ICC T20 World Cup Squad: ಟಿ20 ವಿಶ್ವಕಪ್ ಟೂರ್ನಿಗೆ ಬಲಿಷ್ಠ ಭಾರತ ಕ್ರಿಕೆಟ್ ತಂಡ ಪ್ರಕಟ

ಭಾರತ ತಂಡಕ್ಕೆ ಭರ್ಜರಿಯಾಗಿ ಕಮ್‌ಬ್ಯಾಕ್ ಮಾಡಿದ ಬುಮ್ರಾ, ಹರ್ಷಲ್ ಪಟೇಲ್
ಟಿ20 ವಿಶ್ವಕಪ್ ಟೂರ್ನಿಯಿಂದಲೂ ರವೀಂದ್ರ ಜಡೇಜಾ ಔಟ್
ಅಕ್ಟೋಬರ್ 16ರಿಂದ ಆಸ್ಟ್ರೇಲಿಯಾದಲ್ಲಿ ಆರಂಭವಾಗಲಿರುವ ಟಿ20 ವಿಶ್ವಕಪ್

 

ICC T20 World Cup 2022 india squad announced Jasprit Bumrah Harshal Patel Return kvn

ಮುಂಬೈ(ಸೆ.12): ಮುಂಬರುವ ಐಸಿಸಿ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಗೆ ಬಲಿಷ್ಠ ಭಾರತ ಕ್ರಿಕೆಟ್ ತಂಡ ಪ್ರಕಟವಾಗಿದ್ದು, ರೋಹಿತ್ ಶರ್ಮಾ ನಾಯಕನಾಗಿ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಇನ್ನು ತೀವ್ರ ಕುತೂಹಲ ಕೆರಳಿಸಿದ್ದ ವಿಕೆಟ್ ಕೀಪರ್‌ ರೂಪದಲ್ಲಿ ದಿನೇಶ್ ಕಾರ್ತಿಕ್ ಹಾಗೂ ರಿಷಭ್ ಪಂತ್ ಇಬ್ಬರೂ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ನಿರೀಕ್ಷೆಯಂತೆಯೇ ರೋಹಿತ್ ಶರ್ಮಾ ನಾಯಕರಾಗಿ ಹಾಗೂ ಕೆ ಎಲ್ ರಾಹುಲ್ ಉಪನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಇನ್ನುಳಿದಂತೆ ವಿರಾಟ್ ಕೊಹ್ಲಿ, ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್, ರವಿಚಂದ್ರನ್ ಅಶ್ವಿನ್, ಯುಜುವೇಂದ್ರ ಚಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್ ಹಾಗೂ ಆರ್ಶದೀಪ್ ಸಿಂಗ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನುಳಿದಂತೆ ಮೀಸಲು ಆಟಗಾರರಾಗಿ ಅನುಭವಿ ವೇಗಿ ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯಿ ಹಾಗೂ ದೀಪಕ್ ಚಹಾರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಬುಮ್ರಾ, ಹರ್ಷಲ್ ಪಟೇಲ್ ಕಮ್‌ಬ್ಯಾಕ್‌: ಫಿಟ್ನೆಸ್ ಸಮಸ್ಯೆಯಿಂದಾಗಿ ಏಷ್ಯಾಕಪ್ ಟೂರ್ನಿಯಿಂದ ಹೊರಬಿದ್ದಿದ್ದ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ಹಾಗೂ ಡೆತ್ ಓವರ್ ಸ್ಪೆಷಲಿಸ್ಟ್‌ ಹರ್ಷಲ್ ಪಟೇಲ್ ಫಿಟ್ನೆಸ್ ಪರೀಕ್ಷೆ ಪಾಸಾದ ಹಿನ್ನೆಲೆಯಲ್ಲಿ ಭಾರತ ತಂಡಕ್ಕೆ ಕಮ್‌ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದೆ. ಈ ಇಬ್ಬರು ವೇಗಿಗಳ ಸೇರ್ಪಡೆ ತಂಡಕ್ಕೆ ಮತ್ತಷ್ಟು ಬಲ ತುಂಬುವಂತೆ ಮಾಡಿದೆ.

T20 World Cup Squad: ಇಂದು ರಾಷ್ಟ್ರೀಯ ಆಯ್ಕೆ ಸಮಿತಿ ಸಭೆ, ವಿಶ್ವಕಪ್‌ಗೆ ತಂಡ ನಿರ್ಧಾರ!

ಜಡೇಜಾ ಔಟ್, ರವಿ ಬಿಷ್ಣೋಯಿ, ಆವೇಶ್ ಖಾನ್‌ಗಿಲ್ಲ ಸ್ಥಾನ: ಇನ್ನು ಗಾಯದ ಸಮಸ್ಯೆಯಿಂದಾಗಿ ಏಷ್ಯಾಕಪ್ ಟೂರ್ನಿಯ ಮಧ್ಯ ಭಾಗದಿಂದಲೇ ತಂಡದಿಂದ ಹೊರಬಿದ್ದಿದ್ದ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ, ಐಸಿಸಿ ಟಿ20 ವಿಶ್ವಕಪ್ ವಿಶ್ವಕಪ್ ತಂಡದಿಂದಲೂ ಹೊರಬಿದ್ದಿದ್ದಾರೆ. ಇನ್ನು ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದ ಲೆಗ್‌ಸ್ಪಿನ್ನರ್ ರವಿ ಬಿಷ್ಣೋಯಿ ಹಾಗೂ ಯುವ ವೇಗಿ ಆವೇಶ್ ಖಾನ್ ಕೂಡಾ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ.

ಮುಂಬರುವ ಅಕ್ಟೋಬರ್ 16ರಿಂದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಆಸ್ಟ್ರೇಲಿಯಾದಲ್ಲಿ ಆರಂಭವಾಗಲಿದ್ದು, ಈ ಚುಟುಕು ಕ್ರಿಕೆಟ್ ಸಂಗ್ರಾಮಕ್ಕೆ 15 ಆಟಗಾರರನ್ನೊಳಗೊಂಡ ಬಲಿಷ್ಠ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದೆ. ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಅಕ್ಟೋಬರ್ 16ರಿಂದ ನವೆಂಬರ್ 13ರವರೆಗೆ ನಡೆಯಲಿದೆ.

ಐಸಿಸಿ ಟಿ20 ವಿಶ್ವಕಪ್‌ಗೆ ಭಾರತ ತಂಡ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯಜುವೇಂದ್ರ ಚಹಲ್, ಅಕ್ಸರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆರ್ಶ್‌ದೀಪ್‌ ಸಿಂಗ್.

ಮೀಸಲು ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯಿ, ದೀಪಕ್ ಚಹರ್.

Latest Videos
Follow Us:
Download App:
  • android
  • ios