* ನ್ಯೂಜಿಲೆಂಡ್ ಮಣಿಸಿ ಫೈನಲ್‌ಗೆ ಲಗ್ಗೆಯಿಟ್ಟ ಪಾಕಿಸ್ತಾನ* 13 ವರ್ಷಗಳ ಬಳಿಕ ಮೊದಲ ಬಾರಿಗೆ ಫೈನಲ್ ಪ್ರವೇಶ* ಮೆಲ್ಬರ್ನ್‌ನಲ್ಲಿ ನವೆಂಬರ್ 13ರಂದು ನಡೆಯಲಿರುವ ಫೈನಲ್ ಪಂದ್ಯ

ಸಿಡ್ನಿ(ನ.09): ನಾಯಕ ಬಾಬರ್ ಅಜಂ ಹಾಗೂ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಜ್ವಾನ್ ಬಾರಿಸಿದ ಆಕರ್ಷಕ ಅರ್ಧಶತಕಗಳ ನೆರವಿನಿಂದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ದ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಮೊದಲ ತಂಡವಾಗಿ ಫೈನಲ್‌ಗೆ ಲಗ್ಗೆಯಿಟ್ಟಿದೆ. ಇನ್ನು ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಜಿಲೆಂಡ್ ತಂಡವು ಮತ್ತೊಮ್ಮೆ ಐಸಿಸಿ ನಾಕೌಟ್ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಶರಣಾಗುವ ಮೂಲಕ ನಿರಾಸೆ ಅನುಭವಿಸಿದೆ. ಈ ಗೆಲುವಿನೊಂದಿಗೆ ಬಾಬರ್ ಅಜಂ ಪಡೆ ಭರ್ಜರಿಯಾಗಿ ಪ್ರಶಸ್ತಿ ಸುತ್ತು ಪ್ರವೇಶಿಸಿದೆ.

13 ವರ್ಷಗಳ ಬಳಿಕ ಫೈನಲ್‌ಗೆ ಲಗ್ಗೆ: ಪಾಕಿಸ್ತಾನ ತಂಡವು 2009ರಲ್ಲಿ ಕೊನೆಯ ಬಾರಿಗೆ ಟಿ20 ವಿಶ್ವಕಪ್ ಫೈನಲ್‌ ಪ್ರವೇಶಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಆಗ ಯೂನಿಸ್ ಖಾನ್ ನೇತೃತ್ವದ ಪಾಕಿಸ್ತಾನ ತಂಡವು ಶ್ರೀಲಂಕಾವನ್ನು ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇದಾದ ಬಳಿಕ ಪಾಕಿಸ್ತಾನ ತಂಡವು ಕೆಲವು ಬಾರಿ ಸೆಮೀಸ್ ಪ್ರವೇಶಿಸಿತ್ತಾದರೂ ಪ್ರಶಸ್ತಿ ಸುತ್ತಿಗೆ ಲಗ್ಗೆಯಿಡಲು ವಿಫಲವಾಗಿತ್ತು. ಇನ್ನು ಕಳೆದ ವರ್ಷ ಯುಎಇನಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಸೆಮೀಸ್‌ನಲ್ಲೇ ಮುಗ್ಗರಿಸಿತ್ತು. ಆದರೆ ಇದೀಗ ಬಾಬರ್ ಅಜಂ ಪಡೆ ಟೂರ್ನಿಯಲ್ಲಿ ಮೊದಲೆರಡು ಪಂದ್ಯಗಳನ್ನು ಸೋತರೂ ಪವಾಡಸದೃಶ ರೀತಿಯಲ್ಲಿ ಫೈನಲ್‌ಗೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿದೆ.

