Rohit Sharma: ಭಾರತ ತಂಡಕ್ಕೆ ಶಾಕ್, X-ray ಮಾಡಿಸಲು ಆಸ್ಪತ್ರೆಗೆ ತೆರಳಿದ ಟೀಂ ಇಂಡಿಯಾ ನಾಯಕ..!
* ಭಾರತ-ಬಾಂಗ್ಲಾದೇಶ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾಗೆ ಗಾಯ
* ಮೊಹಮ್ಮದ್ ಸಿರಾಜ್ ಬೌಲಿಂಗ್‌ನಲ್ಲಿ ಕ್ಯಾಚ್ ಹಿಡಿಯುವ ಯತ್ನದಲ್ಲಿ ಟೀಂ ಇಂಡಿಯಾ ನಾಯಕನಿಗೆ ಆಘಾತ
* ಗಾಯದ ತೀವ್ರತೆ ಅರಿಯಲು ಎಕ್ಸ್-ರೇ ಮಾಡಿಸಲು ಆಸ್ಪತ್ರೆಗೆ ತೆರಳಿದ ರೋಹಿತ್ ಶರ್ಮಾ
ಮೀರ್‌ಪುರ(ಡಿ.07): ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಎರಡನೇ ಏಕದಿನ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಬಾಂಗ್ಲಾದೇಶ ತಂಡದ ನಾಯಕ ಲಿಟನ್ ದಾಸ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಇನ್ನು ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಕ್ಷೇತ್ರ ರಕ್ಷಣೆ ಮಾಡುತ್ತಿದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಕ್ಯಾಚ್ ಹಿಡಿಯುವ ಯತ್ನದಲ್ಲಿ ಕೈಬೆರಳಿಗೆ ಗಾಯ ಮಾಡಿಕೊಂಡಿದ್ದು ಮೈದಾನ ತೊರೆದಿದ್ದಾರೆ. ಇದೀಗ ಗಾಯದ ತೀವ್ರತೆ ಅರಿಯಲು ಎಕ್ಸ್-ರೇ ಮಾಡಿಸಲು ಆಸ್ಪತ್ರೆಗೆ ತೆರಳಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಉಪನಾಯಕ ಕೆ ಎಲ್ ರಾಹುಲ್, ಹಂಗಾಮಿ ನಾಯಕರಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಪಂದ್ಯ ಆರಂಭವಾಗಿ ಎರಡನೇ ಓವರ್‌ನಲ್ಲಿಯೇ ಮೊಹಮ್ಮದ್ ಸಿರಾಜ್ ಎಸೆದ ಚೆಂಡು ಅನ್ಮೊಲ್ ಹಕ್ ಬ್ಯಾಟ್ ಸವರಿದ ಚೆಂಡು ಎರಡನೇ ಸ್ಲಿಪ್‌ನಲ್ಲಿ ನಿಂತಿದ್ದ ರೋಹಿತ್ ಶರ್ಮಾ ಬಳಿ ಹೋಯಿತು. ರೋಹಿತ್ ಶರ್ಮಾ ಕ್ಯಾಚ್ ಕೈಚೆಲ್ಲಿದ್ದೂ ಅಲ್ಲದೇ ಕೈ ಬೆರಳಿಗೂ ಗಾಯ ಮಾಡಿಕೊಂಡರು. ಈ ಕುರಿತಂತೆ ಟ್ವೀಟ್ ಮಾಡಿರುವ ಬಿಸಿಸಿಐ, "ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಎರಡನೇ ಪಂದ್ಯದ ವೇಳೆ ಕ್ಷೇತ್ರರಕ್ಷಣೆ ಮಾಡುವ ಸಂದರ್ಭದಲ್ಲಿ ಹೆಬ್ಬೆರಳಿನ ಗಾಯಕ್ಕೆ ಒಳಗಾಗಿದ್ದಾರೆ. ಬಿಸಿಸಿಐ ವೈದ್ಯಕೀಯ ಸಿಬ್ಬಂದಿಯೂ ಪರಿಸ್ಥಿತಿಯನ್ನು ಅವಲೋಕಿಸುತ್ತಿದೆ. ಈಗ ಅವರು ಸ್ಕ್ಯಾನ್ ಮಾಡಿಸಲು ತೆರಳಿದ್ದಾರೆ ಎಂದು ಟ್ವೀಟ್ ಮಾಡಿದೆ.
