ಪ್ರಖ್ಯಾತ ಕ್ರಿಕೆಟ್ ವಿಶ್ಲೇಷಕ ಹರ್ಷಾ ಬೋಗ್ಲೆ ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತದ ಸಂಭಾವ್ಯ 15ರ ಬಳಗವನ್ನು ಆಯ್ಕೆ ಮಾಡಿದ್ದಾರೆ. ಅವರ ತಂಡದಲ್ಲಿ ಸ್ಪೋಟಕ ಆಟಗಾರ ಯಶಸ್ವಿ ಜೈಸ್ವಾಲ್ ಮತ್ತು ನಿತೀಶ್ ಕುಮಾರ್ ರೆಡ್ಡಿಗೆ ಸ್ಥಾನ ಸಿಕ್ಕಿಲ್ಲ.

ಬೆಂಗಳೂರು: ಮುಂಬರುವ ಫೆಬ್ರವರಿ 07ರಿಂದ ಮಾರ್ಚ್ 08ರವರೆಗೆ ಭಾರತ ಹಾಗೂ ಶ್ರೀಲಂಕಾದಲ್ಲಿ ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಜರುಗಲಿದೆ. ಹಾಲಿ ಚಾಂಪಿಯನ್ ಭಾರತ ತಂಡವು ಮತ್ತೊಮ್ಮೆ ಚುಟುಕು ವಿಶ್ವಕಪ್ ಜಯಿಸುವ ವಿಶ್ವಾಸದಲ್ಲಿದೆ. ಹೀಗಿರುವಾಗಲೇ ಪ್ರಖ್ಯಾತ ಕ್ರಿಕೆಟ್ ವಿಶ್ಲೇಷಕ ಹಾಗೂ ವೀಕ್ಷಕ ವಿವರಣೆಗಾರ ಹರ್ಷಾ ಬೋಗ್ಲೆ, ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತದ ಸಂಭಾವ್ಯ 15ರ ಬಳಗವನ್ನು ಆಯ್ಕೆ ಮಾಡಿದ್ದಾರೆ.

Cricbuzz ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿರುವ ಹರ್ಷಾ ಬೋಗ್ಲೆ, ಎಲ್ಲರೂ ಫಿಟ್ ಹಾಗೂ ಆಯ್ಕೆಗೆ ಲಭ್ಯವಿದ್ದರೇ, ಯಶಸ್ವಿ ಜೈಸ್ವಾಲ್, ನಿತೀಶ್ ಕುಮಾರ್ ರೆಡ್ಡಿಅವರಿಗೆ ಸ್ಥಾನ ಸಿಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗಷ್ಟೇ ಮುಕ್ತಾಯವಾದ ಆಸ್ಟ್ರೇಲಿಯಾ ಎದುರಿನ 5 ಪಂದ್ಯಗಳ ಟಿ20 ಸರಣಿಯಲ್ಲಿ ಸ್ಥಾನ ಪಡೆದ ಬಹುತೇಕ ಆಟಗಾರರು ಮುಂಬರುವ ಚುಟುಕು ವಿಶ್ವಕಪ್ ಟೂರ್ನಿಯಲ್ಲಿ ಸ್ಥಾನ ಪಡೆಯಲಿದ್ದಾರೆ ಎಂದು ಹರ್ಷಾ ಬೋಗ್ಲೆ ಅಭಿಪ್ರಾಯಪಟ್ಟಿದ್ದಾರೆ.

ಯಶಸ್ವಿ ಜೈಸ್ವಾಲ್‌ಗಿಲ್ಲ ಸ್ಥಾನ!

