ಸಿಡ್ನಿ(ಡಿ.08): ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್ ಮ್ಯಾಥ್ಯೂ ವೇಡ್(80) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್(54) ಆಕರ್ಷಕ ಅರ್ಧಶತಕಗಳ ನೆರವಿನಿಂದ 5 ವಿಕೆಟ್ ಕಳೆದುಕೊಂಡು 186 ರನ್ ಬಾರಿಸಿದ್ದು, ಭಾರತಕ್ಕೆ ಸವಾಲಿನ ಗುರಿ ನೀಡಿದೆ.

ಕೊನೆಯ ಟಿ20 ಪಂದ್ಯದಲ್ಲಿ ಟಾಸ್ ಸೋತರೂ ಮೊದಲ ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಆತಿಥೇಯ ಆಸ್ಟ್ರೇಲಿಯಾ ಆರಂಭದಲ್ಲೇ ನಾಯಕ ಆ್ಯರೋನ್ ಫಿಂಚ್(0) ವಿಕೆಟ್ ಕಳೆದುಕೊಂಡಿತು. ಆ ಬಳಿಕ ಎರಡನೇ ವಿಕೆಟ್‌ಗೆ ಜತೆಯಾದ ಮ್ಯಾಥ್ಯೂ ವೇಡ್ ಹಾಗೂ ಸ್ಟೀವ್ ಸ್ಮಿತ್ ಜೋಡಿ ಎರಡನೇ ವಿಕೆಟ್‌ಗೆ 65 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಉತ್ತಮವಾಗಿ ಆಡುತ್ತಿದ್ದ ಈ ಜೋಡಿಯನ್ನು ಬೇರ್ಪಡಿಸುವಲ್ಲಿ ವಾಷಿಂಗ್ಟನ್ ಸುಂದರ್ ಬೇರ್ಪಡಿಸುವಲ್ಲಿ ಯಶಸ್ವಿಯಾದರು. ಸ್ಟೀವ್ ಸ್ಮಿತ್ 24 ರನ್ ಬಾರಿಸಿ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು. 

ರನ್‌ ವೇಗಕ್ಕೆ ಚುರುಕು ಮುಟ್ಟಿಸಿದ ವೇಡ್‌-ಮ್ಯಾಕ್ಸಿ: 2ನೇ ಟಿ20 ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿದ್ದ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಮ್ಯಾಥ್ಯೂ ವೇಡ್‌ ಮೂರನೇ ಟಿ20 ಪಂದ್ಯದಲ್ಲೂ ಟೀಂ ಇಂಡಿಯಾ ಬೌಲರ್‌ಗಳನ್ನು ಕಾಡಿದರು. ಮ್ಯಾಕ್ಸ್‌ವೆಲ್‌ ಜತೆ ಮೂರನೇ ವಿಕೆಟ್‌ಗೆ ವೇಡ್ 90 ರನ್‌ಗಳ ಜತೆಯಾಟ ನಿಭಾಯಿಸಿದರು. ವೇಡ್ ಕೇವಲ 53 ಎಸೆತಗಳಲ್ಲಿ 7 ಬೌಂಡರಿ ಹಾಗೂ 2  ಸಿಕ್ಸರ್‌ಗಳ ನೆರವಿನಿಂದ 80 ರನ್ ಬಾರಿಸಿ ಶಾದೂಲ್‌ ಠಾಕೂರ್‌ಗೆ ವಿಕೆಟ್‌ ಒಪ್ಪಿಸಿದರು. 

ಕೊನೆಯ ಓವರ್‌ನಲ್ಲಿ ಟಿ. ನಟರಾಜನ್ ಎಸೆತದಲ್ಲಿ ಕ್ಲೀನ್‌ ಆಗಿ ಪೆವಿಲಿಯನ್ ಸೇರಿದರು. ಮ್ಯಾಕ್ಸ್‌ವೆಲ್ ವಿಕೆಟ್‌ ಒಪ್ಪಿಸುವ ಮುನ್ನ 36 ಎಸೆತಗಳಲ್ಲಿ 3 ಬೌಂಡರಿ ಹಾಗೂ 3 ಸಿಕ್ಸರ್‌ಗಳ ನೆರವಿನಿಂದ 54 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 170ರ ಗಡಿ ದಾಟಿಸಿದರು.

ಭಾರತ ಪರ ವಾಷಿಂಗ್ಟನ್ ಸುಂದರ್ 2 ವಿಕೆಟ್ ಪಡೆದರೆ, ಶಾರ್ದೂಲ್ ಠಾಕೂರ್ ಹಾಗೂ ಟಿ ನಟರಾಜನ್ ತಲಾ ಒಂದೊಂದು ವಿಕೆಟ್ ಪಡೆದರು. 

ಆಸ್ಟ್ರೇಲಿಯಾ: 186/5

ಮ್ಯಾಥ್ಯೂ ವೇಡ್: 80

ವಾಷಿಂಗ್ಟನ್ ಸುಂದರ್: 34/2