೆಥೆಲ್‌ಗೂ ಕೂಡಾ ಇಂಗ್ಲೆಂಡ್ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಕ್ಕಿಲ್ಲ. ಬೆಥೆಲ್, ಭಾರತ 'ಎ' ಎದುರಿನ ಅಭ್ಯಾಸ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿದ್ದರು.
ಇನ್ನುಳಿದಂತೆ ಬೌಲಿಂಗ್ ಆಲ್ರೌಂಡರ್ ಕ್ರಿಸ್ ವೋಕ್ಸ್, ಇಂಗ್ಲೆಂಡ್ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ. ಸ್ಪಿನ್ ಬೌಲಿಂಗ್ ಜವಾಬ್ದಾರಿ ಶೋಯೆಬ್ ಬಷೀರ್ ಹೆಗಲೇರಿದೆ. ವಿಕೆಟ್ ಕೀಪರ್ ಬ್ಯಾಟರ್ ರೂಪದಲ್ಲಿ ಜೇಮಿ ಸ್ಮಿತ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆರಂಭಿಕ ಬ್ಯಾಟರ್‌ಗಳಾಗಿ ಜಾಕ್ ಕ್ರಾಲಿ ಹಾಗೂ ಬೆನ್ ಡಕೆಟ್ ಇಂಗ್ಲೆಂಡ್ ಪರ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಅನುಭವಿ ಆಟಗಾರ ಓಲಿ ಪೋಪ್ ಕಣಕ್ಕಿಳಿಯಲಿದ್ದಾರೆ. ಇನ್ನು ದಿಗ್ಗಜ ಕ್ರಿಕೆಟಿಗ ಹಾಗೂ ಮಾಜಿ ನಾಯಕ ಜೋ ರೂಟ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿಳಿಯಲಿದ್ದಾರೆ. ಇನ್ನು ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಜವಾಬ್ದಾರಿಯನ್ನು ಪ್ರತಿಭಾನ್ವಿತ ಆಟಗಾರರಾದ ಹ್ಯಾರಿ ಬ್ರೂಕ್ ಹಾಗೂ ಬೆನ್ ಸ್ಟೋಕ್ಸ್ ನಿಭಾಯಿಸಲಿದ್ದಾರೆ. ಇನ್ನು ಭಾರತದಂತಹ ಬಲಿಷ್ಠ ತಂಡದೆದುರು ತಮ್ಮ ಸಾಮರ್ಥ್ಯ ಅನಾವರಣ ಮಾಡಲು ಬೌಲರ್‌ಗಳಾದ ಜೋಶ್ ಟಂಗ್ ಹಾಗೂ ಬ್ರೆಂಡನ್ ಕೇರ್ಸ್ ರೆಡಿಯಾಗಿದ್ದಾರೆ.
ಭಾರತ ಎದುರಿನ ಮೊದಲ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಹೀಗಿದೆ ನೋಡಿ:
ಜಾಕ್ ಕ್ರಾಲಿ, ಬೆನ್ ಡಕೆಟ್, ಓಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್(ಕ್ಯಾಪ್ಟನ್), ಜೇಮಿ ಸ್ಮಿತ್(ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಬ್ರೈಡನ್ ಕೇರ್ಸ್, ಜೋಶ್ ಟಂಗ್, ಶೋಯೆಬ್ ಬಷೀರ್.
ಇನ್ನೊಂದೆಡೆ ಮೊದಲ ಟೆಸ್ಟ್‌ಗೆ ಭಾರತ ತಂಡದ ಆಡುವ ಹನ್ನೊಂದರ ಬಳಗ ಇನ್ನೂ ಅಧಿಕೃತವಾಗಿ ಘೋಷಿಸಿಲ್ಲ. ಇಂದು ಸಂಜೆ ಇಲ್ಲವೆ ನಾಳೆ ಟಾಸ್ ವೇಳೆಯಲ್ಲಿ ಭಾರತ ತಂಡದ ಘೋಷಣೆಯಾಗುವ ಸಾಧ್ಯತೆಯಿದೆ.
ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಗೆ ಭಾರತ ತಂಡ ಹೀಗಿದೆ:
ಶುಭ್‌ಮನ್ ಗಿಲ್(ನಾಯಕ), ರಿಷಭ್ ಪಂತ್(ಉಪನಾಯಕ& ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ಕೆ ಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೇಲ್(ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್‌ದೀಪ್ ಸಿಂಗ್, ಅರ್ಶದೀಪ್ ಸಿಂಗ್, ಕುಲ್ದೀಪ್ ಯಾದವ್.
