ಕ್ಯಾನ್‌ಬೆರ್ರಾ(ಡಿ.02): ಆಲ್ರೌಂಡರ್‌ಗಳಾದ ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಕೆಚ್ಚೆದೆಯ ಶತಕದ ಜತೆಯಾಟದ ನೆರವಿನಿಂದ ಮೂರನೇ ಏಕದಿನ ಪಂದ್ಯದಲ್ಲಿ 5 ವಿಕೆಟ್ ಕಳೆದುಕೊಂಡು 302 ರನ್ ಬಾರಿಸಿದ್ದು, ಆತಿಥೇಯ ಆಸ್ಟ್ರೇಲಿಯಾ ತಂಡಕ್ಕೆ ಸವಾಲಿನ ಗುರಿ ನೀಡಿದೆ.

ಸರಣಿಯಲ್ಲಿ ಇದೇ ಮೊದಲ ಬಾರಿಗೆ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಆದರೆ ತಂಡ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಭಾರತ 26 ರನ್‌ ಗಳಿಸಿದ್ದಾಗ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ 16 ರನ್‌ ಬಾರಿಸಿ ಸೀನ್ ಅಬ್ಬೋಟ್‌ಗೆ ವಿಕೆಟ್ ಒಪ್ಪಿಸಿದರು. ಎರಡನೇ ವಿಕೆಟ್‌ಗೆ ನಾಯಕ ವಿರಾಟ್ ಕೊಹ್ಲಿ ಹಾಗೂ ಶುಭ್‌ಮನ್‌ ಗಿಲ್ ಜೋಡಿ 56 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾಯಿತು. ಉತ್ತಮವಾಗಿ ಆಡುತ್ತಿದ್ದ ಗಿಲ್ ಸ್ವೀಪ್ ಮಾಡುವ ಯತ್ನದಲ್ಲಿ ಆಸ್ಟನ್ ಅಗರ್‌ಗೆ ವಿಕೆಟ್ ಒಪ್ಪಿಸಿದರು. 

ಮತ್ತೆ ಆಸರೆಯಾದ ಕೊಹ್ಲಿ-ಪಾಂಡ್ಯ-ಜಡೇಜಾ; ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್(19) ಹಾಗೂ ಕೆ.ಎಲ್. ರಾಹುಲ್(5) ಬೇಗನೇ ವಿಕೆಟ್ ಒಪ್ಪಿಸಿದ್ದರಿಂದ ಒಂದು ಹಂತದಲ್ಲಿ 123 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಟೀಂ ಇಂಡಿಯಾಗೆ ನಾಯಕ ವಿರಾಟ್ ಕೊಹ್ಲಿ ಆಸರೆಯಾದರು. ಸಾಕಷ್ಟು ಎಚ್ಚರಿಕೆಯಿಂದ ಬ್ಯಾಟಿಂಗ್ ನಡೆಸಿದ ಕೊಹ್ಲಿ 78 ಎಸೆತಗಳನ್ನು ಎದುರಿಸಿ 5 ಬೌಂಡರಿ ಸಹಿತ 63 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಕೊಹ್ಲಿ ವಿಕೆಟ್‌ ಒಪ್ಪಿಸುವಾಗ 32 ಓವರ್‌ ಅಂತ್ಯಕ್ಕೆ ಟೀಂ ಇಂಡಿಯಾ ಸ್ಕೋರ್ 5 ವಿಕೆಟ್‌ ನಷ್ಟಕ್ಕೆ 152 ರನ್‌

ಕೊಹ್ಲಿ ಸಾಧನೆಗೆ ಮತ್ತೊಂದು ಗರಿ; ಸಚಿನ್ ವಿಶ್ವದಾಖಲೆ ವಿರಾಟ್ ಪಾಲು..!

ಇನ್ನು ಆರನೇ ವಿಕೆಟ್‌ಗೆ ಜತೆಯಾದ ಟೀಂ ಇಂಡಿಯಾದ ಸ್ಟಾರ್ ಆಲ್ರೌಂಡರ್‌ಗಳಾದ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಜೋಡಿ ಅಜೇಯ ಶತಕ(150)ದ ಜತೆಯಾಟವಾಡುವ ಮೂಲಕ ತಂಡ ಸ್ಫರ್ಧಾತ್ಮಕ ಮೊತ್ತ ಕಲೆ ಹಾಕಲು ನೆರವಾದರು. ಜಡೇಜಾ 50 ಎಸೆತಗಳಲ್ಲಿ 5 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ ಅಜೇಯ 66 ರನ್ ಬಾರಿಸಿದರೆ, ಹಾರ್ದಿಕ್ ಪಾಂಡ್ಯ 76 ಎಸೆತಗಳನ್ನು ಎದುರಿಸಿ 7 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 92 ರನ್ ಬಾರಿಸಿ ಅಜೇಯರಾಗುಳಿದರು. ಕೊನೆಯ 10 ಓವರ್‌ಗಳಲ್ಲಿ ಈ ಜೋಡಿ 110 ರನ್‌ಗಳ ಜತೆಯಾಟ ನಿಭಾಯಿಸಿತು.