35 ವರ್ಷದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ತಮ್ಮ ಗಾಯದ ತೀವ್ರತೆ ಅರಿಯಲು ಎಕ್ಸ್-ರೇ ಮಾಡಿಸಲು ಸ್ಥಳೀಯ ಆಸ್ಪತ್ರೆಗೆ ತೆರಳಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಕೆ ಎಲ್ ರಾಹುಲ್ ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ.
Ind vs Ban: ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾ ಬ್ಯಾಟಿಂಗ್ ಆಯ್ಕೆ, ಉಭಯ ತಂಡದಲ್ಲೂ ಮಹತ್ವದ ಬದಲಾವಣೆ
ಟೀಂ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ: ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಎರಡನೇ ಏಕದಿನ ಪಂದ್ಯವು ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿಕೊಂಡಿದೆ. ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶದ ಎದುರು ಟೀಂ ಇಂಡಿಯಾ 1 ವಿಕೆಟ್‌ಗಳ ರೋಚಕ ಸೋಲು ಅನುಭವಿಸಿತ್ತು. ಇದರೊಂದಿಗೆ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 0-1ರ ಹಿನ್ನಡೆ ಅನುಭವಿಸಿದೆ. ಹೀಗಾಗಿ ಭಾರತ ಎರಡನೇ ಏಕದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.
ಅಲ್ಪ ಮೊತ್ತಕ್ಕೆ ಕುಸಿಯುವ ಭೀತಿಯಲ್ಲಿ ಬಾಂಗ್ಲಾದೇಶ: ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ತಂಡವು ಮೊದಲು ಬ್ಯಾಟಿಂಗ್ ಆರಂಭಿಸಿದ್ದು, ಟೀಂ ಇಂಡಿಯಾ ಬೌಲರ್‌ಗಳ ಮಾರಕ ದಾಳಿಗೆ ತತ್ತರಿಸಿ ಹೋಗಿದೆ. ಆರಂಭಿಕ ಬ್ಯಾಟರ್‌ಗಳಾದ ಅನ್ಮೊಲ್ ಹಕ್ ಹಾಗೂ ಲಿಟನ್ ದಾಸ್ ಅವರನ್ನು ಸಿರಾಜ್ ಪೆವಿಲಿಯನ್ನಿಗಟ್ಟಿದರೆ, 21 ರನ್ ಬಾರಿಸಿ ಮುನ್ನುಗ್ಗುತ್ತಿದ್ದ ನಜ್ಮುಲ್ ಹೊಸೈನ್ ಶಾಂಟೋ ಅವರನ್ನು ಉಮ್ರಾನ್ ಮಲಿಕ್ ಕ್ಲೀನ್ ಬೌಲ್ಡ್ ಮಾಡಿದರು. ಇನ್ನು ಶಕೀಬ್ ಅಲ್ ಹಸನ್, ಮುಷ್ಫಿಕುರ್ ರಹೀಂ ಹಾಗೂ ಅಫಿಫ್ ಹೊಸೈನ್‌ಗೆ ವಾಷಿಂಗ್ಟನ್ ಸುಂದರ್ ಪೆವಿಲಿಯನ್ ಹಾದಿ ತೋರಿಸಿದ್ದಾರೆ. 25 ಓವರ್ ಅಂತ್ಯದ ವೇಳೆಗೆ ಬಾಂಗ್ಲಾದೇಶ ತಂಡವು 6 ವಿಕೆಟ್ ಕಳೆದುಕೊಂಡು ಕೇವಲ 96 ರನ್ ಬಾರಿಸಿದ್ದು, ಅಲ್ಪ ಮೊತ್ತಕ್ಕೆ ಕುಸಿಯುವ ಭೀತಿಗೆ ಸಿಲುಕಿದೆ.