Scroll to load tweet…

ಇಲ್ಲಿನ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನ್ಯೂಜಿಲೆಂಡ್ ನೀಡಿದ್ದ 153 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಪಾಕಿಸ್ತಾನ ತಂಡಕ್ಕೆ ಆರಂಭಿಕರಾದ ಬಾಬರ್ ಅಜಂ ಹಾಗೂ ಮೊಹಮ್ಮದ್ ರಿಜ್ವಾನ್ 12.4 ಓವರ್‌ಗಳಲ್ಲಿ 105 ರನ್‌ಗಳ ಭರ್ಜರಿ ಜತೆಯಾಟವಾಡುವ ಮೂಲಕ ಉತ್ತಮ ಆರಂಭ ಒದಗಿಸಿಕೊಟ್ಟರು. ಇದರೊಂದಿಗೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಈ ಜೋಡಿಯು ದಾಖಲೆಯ ಮೂರನೇ ಬಾರಿಗೆ ಶತಕದ ಜತೆಯಾಟವಾಡುವ ಮೂಲಕ ಆಸರೆಯಾಯಿತು. ಆರಂಭದಲ್ಲೇ ಮೈಚಳಿ ಬಿಟ್ಟು ಬ್ಯಾಟ್ ಬೀಸಿದ ಈ ಇಬ್ಬರು ಆರಂಭಿಕರು ಕಿವೀಸ್‌ ಬೌಲರ್‌ಗಳ ಮೇಲೆ ಸವಾರಿ ನಡೆಸಿದರು. ನಾಯಕ ಬಾಬರ್ ಅಜಂ ಕೇವಲ 42 ಎಸೆತಗಳಲ್ಲಿ 7 ಬೌಂಡರಿ ಸಹಿತ 53 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮತ್ತೋರ್ವ ಆರಂಭಿಕ ಬ್ಯಾಟರ್ ಮೊಹಮ್ಮದ್ ರಿಜ್ವಾನ್ 43 ಎಸೆತಗಳಲ್ಲಿ 5 ಬೌಂಡರಿ ಸಹಿತ 57 ರನ್ ಬಾರಿಸಿ ಟ್ರೆಂಟ್‌ ಬೌಲ್ಟ್‌ಗೆ ಎರಡನೇ ಬಲಿಯಾದರು. ಇನ್ನು ಕೊನೆಯಲ್ಲಿ ಮೊಹಮ್ಮದ್ ಹ್ಯಾರಿಸ್ 30 ರನ್ ಬಾರಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ಯದರು. ಕೊನೆಯ ಓವರ್‌ನಲ್ಲಿ ಗೆಲ್ಲಲು ಕೇವಲ 2 ರನ್‌ಗಳ ಅಗತ್ಯವಿದ್ದಾಗ ಶಾನ್ ಮಸೂದ್ ಗೆಲುವಿನ ರನ್ ಬಾರಿಸಿದರು.

Scroll to load tweet…

ಇನ್ನು ಇದಕ್ಕೂ ಮೊದಲು ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಮೊದಲು ಬ್ಯಾಟ್ ಮಾಡುವ ತೀರ್ಮಾನ ತೆಗೆದುಕೊಂಡರು. ಆದರೆ ಕಿವೀಸ್ ತಂಡವು ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಫಿನ್ ಅಲೆನ್ 4 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ಮತ್ತೋರ್ವ ಆರಂಭಿಕ ಬ್ಯಾಟರ್ ಡೆವೊನ್ ಕಾನ್‌ವೇ 20 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಇನ್‌ಫಾರ್ಮ್ ಬ್ಯಾಟರ್ ಗ್ಲೆನ್ ಫಿಲಿಫ್ಸ್ ಕೇವಲ 6 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದು, ಕಿವೀಸ್ ಪಾಳಯದಲ್ಲಿ ಆತಂಕ ಮನೆ ಮಾಡುವಂತೆ ಮಾಡಿತು.

ಕೇನ್-ಮಿಚೆಲ್ ಜುಗಲ್ಬಂದಿ: 8 ಓವರ್ ಅಂತ್ಯದ ವೇಳೆಗೆ ಕೇವಲ 49 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ನ್ಯೂಜಿಲೆಂಡ್ ತಂಡಕ್ಕೆ 4ನೇ ವಿಕೆಟ್‌ಗೆ ನಾಯಕ ಕೇನ್ ವಿಲಿಯಮ್ಸನ್ ಹಾಗೂ ಡೇರಲ್ ಮಿಚೆಲ್ 66 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ಕೇನ್ ವಿಲಿಯಮ್ಸನ್ 42 ಎಸೆತಗಳಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 46 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸಿದ ಡೇರಲ್ ಮಿಚೆಲ್ 34 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 53 ರನ್ ಬಾರಿಸಿ ಅಜೇಯರಾಗುಳಿದರು. ಇನ್ನು ಕೊನೆಯಲ್ಲಿ ಜೇಮ್ಸ್ ನೀಶಮ್ 16 ರನ್ ಬಾರಿಸುವ ಮೂಲಕ ತಂಡದ ಮೊತ್ತ 150ರ ಗಡಿ ದಾಟಿಸಲು ನೆರವಾದರು.