ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ನಡುವಿನ ಪಿಂಕ್ ಬಾಲ್ ಟೆಸ್ಟ್ ಮುಕ್ತಾಯದ ನಂತರ ಹೊಸ ಐಸಿಸಿ ಟೆಸ್ಟ್ ರ್‍ಯಾಂಕಿಂಗ್ ಬಿಡುಗಡೆಯಾಗಿದೆ. ಟಾಪ್ 10 ಬೌಲರ್‌ಗಳಲ್ಲಿ ಐವರು ಆಸ್ಟ್ರೇಲಿಯಾದವರು, ಜಸ್ಪ್ರೀತ್ ಬುಮ್ರಾ ಅಗ್ರಸ್ಥಾನದಲ್ಲಿ ಮುಂದುವರೆದಿದ್ದಾರೆ.
ದುಬೈ: ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ನಡುವಿನ ಪಿಂಕ್ ಬಾಲ್ ಟೆಸ್ಟ್ ಮುಕ್ತಾಯದ ಬೆನ್ನಲ್ಲೇ ನೂತನ ಐಸಿಸಿ ಟೆಸ್ಟ್ ರ್‍ಯಾಂಕಿಂಗ್ ಪ್ರಕಟಗೊಂಡಿದ್ದು, ಆಸ್ಟ್ರೇಲಿಯಾ ಬೌಲರ್‌ಗಳು ಅಸಾಧಾರಣ ಸಾಧನೆ ಮಾಡಿದ್ದಾರೆ. ವೆಸ್ಟ್ ಇಂಡೀಸ್ ಎದುರಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಪ್ಯಾಟ್ ಕಮಿನ್ಸ್ ನೇತೃತ್ವದ ಅಸ್ಟ್ರೇಲಿಯಾ ತಂಡವು 3-0 ಅಂತರದಲ್ಲಿ ಕ್ಲೀನ್‌ಸ್ವೀಪ್ ಮಾಡಿತ್ತು.
ಕೆರಿಬಿಯನ್ ಪಡೆಯ ಮೇಲೆ ದಿಗ್ವಿಜಯ ಸಾಧಿಸುವಲ್ಲಿ ಕಾಂಗರೂ ಪಡೆಯ ಬೌಲರ್‌ಗಳು ಪ್ರಮುಖ ಪಾತ್ರವಹಿಸಿದ್ದರು. ಅದರಲ್ಲೂ ಪಿಂಕ್ ಬಾಲ್ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ಬೌಲರ್‌ಗಳು ವೆಸ್ಟ್ ಇಂಡೀಸ್ ತಂಡವನ್ನು ಕೇವಲ 27 ರನ್‌ಗಳಿಗೆ ಆಲೌಟ್ ಮಾಡುವ ಮೂಲಕ ಸರಣಿ ಕ್ಲೀನ್ ಸ್ವೀಪ್ ಮಾಡುವಲ್ಲಿ ಯಶಸ್ವಿಯಾಗಿದ್ದರು. ಎರಡನೇ ಇನ್ನಿಂಗ್ಸ್‌ನಲ್ಲಿ ತಮ್ಮ ಟೆಸ್ಟ್ ವೃತ್ತಿ ಜೀವನದ ನೂರನೇ ಪಂದ್ಯವನ್ನಾಡಿದ ಮಿಚೆಲ್ ಸ್ಟಾರ್ಕ್ 6 ವಿಕೆಟ್ ಕಬಳಿಸಿದರೆ, ಮತ್ತೋರ್ವ ವೇಗಿ ಸ್ಕಾಟ್ ಬೋಲೆಂಡ್ ಹ್ಯಾಟ್ರಿಕ್ ವಿಕೆಟ್ ಕಬಳಿಸಿ ಮಿಂಚಿದರು. ಇದರ ಬೆನ್ನಲ್ಲೇ ಐಸಿಸಿ ನೂತನ ರ್‍ಯಾಂಕಿಂಗ್ ಪ್ರಕಟಗೊಂಡಿದ್ದು, ಟಾಪ್ 10 ಬೌಲರ್‌ಗಳ ಪೈಕಿ ಐವರು ಆಸೀಸ್ ಬೌಲರ್‌ಗಳು ಸ್ಥಾನ ಪಡೆದಿದ್ದಾರೆ.
ಹೌದು, ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮೂರನೇ ಸ್ಥಾನ ಪಡೆದರೆ, ಮತ್ತೋರ್ವ ಅನುಭವಿ ವೇಗಿ ಜೋಶ್ ಹೇಜಲ್‌ವುಡ್ ನಾಲ್ಕನೇ ಸ್ಥಾನ ಪಡೆದಿದ್ದಾರೆ. ಇನ್ನುಳಿದಂತೆ ಸ್ಕಾಟ್ ಬೋಲೆಂಡ್ 6, ನೇಥನ್ ಲಯನ್ 8 ಮತ್ತು ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ 10ನೇ ಸ್ಥಾನದಲ್ಲಿದ್ದಾರೆ. ಈ ಪೈಕಿ ಪಿಂಕ್ ಬಾಲ್ ಟೆಸ್ಟ್‌ಗೂ ಮುನ್ನ 12ನೇ ಸ್ಥಾನದಲ್ಲಿದ್ದ ಬೋಲೆಂಡ್ 6 ಸ್ಥಾನ ಜಿಗಿತ ಕಂಡು ಆರನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ.
ಇನ್ನು ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಒಟ್ಟಾರೆ 7 ವಿಕೆಟ್ ಕಬಳಿಸಿದ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾ 901 ರೇಟಿಂಗ್ ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿಯೇ ಮುಂದುವರೆದಿದ್ದಾರೆ. ಇನ್ನು ದಕ್ಷಿಣ ಆಫ್ರಿಕಾ ವೇಗಿ ಕಗಿಸೋ ರಬಾಡ 851 ರೇಟಿಂಗ್ ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿಯೇ ಮುಂದುವರೆದಿದ್ದಾರೆ. ಆಸೀಸ್ ನಾಯಕ ಪ್ಯಾಟ್ ಕಮಿನ್ಸ್ 838 ರೇಟಿಂಗ್ ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.
ಇನ್ನು ಬ್ಯಾಟಿಂಗ್ ವಿಭಾಗದಲ್ಲಿ ಹ್ಯಾರಿ ಬ್ರೂಕ್ ಅವರನ್ನು ಹಿಂದಿಕ್ಕಿ ಜೋ ರೂಟ್ ಮತ್ತೊಮ್ಮೆ ಅಗ್ರಸ್ಥಾನಕ್ಕೇರಿದ್ದಾರೆ. ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಭಾರತ ಎದುರು ಜೋ ರೂಟ್ ಆಕರ್ಷಕ ಶತಕ ಸಿಡಿಸಿದ್ದರು. ಇನ್ನು ಕೇನ್ ವಿಲಿಯಮ್ಸನ್ ಎರಡನೇ ಸ್ಥಾನಕ್ಕೇರಿದ್ದು, ಇಂಗ್ಲೆಂಡ್‌ನ ಹ್ಯಾರಿ ಬ್ರೂಕ್ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಸ್ಟೀವ್ ಸ್ಮಿತ್ ನಾಲ್ಕನೇ ಸ್ಥಾನಕ್ಕೆ ಏರಿದ್ದು, ಯಶಸ್ವಿ ಜೈಸ್ವಾಲ್ ಐದನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ. ಇನ್ನುಳಿದಂತೆ ರಿಷಭ್ ಪಂತ್ ಒಂದು ಸ್ಥಾನ ಕುಸಿದು 8ನೇ ಸ್ಥಾನಕ್ಕೆ ತಲುಪಿದರೆ, ಶುಭ್‌ಮನ್ ಗಿಲ್ ಮೂರು ಸ್ಥಾನ ಕುಸಿದು 9ನೇ ಸ್ಥಾನಕ್ಕೆ ಜಾರಿದ್ದಾರೆ.
ಟೆಸ್ಟ್ ಆಲ್ರೌಂಡರ್ ವಿಭಾಗದಲ್ಲಿ ರವೀಂದ್ರ ಜಡೇಜಾ 409 ರೇಟಿಂಗ್ ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿಯೇ ಮುಂದುವರೆದಿದ್ದಾರೆ. ಇನ್ನು ಬಾಂಗ್ಲಾದೇಶದ ಮೆಹದಿ ಹಸನ್ ಮಿರಾಜ್ ಹಾಗೂ ದಕ್ಷಿಣ ಆಫ್ರಿಕಾದ ವಿಹಾನ್ ಮುಲ್ಡರ್ ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನ ಹಂಚಿಕೊಂಡಿದ್ದಾರೆ. ಇನ್ನುಳಿದಂತೆ ಟಾಪ್ 20 ಆಲ್ರೌಂಡರ್ ಪಟ್ಟಿಯಲ್ಲಿ ರವೀಂದ್ರ ಜಡೇಜಾ ಹೊರತುಪಡಿಸಿ ಯಾವೊಬ್ಬ ಭಾರತೀಯನೂ ಸ್ಥಾನಪಡೆದಿಲ್ಲ. ರವೀಂದ್ರ ಜಡೇಜಾ ಇಂಗ್ಲೆಂಡ್ ಎದುರಿನ ಕಳೆದೆರಡು ಟೆಸ್ಟ್‌ನ 4 ಇನ್ನಿಂಗ್ಸ್‌ನಲ್ಲೂ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದ್ದರು.
