T20 World Cup Final: ಪಾಕ್ ಎದುರು ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ
ಟಿ20 ವಿಶ್ವಕಪ್ ಫೈನಲ್‌ನಲ್ಲಿ ಪಾಕಿಸ್ತಾನ-ಇಂಗ್ಲೆಂಡ್ ಮುಖಾಮುಖಿ
ಹೈವೋಲ್ಟೇಜ್ ಪಂದ್ಯಕ್ಕೆ ಮೆಲ್ಬರ್ನ್ ಕ್ರಿಕೆಟ್ ಮೈದಾನ
ಟಾಸ್ ಗೆದ್ದ ಜೋಸ್ ಬಟ್ಲರ್ ಬೌಲಿಂಗ್ ಆಯ್ಕೆ
ಮೆಲ್ಬರ್ನ್(ನ.13): ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಎರಡೂ ತಂಡಗಳು ಎರಡನೇ ಟಿ20 ವಿಶ್ವಕಪ್ ಜಯಿಸುವ ಕನವರಿಕೆಯಲ್ಲಿದೆ.
ಇಂಗ್ಲೆಂಡ್ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೆ ಇಲ್ಲಿನ ಮೆಲ್ಬರ್ನ್ ಕ್ರಿಕೆಟ್ ಮೈದಾನ ಆತಿಥ್ಯವನ್ನು ವಹಿಸಿದೆ. ಉಭಯ ತಂಡಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಸೆಮಿಫೈನಲ್‌ನಲ್ಲಿ ಕಣಕ್ಕಿಳಿದ ತಂಡವೇ ಇದೀಗ ಫೈನಲ್‌ನಲ್ಲಿ ಕಣಕ್ಕಿಳಿದಿವೆ. ಮಳೆಯ ಭೀತಿ ಇರುವ ಹಿನ್ನೆಲೆಯಲ್ಲಿ ಜೋಸ್ ಬಟ್ಲರ್ ಟಾಸ್ ಗೆಲ್ಲುತ್ತಿದ್ದಂತೆಯೇ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.
ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ತಂಡವು, ನ್ಯೂಜಿಲೆಂಡ್ ಮಣಿಸಿ ಪ್ರಶಸ್ತಿ ಸುತ್ತಿಗೆ ಲಗ್ಗೆಯಿಟ್ಟಿದೆ. ಇನ್ನೊಂದೆಡೆ ಅಡಿಲೇಡ್ ಓವಲ್ ಮೈದಾನದಲ್ಲಿ ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಎದುರು 10 ವಿಕೆಟ್‌ಗಳ ಗೆಲುವು ಸಾಧಿಸಿ ಇಂಗ್ಲೆಂಡ್ ಫೈನಲ್ ಪ್ರವೇಶಿಸಿದ್ದು, ಎರಡನೇ ಬಾರಿಗೆ ಟಿ20 ವಿಶ್ವಕಪ್ ಟ್ರೋಫಿಗೆ ಮುತ್ತಿಕ್ಕಲು ಎದುರು ನೋಡುತ್ತಿದೆ.
ಮೆಲ್ಬರ್ನ್‌ನಲ್ಲಿ ನಿಲ್ಲದ ಮಳೆ
ಶನಿವಾರದಿಂದಲೇ ಮೆಲ್ಬರ್ನ್‌ನಲ್ಲಿ ಮಳೆ ಸುರಿಯುತ್ತಿದ್ದು, ಕ್ರೀಡಾಂಗಣದ ಔಟ್‌ಫೀಲ್ಡ್ ಒದ್ದೆಯಾಗಿತ್ತು. ಪಿಚ್‌ಗೆ ಹೊದಿಕೆ ಹೊದಿಸಲಾಗಿತ್ತಾದರೂ ತೇವಾಂಶ ಹೆಚ್ಚಿದೆ ಎಂದು ವರದಿಯಾಗಿದೆ. ಭಾನುವಾರ ಇಡೀ ದಿನ ಭಾರೀ ಮಳೆ ಮುನ್ಸೂಚನೆ ಇದ್ದು, ಪಂದ್ಯ ಮೀಸಲು ದಿನಕ್ಕೆ ಮುಂದೂಡಿಕೆಯಾಗಬಹುದು. ಸೋಮವಾರವೂ ಮಳೆ ಮುನ್ಸೂಚನೆ ಇದ್ದು, ಪಂದ್ಯ ಪೂರ್ಣಗೊಳಿಸಲು ಸಾಧ್ಯವಾಗದೆ ಹೋದರೆ ಎರಡೂ ತಂಡಗಳನ್ನು ಜಂಟಿ ವಿಜೇತರೆಂದು ಘೋಷಿಸಲಾಗುತ್ತದೆ.
ತಂಡಗಳು ಹೀಗಿವೆ ನೋಡಿ
ಇಂಗ್ಲೆಂಡ್: ಜೋಸ್ ಬಟ್ಲರ್(ನಾಯಕ), ಅಲೆಕ್ಸ್ ಹೇಲ್ಸ್, ಫಿಲ್ ಸಾಲ್ಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಮೋಯಿನ್ ಅಲಿ, ಸ್ಯಾಮ್ ಕರ್ರನ್, ಕ್ರಿಸ್ ಜೋರ್ಡನ್, ಆದಿಲ್ ರಶೀದ್.
ಪಾಕಿಸ್ತಾನ: ಬಾಬರ್ ಅಜಂ(ನಾಯಕ), ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ಹ್ಯಾರಿಸ್, ಶಾನ್ ಮಸೂದ್, ಇಫ್ತಿಕಾರ್ ಅಹಮದ್, ಮೊಹಮ್ಮದ್ ನವಾಜ್, ಶದಾಬ್ ಖಾನ್, ವಾಸೀಂ, ನಸೀಂ ಶಾ, ಹ್ಯಾರಿಸ್ ರೌಫ್, ಶಾಹೀನ್ ಅಫ್ರಿದಿ.