ಇನ್ನು ಹರ್ಷಾ ಬೋಗ್ಲೆ ಆಯ್ಕೆ ಮಾಡಿದ ಸಂಭಾವ್ಯ ಭಾರತ ವಿಶ್ವಕಪ್ ತಂಡದಲ್ಲಿ ಸ್ಪೋಟಕ ಎಡಗೈ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್‌ಗೆ ಸ್ಥಾನ ಸಿಕ್ಕಿಲ್ಲ. ಚುಟುಕು ಕ್ರಿಕೆಟ್ ಮಾದರಿಯಲ್ಲಿ ಯಶಸ್ವಿ ಜೈಸ್ವಾಲ್ ಸಿಕ್ಕ ಕೇವಲ 23 ಪಂದ್ಯಗಳಲ್ಲಿ 164ರ ಸ್ಟ್ರೈಕ್‌ರೇಟ್‌ನಲ್ಲಿ 723 ರನ್ ಸಿಡಿಸಿ ಮಿಂಚಿದ್ದಾರೆ. ಯಶಸ್ವಿ ಜೈಸ್ವಾಲ್ 2024ರ ಜುಲೈನಲ್ಲಿ ಕೊನೆಯ ಬಾರಿಗೆ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದರು. ಇದಾದ ಬಳಿಕ ಅಭಿಷೇಕ್ ಶರ್ಮಾ ಜತೆ ಆರಂಭಿಕರಾಗಿ ಸಂಜು ಸ್ಯಾಮ್ಸನ್ ಹಾಗು ಶುಭ್‌ಮನ್ ಗಿಲ್ ಕಣಕ್ಕಿಳಿಯುತ್ತಿದ್ದಾರೆ.

ಕಳೆದ ಏಷ್ಯಾಕಪ್‌ನಿಂದ ಅಭಿಷೇಕ್ ಶರ್ಮಾ ಜತೆ ಶುಭ್‌ಮನ್ ಗಿಲ್ ಆರಂಭಿಕನಾಗಿ ಕಣಕ್ಕಿಳಿಯುತ್ತಿದ್ದಾರೆ. ಅಭಿಷೇಕ್ ಶರ್ಮಾ ಆಸ್ಟ್ರೇಲಿಯಾ ಎದುರಿನ 5 ಪಂದ್ಯಗಳ ಟಿ20 ಸರಣಿಯಲ್ಲಿ 163 ರನ್ ಸಿಡಿಸುವ ಮೂಲಕ ಸರಣಿಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು. ಜತೆಗೆ ಟಿ20 ಕ್ರಿಕೆಟ್ ಮಾದರಿಯಲ್ಲಿ ಭಾರತದ ನಂಬಿಗಸ್ಥ ಆರಂಭಿಕ ಬ್ಯಾಟರ್ ಆಗಿ ಅಭಿಷೇಕ್ ಶರ್ಮಾ ತನ್ನ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ. ಇನ್ನು ಪಂಜಾಬ್ ಮೂಲದ ಎಡಗೈ ಬ್ಯಾಟರ್ ಅಭಿಷೇಕ್ ಶರ್ಮಾ, ಏಷ್ಯಾಕಪ್ ಟೂರ್ನಿಯಲ್ಲೂ ಸರಣಿಶ್ರೇಷ್ಠ ಪ್ರಶಸ್ತಿಯನ್ನು ಜಯಿಸಿದ್ದರು.

ಇನ್ನು ಆಸ್ಟ್ರೇಲಿಯಾ ಎದುರಿನ ಸರಣಿಯಲ್ಲಿ ಬೌಲಿಂಗ್ ಆಲ್ರೌಂಡರ್ ಆಗಿ ಸ್ಥಾನ ಪಡೆದಿದ್ದ ನಿತೀಶ್ ಕುಮಾರ್ ರೆಡ್ಡಿ ಬದಲಿಗೆ ಮುಂಬರುವ ವಿಶ್ವಕಪ್ ಟೂರ್ನಿಯಲ್ಲಿ ಹಾರ್ದಿಕ್ ಪಾಂಡ್ಯ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಇನ್ನುಳಿದಂತೆ ವಿಕೆಟ್ ಕೀಪರ್ ಬ್ಯಾಟರ್ ಆಗಿ ಸಂಜು ಸ್ಯಾಮ್ಸನ್ ಹಾಗೂ ಜಿತೇಶ್ ಶರ್ಮಾ ಭಾರತ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ ಎಂದು ಹರ್ಷಾ ಬೋಗ್ಲೆ ಅಭಿಪ್ರಾಯಪಟ್ಟಿದ್ದಾರೆ.

ಟಿ20 ವಿಶ್ವಕಪ್ ಟೂರ್ನಿಗೆ ಹರ್ಷಾ ಬೋಗ್ಲೆ ಆಯ್ಕೆ ಮಾಡಿದ ಭಾರತ ತಂಡ:

ಸೂರ್ಯಕುಮಾರ್ ಯಾದವ್(ನಾಯಕ), ಶುಭ್‌ಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಜಿತೇಶ್ ಶರ್ಮಾ(ವಿಕೆಟ್ ಕೀಪರ್), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ, ಅರ್ಶದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ.