ದುಬೈ(ಫೆ.18): ಇಂಗ್ಲೆಂಡ್‌ ವಿರುದ್ಧದ 2ನೇ ಟೆಸ್ಟ್‌ನಲ್ಲಿ ಆಲ್ರೌಂಡ್‌ ಪ್ರದರ್ಶನ ತೋರಿದ ಭಾರತದ ಆರ್‌.ಅಶ್ವಿನ್‌, ಐಸಿಸಿ ಟೆಸ್ಟ್‌ ಆಲ್ರೌಂಡರ್‌ಗಳ ರ‍್ಯಾಂಕಿಂಗ್‌ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಜಿಗಿದಿದ್ದಾರೆ. ವಿಂಡೀಸ್‌ನ ಜೇಸನ್‌ ಹೋಲ್ಡರ್‌ ಮೊದಲ ಸ್ಥಾನದಲ್ಲಿದ್ದು, ರವೀಂದ್ರ ಜಡೇಜಾ 2ನೇ ಸ್ಥಾನದಲ್ಲಿದ್ದಾರೆ.

ಭಾರತ-ಇಂಗ್ಲೆಂಡ್‌ ನಡುವಿನ ಎರಡನೇ ಟೆಸ್ಟ್‌ ಪಂದ್ಯ ಮುಕ್ತಾಯವಾದ ಬೆನ್ನಲ್ಲೇ ಐಸಿಸಿ ನೂತನ ಟೆಸ್ಟ್ ರ‍್ಯಾಂಕಿಂಗ್‌ ಪ್ರಕಟಿಸಿದ್ದು, ಇಂಗ್ಲೆಂಡ್ ವಿರುದ್ದ ಎರಡನೇ ಟೆಸ್ಟ್‌ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಆಕರ್ಷಕ ಶತಕ ಚಚ್ಚಿದ ರೋಹಿತ್ ಶರ್ಮಾ 9 ಸ್ಥಾನ ಏರಿಕೆ ಕಂಡು 14ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಎರಡನೇ ಟೆಸ್ಟ್‌ ಪಂದ್ಯದಲ್ಲಿ ಅಶ್ವಿನ್‌ 8 ವಿಕೆಟ್‌ ಕಬಳಿಸಿದ್ದಲ್ಲದೇ ಆಕರ್ಷಕ ಶತಕ ಸಿಡಿಸುವ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಫಾಫ್‌ ಡುಪ್ಲೆಸಿಸ್‌..!

ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಕೇನ್‌ ವಿಲಿಯಮ್ಸನ್‌ ಹಾಗೂ ಸ್ಟೀವ್‌ ಸ್ಮಿತ್ ಮೊದಲೆರಡು ಸ್ಥಾನದಲ್ಲೇ ಮುಂದುವರೆದಿದ್ದರೆ, ಜೋ ರೂಟ್ ಅವರನ್ನು 4ನೇ ಸ್ಥಾನಕ್ಕೆ ತಳ್ಳಿ ಮಾರ್ನಸ್ ಲಬುಶೇನ್‌ ಮೂರನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಭಾರತದ ನಾಯಕ ವಿರಾಟ್‌ ಕೊಹ್ಲಿ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ 5ನೇ ಸ್ಥಾನ ಕಾಯ್ದುಕೊಂಡಿದ್ದಾರೆ. ಚೇತೇಶ್ವರ್‌ ಪೂಜಾರ 8ನೇ ಸ್ಥಾನಕ್ಕೆ ಕುಸಿದಿದ್ದಾರೆ.

ಇದೇ ವೇಳೆ ಬೌಲರ್‌ಗಳ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಪ್ಯಾಟ್ ಕಮಿನ್ಸ್‌ ಮೊದಲ ಸ್ಥಾನದಲ್ಲೇ ಮುಂದುವರೆದಿದ್ದರೆ, ನೀಲ್ ವ್ಯಾಗ್ನರ್ 2 ಸ್ಥಾನ ಮೇಲೇರಿ ಎರಡನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಜೇಮ್ಸ್‌ ಆಂಡರ್‌ಸನ್‌, ಜೋಸ್‌ ಹೇಜಲ್‌ವುಡ್‌ ಹಾಗೂ ಟಿಮ್‌ ಸೌಥಿ ಟಾಪ್ 5 ಪಟ್ಟಿಯೊಳಗೆ ಸ್ಥಾನ ಪಡೆದಿದ್ದಾರೆ. ಎರಡನೇ ಟೆಸ್ಟ್‌ನಲ್ಲಿ 8 ವಿಕೆಟ್ ಕಬಳಿಸಿದ ರವಿಚಂದ್ರನ್ ಅಶ್ವಿನ್‌ 7ನೇ ಸ್ಥಾನ, ಜಸ್‌ಪ್ರೀತ್‌ ಬುಮ್ರಾ 8ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.